ನ್ಯೂಸ್

ಸಿಎಂ ಯೋಗಿ ವಿರುದ್ಧ ಪದೇ ಪದೇ ಅರ್ಜಿ ಸಲ್ಲಿಸಿದ ವ್ಯಕ್ತಿಗೆ 1 ಲಕ್ಷ ರೂ. ದಂಡ ವಿಧಿಸಿದ ಹೈಕೋರ್ಟ್; ಏನಿದು ಪ್ರಕರಣ?

ಉತ್ತರಪ್ರದೇಶ: ಎರಡು ಗುಂಪುಗಳ ನಡುವೆ 2007ರಲ್ಲಿ ನಡೆದ ಗೋರಖ್‌ಪುರ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಪದೇ ಪದೇ ಕೋರ್ಟ್‌ಗೆ ಅರ್ಜಿ ಸಲ್ಲಿಸುತ್ತಿದ್ದ ವ್ಯಕ್ತಿಗೆ ಅಲಹಾಬಾದ್ ನ್ಯಾಯಾಲಯ 1 ಲಕ್ಷ ರೂ. ದಂಡ ವಿಧಿಸಿದೆ.

2007 ರ ಜನವರಿ 27 ರಂದು ಉತ್ತರ ಪ್ರದೇಶದ ಗೋರಖ್‌ಪುರದಲ್ಲಿ ಮುಸ್ಲಿಮರ ಹಬ್ಬವಾದ ಮೊಹರಂ ಮೆರವಣಿಗೆ ಸಂದರ್ಭದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ಉಂಟಾಗಿ ಗಲಭೆಯಲ್ಲಿ ಓರ್ವ ವ್ಯಕ್ತಿಯ ಹತ್ಯೆಯೂ ಆಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ರಕರ್ತ ಪರ್ವೇಜ್ ಪರ್ವಾಜ್ ಅವರು 2008 ರ ಸೆಪ್ಟೆಂಬರ್‌ 26 ರಂದು ದೂರು ಸಲ್ಲಿಸಿ ಯೋಗಿ ಆದಿತ್ಯನಾಥ್ ಅವರು ಯುವಕನ ಸಾವಿಗೆ ಪ್ರತಿಕಾರ ತೀರಿಸಿಕೊಳ್ಳುವ ದ್ವೇಷದ ಭಾಷಣಗಳನ್ನು ಮಾಡಿದ್ದಾರೆ ಎಂದು ಆರೋಪ ಮಾಡಿದ್ದರು.

ಪ್ರಕರಣ ಸಂಬಂಧ ಪರ್ವೇಜ್ ಪರ್ವಾಜ್ ಸಲ್ಲಿಸಿದ್ದ ಅರ್ಜಿ ಆಧರಿಸಿ ಕಾನೂನು ಕ್ರಮ ತೆಗೆದುಕೊಳ್ಳಲು ರಾಜ್ಯ ಸರ್ಕಾರ ನಿರಾಕರಿಸಿತ್ತು. ಈ ಹಿನ್ನೆಲೆಯಲ್ಲಿ ಪರ್ವೇಜ್ ಸರ್ಕಾರದ ನಿರ್ಧಾರ ಪ್ರಶ್ನಿಸಿ ಅಲಹಾಬಾದ್ ಹೈಕೊರ್ಟ್‍ಗೆ ಅರ್ಜಿ ಸಲ್ಲಿಸಿದರು. ಆದರೆ  ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತು. ಹೀಗಾಗಿ ಪರ್ವೇಜ್ ಅವರು ಹೈಕೋರ್ಟ್‍ನ ತೀರ್ಪನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ಈಗಾಗಲೇ ಸುಪ್ರೀಂ ಕೋರ್ಟ್‍ನಲ್ಲಿ ಈ ಪ್ರಕರಣ ಇತ್ಯರ್ಥವಾಗಿದೆ. ಪುನಃ ಮೇಲ್ಮನವಿ ಸಲ್ಲಿಸುವ ಅಗತ್ಯವೇನಿದೆ ಎಂದು ಅರ್ಜಿದಾರರಿಗೆ ಪ್ರಶ್ನಿಸಿ ದಂಡವನ್ನು ವಿಧಿಸಿದೆ.