ಬೆಂಗಳೂರು:
ಗ್ಯಾರಂಟಿ ಯೋಜನೆ ಬಗ್ಗೆ ಆಡಳಿತರೂಢ ಕಾಂಗ್ರೆಸ್ ಪಕ್ಷದ ನಾಯಕರುಗಳ ಭಿನ್ನಸ್ವರದ ಹೇಳಿಕೆಗಳ ಬೆನ್ನಲ್ಲಿಯೇ ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಗ್ಯಾರಂಟಿ ಯೋಜನೆ ಬಗ್ಗೆ ವಾಗ್ದಾಳಿ ನಡೆಸಿದ್ದಾರೆ.
ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವು ಒಳಗಿನ ರಾಜಕೀಯದಲ್ಲಿ ನಿರತವಾಗಿದೆ ಮತ್ತು ಅಭಿವೃದ್ಧಿಯ ಬಗ್ಗೆ ಕಾಳಜಿ ವಹಿಸುವ ಬದಲು ಲೂಟಿ ಮಾಡುತ್ತಿರುವುದು ಅಷ್ಟೆ ಅಲ್ಲ, ಈಗಿರುವ ಸ್ಕೀಮುಗಳನ್ನು ಹಿಂಪಡೆಯಲು ಕೂಡ ಹೊರಟಿದೆ ಎಂದು ಪ್ರಧಾನಿ ತಮ್ಮ ಎಕ್ಸ್ ಖಾತೆಯಲ್ಲಿ ಟೀಕಿಸಿದ್ದಾರೆ.
ಹಿಮಾಚಲ ಪ್ರದೇಶದಲ್ಲಿ ಸರ್ಕಾರಿ ನೌಕರರಿಗೆ ಸರಿಯಾದ ಸಮಯಕ್ಕೆ ಸಂಬಳ ಸಿಗುತ್ತಿಲ್ಲ. ತೆಲಂಗಾಣದಲ್ಲಿ ರೈತರು ಭರವಸೆ ನೀಡಿದ ಸಾಲ ಮನ್ನಾಕ್ಕಾಗಿ ಕಾಯುತ್ತಿದ್ದಾರೆ. ಈ ಹಿಂದೆ, ಛತ್ತೀಸ್‌ಗಢ ಮತ್ತು ರಾಜಸ್ಥಾನದಲ್ಲಿ ಅವರು ಕೆಲವು ಭತ್ಯೆಗಳನ್ನು ಭರವಸೆ ನೀಡಿದ್ದರು. ಅದು ಐದು ವರ್ಷಗಳವರೆಗೆ ಜಾರಿಯಾಗಲಿಲ್ಲ. ಕಾಂಗ್ರೆಸ್ ಹೇಗೆ ಕೆಲಸ ಮಾಡುತ್ತದೆ ಎಂಬುದಕ್ಕೆ ಹಲವಾರು ಉದಾಹರಣೆ ಎಂದು ಪ್ರದಾನಿ ತಿಳಿಸಿದ್ದಾರೆ.
ಡಿಸಿಎಂ ಡಿಕೆ ಶಿವಕುಮಾರ್, ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸಿರುವ ಶಕ್ತಿ ಯೋಜನೆ ಬಗ್ಗೆ ಪ್ರಸ್ತಾಪಿಸಿ, ಕೆಲ ಉದ್ಯೋಗಸ್ಥ ಮಹಿಳೆಯರು ಸೇರಿದಂತೆ ಹಲವರು ತಮಗೆ ಉಚಿತ ಪ್ರಯಾಣದ ಅಗತ್ಯವಿಲ್ಲ ಎಂದು ಹೇಳಿದ್ದು ವಿವಾದಕ್ಕೆ ಕಾರಣವಾಗಿತ್ತು.
ಡಿಕೆಶಿ ಹೇಳಿಕೆ ಬೆನ್ನಲ್ಲಿಯೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಗ್ಯಾರಂಟಿ ಯೋಜನೆಗಳ ಬಗ್ಗೆ ಎಚ್ಚರಿಕೆ ಹೆಜ್ಜೆ ಇಡಬೇಕು. ಅಭಿವೃದ್ಧಿಗೆ ಹಣವಿಲ್ಲ ಎಂದರೂ ಜನರು ನಮ್ಮ ಮೇಲೆ ಬೀಳುತ್ತಾರೆ. ದಿವಾಳಿ ಆಗದಂತೆ ಮುನ್ನೆಚ್ಚರಿಕೆ ತೆಗೆದುಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಸಲಹೆ ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು.