ಬೆಂಗಳೂರು: ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬಾಕಿಯಿರುವ 90 ಲಕ್ಷ ಆಸ್ತಿಗಳಿಗೆ ಕಾಲಮಿತಿಯೊಳಗೆ ಇ-ಸ್ವತ್ತು ವಿತರಿಸಿ, ಆಸ್ತಿ ತೆರಿಗೆ ಸಂಗ್ರಹ ಅಭಿಯಾನ ಕೈಗೆತ್ತಿಕೊಳ್ಳಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಸೂಚಿಸಿದ್ದಾರೆ.
ವಿಕಾಸಸೌಧದಲ್ಲಿ ಇಲಾಖೆ ಅಧಿಕಾರಿಗಳೊಂದಿಗೆ ಸೋಮವಾರ ನಡೆಸಿದ ಅವರು, ಕಂದಾಯ ಜಮೀನಿನಲ್ಲಿ ಬಡಾವಣೆಗಳ ನಿರ್ಮಾಣಕ್ಕೆ ಅವಕಾಶ ನೀಡಕೂಡದು. ಹೊಸ ಬಡಾವಣೆಗಳ ನಿರ್ಮಾಣ ತಡೆಯಲು ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕು ಎಂದು ತಿಳಿಸಿದರು.
ಗ್ರಾಮೀಣ ಪ್ರದೇಶದಲ್ಲಿನ ಆಸ್ತಿಗಳ ನೋಂದಣಿಗೆ ಕಂದಾಯ ಇಲಾಖೆ ಇ-ಸ್ವತ್ತು ಕಡ್ಡಾಯಗೊಳಿಸಿದೆ. ಖಾತಾ ಇಲ್ಲದ ಬಹಳಷ್ಟು ಆಸ್ತಿಗಳ ಸಂಬಂಧ ಖೊಟ್ಟಿ ದಾಖಲೆಗಳನ್ನು ಸೃಷ್ಟಿಸಿ ನಿವೇಶನ ಹಾಗೂ ಮನೆಗಳನ್ನು ನೋಂದಣಿ ಮಾಡುತ್ತಿರುವ ವರದಿಗಳು ಬರುತ್ತಿವೆ.
ಇಂತಹ ಪ್ರಯತ್ನಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಗ್ರಾ.ಪಂ.ಗಳು ಮತ್ತು ನೋಂದಣಿ ಇಲಾಖೆ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಸಚಿವ ಪ್ರಿಯಾಂಕ್ ಖರ್ಗೆ ಸಲಹೆ ನೀಡಿದರು.
ಕಂದಾಯ, ನೋಂದಣಿ ಮತ್ತು ಮುದ್ರಾಂಕ ಇಲಾಖೆ, ನಗರಾಭಿವೃದ್ಧಿ, ಪೌರಾಡಳಿತ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆಗಳ ಜಂಟಿ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ, ಗ್ರಾ.ಪಂ. ವ್ಯಾಪ್ತಿಯಲ್ಲಿ 90 ಲಕ್ಷ ಆಸ್ತಿಗಳಿಗೆ ಇ-ಸ್ವತ್ತು ವಿತರಣೆ ಮಾಡದಿರುವುದನ್ನು ಗಂಭೀರವಾಗಿ ಪರಿಗಣಿಸಿದ್ದಾರೆ
ನಿಯಮಬದ್ಧವಾಗಿ ಆಸ್ತಿಗಳಿಗೆ ಇ-ಸ್ವತ್ತು ವಿತರಿಸುವ ಮೂಲಕ ಅಭಿಯಾನ ಮಾದರಿಯಲ್ಲಿ ತೆರಿಗೆ ಸಂಗ್ರಹಿಸಲು ಸೂಚಿಸಿದ್ದಾರೆ. ಸಿಎಂ ನೀಡಿದ ಸೂಚನೆ ಅನುಷ್ಠಾನಕ್ಕೆ ತರಲು ಎಲ್ಲ ಹಂತದ ಅಧಿಕಾರಿ ವರ್ಗ ಶ್ರಮಿಸಬೇಕು ಎಂದು ಸಚಿವ ಪ್ರಿಯಾಂಕ್ ಖರ್ಗೆ ತಾಕೀತು ಮಾಡಿದರು.