ಬೆಂಗಳೂರು: ರಾಜ್ಯ ಸರ್ಕಾರ ವರ್ಷದ ಸಂಭ್ರಮದಲ್ಲಿದೆ. ಆದರೆ ಕೇಂದ್ರ ಸರ್ಕಾರ ನೀಡಿರುವ ಬೆಳೆ ಪರಿಹಾರ ಹಣವು ಸಾಲಕ್ಕೆ ಜಮೆ ಆಗುತ್ತಿದೆ. ಇದು ಈ ಸರ್ಕಾರದ ವೈಖರಿ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಟೀಕಿಸಿದರು.
ರೈತರು ಬರದಿಂದ ಕಂಗೆಟ್ಟು ಸಂಕಷ್ಟದಲ್ಲಿದ್ದಾರೆ. ರೈತರಿಗೆ ಈ ಸರ್ಕಾರದ ಕೊಡುಗೆ ಏನೂ ಇಲ್ಲ. ರಾಜ್ಯದಲ್ಲಿ ರೈತರ ಆತ್ಮಹತ್ಯೆಗಳು ಆರಂಭ ಆಗಿವೆ. ಬರ ಪರಿಹಾರ ಹಣವನ್ನು ಸಾಲಕ್ಕೆ ವಜಾ ಮಾಡುತ್ತಿದ್ದಾರೆ. ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನ ನೀಡಿಲ್ಲ. ಹಲವು ಇಲಾಖೆಗಳಲ್ಲಿ ವೇತನ ನೀಡಿಲ್ಲ ಎಂದು ತರಾಟೆಗೆ ತೆಗೆದುಕೊಂಡರು.
ರಾಜ್ಯದ ನೀರಾವರಿ ಯೋಜನೆಗಳ ಪರಿಸ್ಥಿತಿ ಏನಾಗಿದೆ? ರಸ್ತೆಯ ಪರಿಸ್ಥಿತಿ ಹೇಗಾಗಿದೆ? ಒಂದು ವರ್ಷದಿಂದ ಬ್ರ್ಯಾಂಡ್ ಬೆಂಗಳೂರು ಏನಾಗಿದೆ? ಮಳೆ ಬಂದು ಬೆಂಗಳೂರಿನ ಪರಿಸ್ಥಿತಿ ಏನಾಗಿದೆ ಎನ್ನುವುದನ್ನು ಈಗ ಕಣ್ಣಾರೆ ನೋಡುತ್ತಿದ್ದೇವೆ. ಎರಡು ದಿನ ಸುರಿದ ಮಳೆಗೆ ಬೆಂಗಳೂರು ಜನರು ನರಕ ನೋಡುತ್ತಿದ್ದಾರೆ. ಮನೆಗಳಿಗೆ ಬೀಗ ಹಾಕಿ ಹೋಟೆಲ್ ಗೆ ಹೋಗಿ ಜೀವನ ಮಾಡುತ್ತಿದ್ದಾರೆ ಎಂದು ಕುಮಾರಸ್ವಾಮಿ ಹರಿಹಾಯ್ದರು.
ಸರ್ಕಾರ ಹೇಗೆ ಕೆಲಸ ಮಾಡುತ್ತಿದೆ ಎನ್ನುವುದಕ್ಕೆ ಎಂಟು ಪ್ರಮುಖ ಇಲಾಖೆಗಳಲ್ಲಿ 35,471 ಕಡತಗಳು ವಿಲೇವಾರಿ ಆಗಿಲ್ಲ. ಇದು ಸರ್ಕಾರದ ಸಾಧನೆಯೇ? ಎಂದು ತರಾಟೆಗೆ ತೆಗೆದುಕೊಂಡರು.
ವರ್ಗಾವಣೆ ದಂಧೆ ನಿಂತಿಲ್ಲ. ವರ್ಗಾವಣೆಗೆ ಸಿಎಸ್‌ಆರ್ ಫಂಡ್ ಹೆಸರನ್ನು ಸಂಜ್ಞೆಯಾಗಿ ಬಳಕೆ ಮಾಡಲಾಗುತ್ತಿದೆ ಎಂದು ಆರೋಪ ಮಾಡಿದರು.
ನಾನು ಕೂಡ ಸರ್ಕಾರ ನಡೆಸಿದ್ದೇನೆ. ನಾನು ಮಾಡದ ಕೆಲಸದ ಬಗ್ಗೆ ಜಾಹೀರಾತು ಕೊಟ್ಟು ಪ್ರಚಾರ ಪಡೆದಿಲ್ಲ. ಜನರ ತೆರಿಗೆ ಹಣವನ್ನು ದುರ್ಬಳಕೆ ಮಾಡಿಕೊಂಡಿಲ್ಲ. ಇದು ಜಾಹೀರಾತು ಸರ್ಕಾರ! ಜಾಹಿರಾತು ಕೊಟ್ಟಿದ್ದೇ ಈ ಸರ್ಕಾರದ ಸಾಧನೆ ಎಂದು ಕುಮಾರಸ್ವಾಮಿ ಕುಟುಕಿದರು.
ಮಾಜಿ ಸಚಿವರಾದ ಬಂಡೆಪ್ಪ ಕಾಶೆಂಪುರ, ಸಾ.ರಾ.ಮಹೇಶ್, ಜೆಡಿಎಸ್ ಬೆಂಗಳೂರು ನಗರ ಘಟಕದ ಅಧ್ಯಕ್ಷ ಎಚ್.ಎಂ.ರಮೇಶ್ ಗೌಡ ಉಪಸ್ಥಿರಿದ್ದರು.