ಬೆಂಗಳೂರು: ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ಪಕ್ಷಗಳು ತಮ್ಮ ಶಕ್ತಿ ಪ್ರದರ್ಶಿಸಲು ಯೋಜನೆ ರೂಪಿಸಕೊಳ್ಳುತ್ತಿವೆ. ಜೆಡಿಎಸ್ ಪಕ್ಷವು ಕೂಡ ಈಗಾಗಲೇ ಚುನಾವಣೆ ತಯಾರಿ ಮಾಡಿಕೊಳ್ಳುತ್ತಿದೆ. ಈ ಹಿಂದೆ ಸುದ್ದಿಗೋಷ್ಠಿಯಲ್ಲಿ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಮಾತನಾಡುತ್ತಾ, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ 123 ಸ್ಥಾನದ ಗುರಿ ಮುಟ್ಟಲು ಜೆಡಿಎಸ್ಗೆ ಅವಕಾಶ ಇದೆ. ಎಲ್ಲಾ ವಿಧಾನ ಸಭಾ ಕ್ಷೇತ್ರದಿಂದಲೂ ಚುನಾವಣಗೆ ಜೆಡಿಎಸ್ ಪಕ್ಷದಿಂದ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ ಎಂದು ಹೇಳಿದ್ದರು.
ಅಂತೆಯೇ ಜೆಡಿಎಸ್ನಲ್ಲಿ ಅಭ್ಯರ್ಥಿಗಳ ಪಟ್ಟಿ, ಗೆಲುವಿನ ಲೆಕ್ಕಾಚಾರವೆಲ್ಲವೂ ನಡೆಯುತ್ತಿವೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಇದೀಗ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಪೂರ್ಣ ಪ್ರಮಾಣದ ಚುನಾವಣಾ ಸಿದ್ಧತೆ ಆರಂಭಗೊಂಡಿದೆ. ಪಕ್ಷದಿಂದ ಸ್ಪರ್ಥಿಸುವ ಅಭ್ಯರ್ಥಿಗಳಿಗೆ ರಹಸ್ಯ ಸ್ಥಳದಲ್ಲಿ ತರಬೇತಿ ನೀಡಲಾಗುತ್ತಿದೆ ಎಂಬ ಮಾಹಿತಿ ಕೇಳಿ ಬರುತ್ತಿದೆ.
ಕಳೆದ ಎರಡು ದಿನಗಳಿಂದ ಅಭ್ಯರ್ಥಿಗಳಿಗೆ ತರಬೇತಿ ನಡೆಯುತ್ತಿದ್ದು, ಕುಮಾರಸ್ವಾಮಿ ಎಲ್ಲರೊಂದಿಗೆ ಮುಕ್ತವಾಗಿ ಮಾತುಕತೆ ನಡೆಸುತ್ತಿದ್ದಾರೆ. ಮೊದಲ ಹಂತದಲ್ಲಿ 126ಕ್ಕೂ ಹೆಚ್ಚು ಅಭ್ಯರ್ಥಿಗಳಿಗೆ ತರಬೇತಿ ಆಯೋಜಿಸಿದ್ದು, ನವದೆಹಲಿಯ ವಿಶೇಷ ಪರಿಣಿತರ ತಂಡದಿಂದ ತರಬೇತಿ ನೀಡಲಾಗುತ್ತಿದೆ.
ಚುನಾವಣೆಯಲ್ಲಿ ಅನುಸರಿಸಬೇಕಾದ ಕಾರ್ಯತಂತ್ರ, ವ್ಯೂಹ ರಚನೆ, ಗೆಲುವಿನ ಸೂತ್ರಗಳ ಬಗ್ಗೆ ಮಾಹಿತಿ ನೀಡುತ್ತಿದ್ದು, ಪಂಚರತ್ನ ಯಾತ್ರೆ ಪುನರಾರಂಭಕ್ಕೆ ಮೊದಲೇ ತರಬೇತಿ ಪೂರ್ಣಗೊಳಿಸಲು ಕುಮಾರಸ್ವಾಮಿ ನಿರ್ಧಾರ ಮಾಡಿದ್ದಾರೆ.