ತುಮಕೂರು: ರಾಜ್ಯದ ಜನರು ಪ್ರತಿಪಕ್ಷಗಳ ಸುಳ್ಳುಗಳಿಗೆ ಕಿವಿಗೊಡಬೇಡಿ.ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿ ಮಾಡಿದೆ. ಜತೆಗೆ ಅಭಿವೃದ್ದಿ ಕೆಲಸಗಳಿಗೂ ಒತ್ತು ಕೊಟ್ಟಿದೆ. ಇದಕ್ಕೆ ರಾಜ್ಯದ ಜನರೇ ಸಾಕ್ಷಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್(DK Shivakumar) ಹೇಳಿದರು.
ಸೋಮವಾರ(ಡಿ.02) ನಡೆದ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕೆಲವರು ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ ಎಂದು ಅನವಶ್ಯಕ ಚರ್ಚೆ ಮಾಡುತ್ತಿದ್ದಾರೆ. ಸುಮಾರು 250 ಕೋಟಿಯಷ್ಟು ಹಣ ಗ್ಯಾರಂಟಿ ಯೋಜನೆಗಳ ಮೂಲಕ ಒಂದೊಂದು ವಿಧಾನಸಭಾ ಕ್ಷೇತ್ರಗಳಿಗೆ ತಲುಪುತ್ತಿದೆ. ಗೃಹಲಕ್ಷ್ಮಿ, ಶಕ್ತಿ, ಗೃಹಜ್ಯೋತಿ, ಅನ್ನಭಾಗ್ಯ ಯೋಜನೆಗಳ ಮೂಲಕ ಮಹಿಳೆಯರ ಸಬಲೀಕರಣವಾಗುತ್ತಿದೆ. ಇದು ಅಭಿವೃದ್ದಿಯಲ್ಲವೇ? ಎಂದು ಪ್ರಶ್ನಿಸಿದರು.
ತುಮಕೂರು ಜಿಲ್ಲೆಯ ಲಂಬಾಣಿ ಜನಾಂಗಗಳಿಗೆ 94ಡಿ ಅಡಿಯಲ್ಲಿ ಅವರು ವಾಸವಿರುವ ಜಮೀನುಗಳನ್ನು ಸಕ್ರಮ ಮಾಡಿ, ಹತ್ತಾರು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಕೆಲಸವನ್ನು ಕೈಗೂಡಿಸಿದೆ. ಈಗಾಗಲೇ ಎತ್ತಿನಹೊಳೆ ಯೋಜನೆಗೆ ನಮ್ಮ ಸರ್ಕಾರ ಉದ್ಘಾಟಿಸಿದೆ. ಮಧ್ಯದಲ್ಲಿ ಒಂದಷ್ಟು ಅಡೆತಡೆಗಳಿದ್ದು ಅದನ್ನು ಆದಷ್ಟು ಬೇಗ ನಿವಾರಿಸಿ ತುಮಕೂರು ಜಿಲ್ಲೆಗೆ ನೀರು ಕೊಡುತ್ತೇವೆ ಎಂದರು.
ಜನರ ಬದುಕಿಗಾಗಿ ಐದು ಗ್ಯಾರಂಟಿ ಯೋಜನೆಗಳ ಮೂಲಕ 56 ಸಾವಿರ ಕೋಟಿ ಹಣವನ್ನು ವಿನಿಯೋಗ ಮಾಡುತ್ತಿದ್ದೇವೆ. ನಮ್ಮ ಗ್ಯಾರಂಟಿ ಯೋಜನೆಗಳ ಶಕ್ತಿ ಇಡೀ ದೇಶಕ್ಕೆ ಪರಿಚಿತವಾಗಿದೆ. ದೇಶದ ಒಂದಷ್ಟು ರಾಜ್ಯಗಳಲ್ಲಿ ಇರುವ ಬಿಜೆಪಿ ರಾಜ್ಯ ಸರ್ಕಾರಗಳು ನಮ್ಮ ಯೋಜನೆಗಳನ್ನು ನಕಲು ಮಾಡಿ ಜಾರಿಗೆ ತರುತ್ತಿರುವುದು ಸಂತೋಷದ ಸಮಾಚಾರ ಎಂದರು.
