ರಾಹುಲ್​ ಗಾಂಧಿ ಮತ್ತು ಸಿದ್ದರಾಮಯ್ಯ 
ನ್ಯೂಸ್

ರಾಹುಲ್ ಗಾಂಧಿ ಅನರ್ಹ ವಿಚಾರ: ಬಿಜೆಪಿಯ ಪಾಪದ ಕೊಡ ತುಂಬಿದೆ ಎಂದು ಮಾಜಿ ಸಿಎಂ ಸಿದ್ದು ಆಕ್ರೋಶ

ಬೆಂಗಳೂರು: ಲೋಕಸಭಾ ಸದಸ್ಯ ಸ್ಥಾನದಿಂದ ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಅವರನ್ನು ಅನರ್ಹಗೊಳಿಸಿದ ವಿಚಾರವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿದ್ದು, ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.​

ರಾಹುಲ್ ಗಾಂಧಿಯವರು ಹೇಳುವ ಸತ್ಯವನ್ನು ಎದುರಿಸಲಾಗದ ನರೇಂದ್ರ ಮೋದಿ ಸರ್ಕಾರ ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿ, ತನ್ನ ಹೇಡಿತನವನ್ನು ಜಾಹೀರುಗೊಳಿಸಿದೆ. ಭಾರತದ ಸಂಸದೀಯ ಪ್ರಜಾಪ್ರಭುತ್ವದಲ್ಲಿ ಇದೊಂದು ಕರಾಳ ದಿನ. ಭಾರತೀಯ ಜನತಾ ಪಕ್ಷದ ಪಾಪದ ಕೊಡ ತುಂಬಿದೆ. ತನ್ನ ನಾಶದ ಶವದಪೆಟ್ಟಿಗೆಗೆ ತಾನೇ ಕೊನೆಯ ಮೊಳೆ ಬಡಿದಿದೆ. ಈ ಫ್ಯಾಸಿಸ್ಟ್ ನಡವಳಿಕೆಗೆ ಹೆದರುವ, ಹಿಂಜರಿಯುವ ಪ್ರಶ್ನೆಯೇ ಇಲ್ಲ. ಈ ಅನ್ಯಾಯದ ವಿರುದ್ಧ ನ್ಯಾಯಾಲಯ ಮತ್ತು ಬೀದಿಗಳಲ್ಲಿ ಹೋರಾಟ ಮಾಡುತ್ತೇವೆ ಎಂದಿದ್ದಾರೆ.

ಭಾರತದಲ್ಲಿ ಇಂದು ಅನಧಿಕೃತವಾಗಿ ತುರ್ತುಪರಿಸ್ಥಿತಿ ಘೋಷಿಸಲಾಗಿದೆ. ನರೇಂದ್ರ ಮೋದಿ, ಬಿಜೆಪಿ ಮತ್ತು ಎನ್​​​ಡಿಎ ಸರ್ಕಾರದ ವಿರುದ್ಧ ಮಾತನಾಡುವ ಎಲ್ಲರಿಗೂ ಎಚ್ಚರಿಕೆಯ ರೂಪದಲ್ಲಿ ರಾಹುಲ್ ಗಾಂಧಿಯವರ ಬಗ್ಗೆ ಕೇಂದ್ರ ಸರ್ಕಾರ ನಿರ್ಧಾರ ಕೈಗೊಂಡಿದೆ. ಇದು ಕೇವಲ ಕಾಂಗ್ರೆಸ್ ಪಕ್ಷ ಅಥವಾ ರಾಹುಲ್ ಗಾಂಧಿಯವರಿಗೆ ನೀಡಿರುವ ಬೆದರಿಕೆ ಅಲ್ಲ, ಅನ್ಯಾಯ-ಅಕ್ರಮದ ವಿರುದ್ಧ ದನಿ ಎತ್ತುವ ಎಲ್ಲ ಪ್ರಜಾಪ್ರಭುತ್ವ ಪ್ರೇಮಿಗಳಿಗೆ ಒಡ್ಡಿರುವ ಬೆದರಿಕೆ. ಪಕ್ಷ, ಪಂಥ ಮರೆತು ಎಲ್ಲರೂ ಒಟ್ಟಾಗಿ ಇದರ ವಿರುದ್ಧ ಪ್ರತಿಭಟನೆ ನಡೆಸಬೇಕಾಗಿದೆ ಎಂದು ಮಾಜಿ ಸಿಎಂ ಸಿದ್ದು ಕರೆ ನೀಡಿದ್ದಾರೆ.

ರಾಹುಲ್ ಗಾಂಧಿಯವರ ವಿರುದ್ಧ ಕೈಗೊಳ್ಳಲಾದ ಕ್ರಮದಿಂದ ಕಾಂಗ್ರೆಸ್ ಪಕ್ಷದ ಲಕ್ಷಾಂತರ ಕಾರ್ಯಕರ್ತರ ಮನಸ್ಸಿಗೆ ನೋವಾಗಿರುವುದು ನಿಜವಾದರೂ ಈ ಸಂದರ್ಭದಲ್ಲಿ ಸಂಯಮದಿಂದ ವರ್ತಿಸುವುದು ಅಗತ್ಯ. ಯಾರೂ ಕೂಡಾ ಸಿಟ್ಟು, ಆಕ್ರೋಶದ ಕೈಗೆ ಬುದ್ದಿ ಕೊಡದೆ ಶಾಂತಿಯುತ ಪ್ರತಿಭಟನೆ ನಡೆಸಬೇಕೆಂದು ಕೋರುತ್ತೇನೆ ಎಂದು ಸಿದ್ದರಾಮಯ್ಯು ಮನವಿ ಮಾಡಿದ್ದಾರೆ. (ದಿಗ್ವಿಜಯ ನ್ಯೂಸ್​)