ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಮೂವರು ಆರೋಪಿಗಳಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಆರೋಪಿಗಳಾಗಿರುವ ಅಮಿತ್ ದಿಗ್ವೇಕರ್, ಎಚ್.ಎಲ್.ಸುರೇಶ್ ಮತ್ತು ಕೆ.ಟಿ.ನವೀನ್‌ಕುಮಾರ್ ಸಲ್ಲಿಸಿದ ಅರ್ಜಿಯನ್ನು ಕಲಬುರಗಿ ಪೀಠದಲ್ಲಿರುವ ನ್ಯಾಯಮೂರ್ತಿ ಎಸ್.ವಿಶ್ವಜಿತ್ ಶೆಟ್ಟಿ ಅವರ ಏಕಸದಸ್ಯ ಪೀಠ ಪುರಸ್ಕರಿಸಿದೆ.
ಪ್ರಕರಣದಲ್ಲಿ ಹನ್ನೊಂದನೆಯ ಆರೋಪಿ ಮೋಹನ್ ನಾಯಕ್‌ಗೆ ಈಗಾಗಲೇ ಜಾಮೀನು ಮಂಜೂರಾಗಿದೆ. ಕಳೆದ ಆರು ವರ್ಷದಿಂದ ಆರೋಪಿಗಳು ವಿಚಾರಣಾಧೀನ ಕೈದಿಗಳಾಗಿ ಜೈಲಿನಲ್ಲಿದ್ದಾರೆ. ವಿಚಾರಣೆ ಪೂರ್ಣಗೊಳ್ಳದೆ ಸುದೀರ್ಘವಾಗಿ ಜೈಲಿನಲ್ಲಿಡುವಂತಿಲ್ಲ ಎಂಬುದಾಗಿ ಹಲವು ತೀರ್ಪುಗಳಿವೆ ಎಂದು ಅಭಿಪ್ರಾಯ ಪಟ್ಟಿರುವ ಪೀಠ, ಜಾಮೀನು ಮಂಜೂರು ಮಾಡಿದೆ.
ಈ ಹಿಂದೆ ನಡೆದ ವಿಚಾರಣೆ ವೇಳೆ, ಪ್ರಕರಣದ ಹನ್ನೊಂದನೆ ಆರೋಪಿ ಮೋಹನ್ ನಾಯಕ್‌ಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿರುವುದನ್ನು ಪರಿಗಣಿಸಿ ತಮಗೂ ಮಂಜೂರು ಮಾಡಬೇಕೆಂದು ಎಲ್ಲ ಅರ್ಜಿದಾರರ ಪರ ವಕೀಲರು ವಾದ ಮಂಡಿಸಿದ್ದರು.