ಪುಣೆ: ಕುಖ್ಯಾತ ಗ್ಯಾಂಗ್ಸ್ಟರ್ ಒಬ್ಬನನ್ನು ಆತನ ಸಹಚರರೇ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದ ಪುಣೆ ನಗರದಲ್ಲಿ ನಡೆದಿದೆ. ಶರದ್ ಮೊಹೋಲ್ (40) ಹತ್ಯೆಯಾದ ವ್ಯಕ್ತಿ ಎಂದು ತಿಳಿದು ಬಂದಿದೆ.
ಶರದ್ ಹತ್ಯೆಗೆ ಸಂಬಂಧಿಸಿದಂತೆ ಎಂಟು ಮಂದಿ ಆರೋಪಿಗಳನ್ನು ಬಂಧಿಸಿರುವ ಪೊಲೀಸರು ಮೂರು ಪಿಸ್ತೂಲ್ ಸೇರಿದಂತೆ ಹಲವು ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಹತ್ಯೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಕಾನೂನು ಸುವ್ಯವಸ್ಥೆ ಕುರಿತು ಹಲವು ಪ್ರಶ್ನೆಗಳನ್ನು ನೆಟ್ಟಿಗರು ಎತ್ತಿದ್ದಾರೆ.
ಘಟನೆ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು, ಶುಕ್ರವಾರ ಮಧ್ಯಾಹ್ನ 1 ಘಂಟೆ ಸುಮಾರಿಗೆ ಹತ್ಯೆ ನಡೆದಿದ್ದು, ನಾಲ್ವರು ದುಷ್ಕರ್ಮಿಗಳು ಅವರ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ. ಒಂದು ಗುಂಡು ಎದ್ದೆಗೆ ಬಿದ್ದಿದ್ದು, ಇನ್ನೆರಡು ಗುಂಡು ಬಲ ಭುಜ ಹೊಕ್ಕಿವೆ. ಕೂಡಲೇ ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಡಕಾಯಿತಿ, ಕೊಲೆ ಸೇರಿದಂತೆ ಹಲವು ಪ್ರಕರಣಗಳಲ್ಲಿ ಶರದ್ ಮೊಹೋಲ್ ಪ್ರಮುಖ ಆರೋಪಿಯಾಗಿದ್ದ. ಜಮೀನು ಮತ್ತು ಹಣಕಾಸಿನ ವಿಚಾರವಾಗಿ ಶರದ್ ಹಾಗೂ ಆತನ ಸಹಚರರ ನಡುವೆ ಮನಸ್ತಾಪ ಉಂಟಾಗಿತ್ತು. ಇದೇ ಕಾರಣಕ್ಕೆ ಹತ್ಯೆ ನಡೆದಿರಬಹುದು ಎಂದು ಹೇಳಲಾಗಿದೆ. ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಲಾಗಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಮಾಹಿತಿಯನ್ನು ನೀಡಲಾಗುವುದು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.