ನ್ಯೂಸ್

ರಾಜ್ಯದ ಪ್ರತೀ ಕುಟುಂಬಗಳಿಗೆ ತಿಂಗಳಿಗೆ 4-5 ಸಾವಿರ ರೂ. ಅನುಕೂಲ ಆಗುತ್ತಿದೆ: ಸಿಎಂ

ಬೆಂಗಳೂರು: ವಿಧಾನಸೌಧ ಆವರಣದಲ್ಲಿ ಸಾರಿಗೆ ಇಲಾಖೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 100 ನೂತನ ಬಿಎಂಟಿಸಿ ಬಸ್​ಗಳನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಇಂದು ಬೆಂಗಳೂರು ನಗರದ ಜನತೆಯ ಅನುಕೂಲಕ್ಕಾಗಿ ಮೊದಲ ಹಂತದಲ್ಲಿ 100 ನೂತನ ಬಿಎಂಟಿಸಿ ಬಸ್​ಗಳನ್ನು ಲೋಕಾರ್ಪಣೆ ಮಾಡಿದ್ದೇವೆ. ಒಟ್ಟು 840 ನೂತನ‌ ಬಸ್‌ಗಳು ಬಿಎಂಟಿಸಿಗೆ ಸೇರಲಿವೆ ಎಂದು ಹೇಳಿದರು.

"ಬೆಂಗಳೂರು ನಗರದಲ್ಲಿ ಜನಸಂಖ್ಯೆ ಹೆಚ್ಚುತ್ತಿದೆ. ಇಲ್ಲಿನ ಹೆಚ್ಚುತ್ತಿರುವ ಶ್ರಮಿಕ ವರ್ಗಗಳಿಗೆ ಅನುಕೂಲ ಮಾಡುವ ಉದ್ದೇಶದಿಂದ ನೂತನ‌ ಬಸ್​ಗಳನ್ನು ಬಿಎಂಟಿಸಿಗೆ ಸೇರ್ಪಡೆಗೊಳಿಸುವ ಜತೆಗೆ ಹಿಂದಿನ ಸರ್ಕಾರ ಸ್ಥಗಿತಗೊಳಿಸಿದ್ದ ಇಂದಿರಾ ಕ್ಯಾಂಟೀನ್​ಗಳನ್ನು ಆರಂಭಿಸಿದ್ದಲ್ಲದೆ, ನೂತನವಾಗಿ ಇನ್ನಷ್ಟು ಕ್ಯಾಂಟೀನ್​ಗಳನ್ನು ಶುರುಮಾಡಲಿದ್ದೇವೆ. ಇದೇ ಶ್ರಮಿಕ ವರ್ಗದ ಅನುಕೂಲಕ್ಕಾಗಿ ಶಕ್ತಿ ಯೋಜನೆ ಸೇರಿದಂತೆ ಐದೂ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿ ಯಶಸ್ವಿಯಾಗಿ ಮುಂದುವರೆಸುತ್ತಿದ್ದೇವೆ. ನಮ್ಮ ಸರ್ಕಾರ ಇರುವವರೆಗೂ ಗ್ಯಾರಂಟಿ ಯೋಜನೆಗಳು ಮುಂದುವರೆಯಲಿವೆ" ಎಂದರು.

"ಬಡವರ ಮತ್ತು ಮಧ್ಯಮ ವರ್ಗದ ವಿರೋಧಿಯಾಗಿರುವ ಬಿಜೆಪಿ ಈ ಗ್ಯಾರಂಟಿ ಯೋಜನೆಗಳ ವಿರುದ್ಧ ಅಪಪ್ರಚಾರ ಮಾಡುತ್ತಿದೆ. ಈ ಅಪಪ್ರಚಾರಕ್ಕೆ ಕಿವಿಗೊಡಬೇಡಿ. ಈ ಗ್ಯಾರಂಟಿಗಳು ಇನ್ನಷ್ಟು ಪರಿಣಾಮಕಾರಿಯಾಗಿ ಜಾರಿಯಾಗಲಿವೆ. ಗೃಹಲಕ್ಷ್ಮಿ ಹಣದಿಂದ ಸಾವಿರಾರು ಕುಟುಂಬಗಳು ನಾನಾ ರೀತಿಯ ಅನುಕೂಲಗಳನ್ನು ಒದಗಿಸಿಕೊಳ್ಳುತ್ತಿರುವ ಬಗ್ಗೆ ಪ್ರತಿದಿನ ಮಾಧ್ಯಮಗಳು ತೋರಿಸುತ್ತಿವೆ" ಎಂದು ಹೇಳಿದರು.

"ನಾವು ಬಡವರಿಗೆ ಅಕ್ಕಿ ಕೊಡುವ ಯೋಜನೆಗೆ ಮುಂದಾದರೆ ಕೇಂದ್ರ ಸರ್ಕಾರ ನಮಗೆ ಅಕ್ಕಿ ಕೊಡದೆ ತೊಂದರೆ ನೀಡಿತು. ಆದರೆ ನಾವು ಅಕ್ಕಿಯ ಬದಲಿಗೆ, ಅಕ್ಕಿಯ ಹಣವನ್ನು ಜನರಿಗೆ ನೀಡಿ ನುಡಿದಂತೆ ನಡೆದಿದ್ದೇವೆ.‌ ರಾಜ್ಯದ ಪ್ರತೀ ಕುಟುಂಬಗಳಿಗೆ ಪ್ರತೀ ತಿಂಗಳಿಗೆ 4-5 ಸಾವಿರ ರೂಪಾಯಿ ಅನುಕೂಲ ಆಗುತ್ತಿದೆ. ಇದರಿಂದ ಲಕ್ಷಾಂತರ ಕುಟುಂಬಗಳಿಗೆ ಆರ್ಥಿಕ ಶಕ್ತಿ ನೀಡಿದ್ದೇವೆ. ನಮ್ಮ ಸರ್ಕಾರ ಬಂದ ಮೇಲೆ ನಾಲ್ಕು ಬಾರಿ ಹೊಸ ಬಸ್​ಗಳನ್ನು‌ ಖರೀದಿಸಿ ಸವಲತ್ತು ಒದಗಿಸಿದ್ದೇವೆ" ಎಂದು ಸಿಎಂ ನುಡಿದರು.