ನ್ಯೂಸ್

ಕೆಲಸ ಕೊಡಿಸುವ ಆಮಿಷವೊಡ್ಡಿ 200ಕ್ಕೂ ಹೆಚ್ಚು ಯುವತಿಯರಿಗೆ ಲೈಂಗಿಕ ಕಿರುಕುಳ; ಈ ಭಯಾನಕ ಗ್ಯಾಂಗ್​ ಎಸಗಿದ ಕೃತ್ಯ ಒಂದೆರಡಲ್ಲ

ಪಟ್ನಾ: ಇತ್ತೀಚಿನ ವರ್ಷಗಳಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಜನರನ್ನು ಮೋಸ ಮಾಡುತ್ತಿರುವ ಜಾಲಗಳು ಸಕ್ರಿಯವಾಗಿದ್ದು, ಜನರಿಗೆ ನಿರಂತರವಾಗಿ ಮೋಸ ಮಾಡುತ್ತಿರುತ್ತವೆ. ಇದೀಗ ಅದೇ ರೀತಿಯ ಘಟನೆಯೊಂದು ಬಿಹಾರದ ಮುಜಾಫರ್​ಪುರ ಜಿಲ್ಲೆಯಲ್ಲಿ ನಡೆದಿದ್ದು, ಉದ್ಯೋಗ ಕೊಡಿಸುವುದಾಗಿ ನಂಬಿಸಿ 200ಕ್ಕೂ ಹೆಚ್ಚು ಯುವತಿಯರ ಮೇಲೆ ಅತ್ಯಾಚಾರ ಎಸಗಿ ಅವರನ್ನು ಗುಂಪೊಂದು ಬಂಧಿಯಾಗಿ ಇರಿಸಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.

ಪ್ರಕರಣ ಸಂಬಂಧ 09 ಮಂದಿ ಆರೋಪಿಗಳು ತಲೆಮಾರಿಸಿಕೊಂಡಿದ್ದು, ಪೊಲೀಸರು ಯುವತಿಯರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇತ್ತ ಆರೋಪಿಗಳ ಪತ್ತೆಗೆ ಬಲೆ ಬೀಸಿರುವ ಪೊಲೀಸರು ವಿಶೇಷ ತಂಡಗಳನ್ನು ರಚಿಸಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಆರೋಪಿಗಳು ಸಂತ್ರಸ್ತೆಯರ ಮೇಲೆ ಹಲ್ಲೆ ನಡೆಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಜಿಲ್ಲಾ ಪೊಲೀಸ್​ ಉಪವರಿಷ್ಠಾಧಿಕಾರಿ ವಿನಿತಾ ಸಿನ್ಹಾ, ಆರೋಪಿಗಳು 2022ರಲ್ಲಿ ಸಾಮಾಜಿಕ ಜಾಲತಾಣದಲ್ಲಿ ಉದ್ಯೋಗದ ಜಾಹೀರಾತುಗಳನ್ನು ನೀಡಿ, ಮುಜಾಫರ್‌ಪುರಕ್ಕೆ ಭೇಟಿ ನೀಡುವಂತೆ ತಿಳಿಸಿದ್ದರು. ಇದನ್ನು ನೋಡಿ ಉದ್ಯೋಗ ಸಿಗುತ್ತದೆ ಎಂದು ಬಂದ ಆಕಾಂಕ್ಷಿಗಳನ್ನು ಆರೋಪಿಗಳು ಕೋಣೆ ಒಂದರಲ್ಲಿ ಕೂಡಿ ಹಾಕುತ್ತಿದ್ದರು. ಅಲ್ಲಿಂದ ಅವರನ್ನು ಅಜ್ಞಾತ ಸ್ಥಳಕ್ಕೆ ಸ್ಥಳಾಂತರಿಸುತ್ತಿದ್ದರು.

ಬಳಿಕ ಆರೋಪಿಗಳು ತಿಂಗಳುಗಳಗಟ್ಟಲೇ ಅವರ ಮೇಲೆ ಅತ್ಯಾಚಾರ ಎಸಗಿದ್ದಾರೆ. ಬಳಿಕ ಗರ್ಭಪಾತ ಮಾಡಿಸಿಕೊಳ್ಳುವಂತೆ ಬಲವಂತ ಮಾಡಿದ್ದಾರೆ. ಕೆಲವು ಯುವತಿಯರು ತಪ್ಪಿಸಿಕೊಂಡಿದ್ದು, ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದಾರೆ. ಮೊದಲಿಗೆ ಸ್ಥಳೀಯ ಪೊಲೀಸರು ದೂರು ದಾಖಲಿಸಿಕೊಳ್ಳಲು ನಿರಾಕರಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು, ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್​ ಉಪವರಿಷ್ಠಾಧಿಕಾರಿ ವಿನಿತಾ ಸಿನ್ಹಾ ತಿಳಿಸಿದ್ದಾರೆ.