ನ್ಯೂಸ್

ಕರೊನಾದಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ಉಚಿತ ಶಿಕ್ಷಣ ನೀಡಿ; ಪ್ರಧಾನಿಗೆ ಸೋನಿಯಾ ಗಾಂಧಿ ಪತ್ರ

ನವದೆಹಲಿ; ಕರೊನಾ‌ ಸೋಂಕಿನಿಂದ ತಂದೆ ತಾಯಿ ಪೋಷಕರನ್ನು ಕಳೆದುಕೊಂಡ ಅನಾಥ ಮಕ್ಕಳಿಗೆ ಉಚಿತ ಶಿಕ್ಷಣ ನೀಡಬೇಕು ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಕೇಂದ್ರ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ಗುರುವಾರ ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿರುವ ಅವರು, ಕರೊನಾದಿಂದ ಸಾವಿರಾರು ಮಕ್ಕಳು ದೇಶದಲ್ಲಿ ತಮ್ಮ ತಂದೆ ತಾಯಿಯನ್ನು ಕಳೆದುಕೊಂಡು ಬೀದಿಗೆ ಬಿದ್ದಿದ್ದಾರೆ. ಇವರನ್ನು ನೋಡಿಕೊಳ್ಳುವ ಜವಾಬ್ದಾರಿ ಸರ್ಕಾರದ್ದೇ ಆಗಿದೆ. ನವೋದಯ ವಿದ್ಯಾಲಯಗಳ ಮೂಲಕ ಇಂತಹ ಮಕ್ಕಳಿಗೆ ಉಚಿತ ಶಿಕ್ಷಣ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಇನ್ನೊಂದೆಡೆ ಅನಾಥ ಮಕ್ಕಳ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೂಡ ಆತಂಕ ವ್ಯಕ್ತಪಡಿಸಿದ್ದಾರೆ. ಕೋವಿಡ್ ನಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ಉಚಿತ ಶಿಕ್ಷಣ ನೀಡುವುದು ಲೇಸು ಎಂದಿದ್ದಾರೆ.

ಇನ್ನೊಂದೆಡೆ ಕೋವಿಡ್ ನಿಂದ ಪೋಷಕರನ್ನು ಕಳೆದುಕೊಳ್ಳುತ್ತಿರುವರ ಸಂಖ್ಯೆ ಹೆಚ್ಚಾಗಿದೆ. ಕೆಲವು ಮಕ್ಕಳ ಕಳ್ಳಸಾಗಣೆ ಮಾಡುವವರು ಇದನ್ನೇ ಬಂಡವಾಳ ಮಾಡಿಕೊಂಡು ಮಕ್ಕಳನ್ನು ದತ್ತು ತೆಗೆದುಕೊಳ್ಳುತ್ತೇವೆ ಎನ್ನುವರ ಬಗ್ಗೆ ಎಚ್ಚರದಿಂದ ಇರಬೇಕು ಎಂದು ಕೇಂದ್ರ ಸರ್ಕಾರ ಎಚ್ಚರಿಸಿದೆ.