ನ್ಯೂಸ್

ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸಿದ್ದರಾಮಯ್ಯ; 20ರ ಮಧ್ಯಾಹ್ನ 12.30 ಕ್ಕೆ ಹೊಸ ಸರ್ಕಾರ ಅಸ್ತಿತ್ವಕ್ಕೆ

ಬೆಂಗಳೂರು: ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ರಾಜ್ಯಪಾಲ ಥಾವರ್​ಚಂದ್ ಗೆಹ್ಲೋಟ್​ ಅವರನ್ನು ಭೇಟಿಯಾಗಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದರು. ಈ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಉಪಸ್ಥಿತರಿದ್ದರು.

ಕಂಠೀರವ ಕ್ರೀಡಾಂಗಣದಲ್ಲಿ ಶನಿವಾರ ಮಧ್ಯಾಹ್ನ 12.30ಕ್ಕೆ ಸಿದ್ದರಾಮಯ್ಯ ಎರಡನೇ ಬಾರಿಗೆ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಜತೆಗೆ ಉಪಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಕೂಡಾ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ನಡೆದ ಶಾಸಕಾಂಗ ಸಭೆಯಲ್ಲಿ ಸಿದ್ದರಾಮಯ್ಯ ಮಾತನಾಡುತ್ತಾ, ಪಕ್ಷದ ಶಾಸಕರಿಗೆ ಧನ್ಯವಾದ ತಿಳಿಸಿದರು. ಅಧಿಕಾರ ವಹಿಸುತ್ತಿದ್ದಂತೆ ಘೋಷಿಸಿರುವ ಐದು ಗ್ಯಾರೆಂಟಿ ಯೋಜನೆಗಳನ್ನ ಅನುಷ್ಠಾನಕ್ಕೆ ತರುತ್ತೇವೆ. ಇದರಲ್ಲಿ ಯಾವುದೇ ಗೊಂದಲ ಬೇಡ ಎಂದು ಹೇಳಿದರು.

ನನ್ನ ಮೇಲೆ ವಿಶ್ವಾಸ ಇಟ್ಟಿರುವ ಎಲ್ಲರಿಗೂ ಧನ್ಯವಾದಗಳು. ಪ್ರಾಮಾಣಿಕವಾಗಿ ನಂಬಿಕೆ ಉಳಿಸಿಕೊಂಡು, ನೀಡಿರುವ ಭರವಸೆ ಈಡೇರಿಸುತ್ತೇನೆ. ಇದಕ್ಕೆ ಎಲ್ಲರೂ ಸಹಕಾರ ಕೊಡಿ ಎಂದು ಸಿದ್ದರಾಮಯ್ಯ ಶಾಸಕರಿಗೆ ಮನವಿ ಮಾಡಿದರು.