ನಾನು ಮತ್ತು ಮುಖ್ಯಮಂತ್ರಿಗಳು ಫಲಾನುಭವಿಗಳ ಜೊತೆ ಮಾತನಾಡುವಾಗ ಒಬ್ಬ ಪಂಚಾಯಿತಿ ಸದಸ್ಯನು ʼನನ್ನ ಕ್ಷೇತ್ರದಲ್ಲಿ ಸುಮಾರು 5 ಕೋಟಿ ಮೊತ್ತದ ನರೇಗಾ ಕೆಲಸಗಳನ್ನು ಮಾಡಿಸಿದ್ದೇನೆʼ ಎಂದು ಹೇಳಿದ. ಈ ನರೇಗಾ ಯೋಜನೆ ನಮ್ಮ ಕಾಂಗ್ರೆಸ್ ಕೊಡುಗೆ. ಗ್ಯಾರಂಟಿ ಯೋಜನೆಗಳಿಂದ ಮನೆಗಳನ್ನು ಕಾಂಗ್ರೆಸ್ ಇಬ್ಬಾಗ ಮಾಡುತ್ತಿದೆ ಎಂದು ಪ್ರತಿಪಕ್ಷಗಳು ಟೀಕೆ ಮಾಡುತ್ತಿದ್ದವು. ಅದಕ್ಕೆಲ್ಲ ಉತ್ತರ ಸಿಕ್ಕಿದೆ, ಸಿಗಲಿದೆ ಎಂದು ಹೇಳಿದರು.
“ಬೆಂಗಳೂರು ನಂತರ ಹಾಗೂ ಅದಕ್ಕೆ ಪರ್ಯಾಯವಾಗಿ ಬೆಳೆಯುವಂತಹ ಲಕ್ಷಣಗಳು ತುಮಕೂರು ಜಿಲ್ಲೆಗಿದೆ ಎನ್ನುವ ಅಭಿಪ್ರಾಯವನ್ನು ಜಿ.ಪರಮೇಶ್ವರ್ ಅವರು ವ್ಯಕ್ತಪಡಿಸಿದ್ದಾರೆ. ನನಗೂ ಈ ಜಿಲ್ಲೆಗೂ ಆಧ್ಯಾತ್ಮಿಕವಾದ ಸಂಬಂಧವಿದೆ. ಶೈಕ್ಷಣಿಕವಾಗಿ, ಸಾಂಸ್ಕೃತಿಕವಾಗಿ ಈ ಜಿಲ್ಲೆ ಶ್ರೀಮಂತವಾಗಿದೆ. ತುಮಕೂರು ಜಿಲ್ಲೆಯ ಎಲ್ಲಾ ಶಾಸಕರನ್ನು ಗೃಹಸಚಿವರಾದ ಪರಮೇಶ್ವರ್ ಅವರು ವಿಶ್ವಾಸಕ್ಕೆ ತೆಗೆದುಕೊಂಡು ಅಭಿವೃದ್ಧಿ ಕಾರ್ಯಗಳಿಗೆ ಮುನ್ನುಡಿ ಬರೆದಿದ್ದಾರೆ. ಬೆಂಗಳೂರಿನಿಂದ 70 ಕಿ.ಮೀ ದೂರವಿರುವ ಜಿಲ್ಲೆಯನ್ನು ಪರಮೇಶ್ವರ್ ಅವರು ಅಭಿವೃದ್ದಿ ಪಥದಲ್ಲಿ ತೆಗೆದುಕೊಂಡು ಹೋಗಲು ಶ್ರಮಿಸುತ್ತಿದ್ದಾರೆ” ಎಂದು ತಿಳಿಸಿದರು.