ಬೆಟ್ಟದಪುರ ಸಮೀಪದ ದೊಡ್ಡಕಮರಹಳ್ಳಿಯ ಸರ್ಕಾರಿ ಪ್ರೌಢಶಾಲೆಯಲ್ಲಿ 2006-07ನೇ ಸಾಲಿನ ವಿದ್ಯಾರ್ಥಿಗಳಿಂದ ಆಯೋಜಿಸಿದ ಗುರುವಂದನಾ ಕಾರ್ಯಕ್ರಮದಲ್ಲಿ ಹಿರಿಯ ಶಿಕ್ಷಕರನ್ನು ಸನ್ಮಾನಿಸಿ ಗೌರವಿಸಲಾಯಿತು.
ಬೆಟ್ಟದಪುರ: ಶಿಕ್ಷಕರು ನೀಡುವ ಶಿಕ್ಷಣ, ಸಂಸ್ಕಾರ ಹಾಗೂ ಮಾರ್ಗದರ್ಶನವು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಮಹತ್ವದ ಪಾತ್ರವಹಿಸುತ್ತದೆ ಎಂದು ಬೆಟ್ಟದಪುರ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ಗೊರಹಳ್ಳಿ ಜಗದೀಶ್ ಹೇಳಿದರು.
ಪಿರಿಯಾಪಟ್ಟಣ ತಾಲೂಕಿನ ದೊಡ್ಡಕಮರಹಳ್ಳಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ಭಾನುವಾರ 2006-07ನೇ ಸಾಲಿನ ವಿದ್ಯಾರ್ಥಿಗಳಿಂದ ಆಯೋಜಿಸಿದ ಗುರುವಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳ ಜೀವನದಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಶಿಕ್ಷಕರು ಕಲಿಸುವ ಪಾಠಗಳು ತರಗತಿಗೆ ಮಾತ್ರ ಸೀಮಿತವಾಗದೆ, ಜೀವನದ ಪ್ರತಿಯೊಂದು ಹಂತದಲ್ಲಿಯೂ ಮಾರ್ಗದರ್ಶನ ನೀಡುತ್ತವೆ. ಹಳೆಯ ವಿದ್ಯಾರ್ಥಿಗಳು ತಮ್ಮ ಶಿಕ್ಷಕರನ್ನು ಸ್ಮರಿಸಿ ಗುರುವಂದನಾ ಕಾರ್ಯಕ್ರಮ ಆಯೋಜಿಸಿರುವುದು ಶ್ಲಾಘನೀಯ ಎಂದರು.
ಕಂಠನಹಳ್ಳಿ ಮಂಜುನಾಥ್ ಮಾತನಾಡಿ, ವಿದ್ಯಾರ್ಥಿಗಳ ಬದುಕಿಗೆ ಉತ್ತಮ ದಿಕ್ಕು ತೋರಿಸುವಲ್ಲಿ ಶಿಕ್ಷಕರ ಕೊಡುಗೆ ಅಪಾರವಾಗಿದೆ. ಶಾಲಾ ದಿನಗಳಲ್ಲಿ ಶಿಕ್ಷಕರು ನೀಡಿದ ಮಾರ್ಗದರ್ಶನ ಹಾಗೂ ಪ್ರೋತ್ಸಾಹವನ್ನು ವಿದ್ಯಾರ್ಥಿಗಳು ಎಂದಿಗೂ ಮರೆಯಬಾರದು. ಹಲವು ವರ್ಷಗಳ ನಂತರ ಹಳೆಯ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಒಂದೆಡೆ ಸೇರಿರುವುದು ಸಂತಸದ ಸಂಗತಿ ಎಂದರು.
ಕಾರ್ಯಕ್ರಮದಲ್ಲಿ 2006-07ನೇ ಸಾಲಿನ ವಿದ್ಯಾರ್ಥಿಗಳು ಹಿರಿಯ ಶಿಕ್ಷಕರು ಹಾಗೂ ಗಣ್ಯರಿಗೆ ಮೈಸೂರು ಪೇಟ ತೊಡಿಸಿ, ಶಾಲು ಹೊದಿಸಿ, ಮುತ್ತಿನ ಹಾರ ಹಾಕಿ, ನೆನಪಿನ ಕಾಣಿಕೆ ನೀಡಿ ಗೌರವಿಸಿ ಸನ್ಮಾನಿಸಿದರು. 2026ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು. ಪ್ರಸ್ತುತ ಶಾಲೆಯ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ವಿತರಣೆ ಮಾಡಲಾಯಿತು. ಹಿರಿಯ ಶಿಕ್ಷಕರು ಹಾಗೂ ಹಿರಿಯ ವಿದ್ಯಾರ್ಥಿಗಳು ಶಾಲೆಯಲ್ಲಿ ಕಳೆದ ಹಳೆಯ ದಿನಗಳನ್ನು ಮೆಲುಕು ಹಾಕಿ ತಮ್ಮ ಅನುಭವಗಳನ್ನು ಹಂಚಿಕೊಂಡರು.
ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಗೋಪಾಲಕೃಷ್ಣ, ಸದಸ್ಯರಾದ ಅರುಣ್, ಯಶೋಧ, ಪುಟ್ಟಸ್ವಾಮಿ, ಕೃಷ್ಣೇಗೌಡ, ಮಂಜುನಾಥ್, ದಿನೇಶ್, ಮುಖ್ಯಶಿಕ್ಷಕ ಮಹದೇವ್, ಹಿರಿಯ ಶಿಕ್ಷಕರಾದ ಲೋಕನಾಥ, ಗೊರಹಳ್ಳಿ ಜಗದೀಶ್, ಸವಿತಾ, ರಾಘವೇಂದ್ರ, ಕಂಠನಹಳ್ಳಿ ಮಂಜುನಾಥ್, ಭುವನಹಳ್ಳಿ ಮಂಜುನಾಥ್, ಲೀಲಾವತಿ, ಸಿ.ಪಿ. ಮಂಜುನಾಥ್, ಮೂರ್ತಿ, ಸುನೀತಾ, ಅನಿತಾ, ನಂದಿನಿ, ನಜೇಯಭಾನು ಸೇರಿದಂತೆ ಹಿರಿಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.