ನ್ಯೂಸ್

ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ..ಹೈಕೋರ್ಟ್ ನಲ್ಲಿ 'ಕೇವಿಯಟ್' ಸಲ್ಲಿಕೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ )ದಲ್ಲಿ ಅಕ್ರಮವಾಗಿ ಸೈಟ್ ಪಡೆದ ಆರೋಪದಲ್ಲಿ ಅವರ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿದ ಬೆನ್ನಲ್ಲೇ ಹೈಕೋರ್ಟ್ ನಲ್ಲಿ ಕೇವಿಯಟ್ ಅರ್ಜಿ ದಾಖಲಾಗಿದೆ.

ಬೆಂಗಳೂರು ನಾಗರಭಾವಿಯ ವಕೀಲ ಎಸ್.ಪಿ.ಪ್ರದೀಪ್ ಕುಮಾರ್ ಶನಿವಾರ ಹೈಕೋರ್ಟ್​ನಲ್ಲಿ ಕೇವಿಯಟ್ ಅರ್ಜಿ ಸಲ್ಲಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ನೀಡಿರುವ ಅನುಮತಿ ರದ್ದುಪಡಿಸಬೇಕೆಂದು ಹೈಕೋರ್ಟ್ ಮೆಟ್ಟಿಲೇರಿದರೆ ಆಗ ನಮ್ಮ ವಾದ ಆಲಿಸದೆ ಯಾವುದೇ ಆದೇಶ ಮಾಡಬಾರದು ಎಂದು ಕೇವಿಯೆಟ್ ಅರ್ಜಿದಾರರು ನ್ಯಾಯಾಲಯವನ್ನು ಕೋರಿದ್ದಾರೆ.

ಕೇವಿಯಟ್ ಸಲ್ಲಿಕೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರದೀಪ್ ಕುಮಾರ್, ಸಿದ್ದರಾಮಯ್ಯ ಹೈಕೋರ್ಟ್‌ ಮೆಟ್ಟಿಲೇರಿದರೆ ಕೇವಿಯಟ್ ಹಾಕಿರದಿದ್ದರೆ ಅವರಿಗೆ ಕಾನೂನು ರಕ್ಷಣೆ ಸಿಗಬಹುದು. ಆದರೆ ತನಿಖೆ ನಡೆದು ನಿಜ ಏನೆಂದು ಹೊರಬರಬೇಕು, ತಪ್ಪಾಗಿದ್ದರೆ ಶಿಕ್ಷೆಯಾಗಬೇಕು. ಹೀಗಾಗಿ ಕೇವಿಯಟ್ ಸಲ್ಲಿಸಿದ್ದೇನೆ ಎಂದಿದ್ದಾರೆ.

ಮುಡಾ ಹಗರಣದವನ್ನು ತನಿಖೆಗೆ ಒಪ್ಪಿಸಲು ಆದೇಶಿಬೇಕು ಎಂದು ಕೋರಿ ಎಸ್.ಪಿ.ಪ್ರದೀಪ್ ಕುಮಾರ್ ಈಗಾಗಲೇ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನಲ್ಲಿ ಖಾಸಗಿ ದೂರು ದಾಖಲಿಸಿದ್ದಾರೆ.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ.ಪಾರ್ವತಿ ಅವರು ಅಕ್ರಮವಾಗಿ 14 ನಿವೇಶನ ಪಡೆದಿದ್ದಾರೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್ ಅವರು ಸಿದ್ಧರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ.