ಬೆಂಗಳೂರು: ಅಪ್ರಾಪ್ತ ವಯಸ್ಕಳಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ (ಜೂನ್ 13) ವಿಶೇಷ ನ್ಯಾಯಾಲಯ ಜಾಮೀನು ರಹಿತ ಬಂಧನ ವಾರೆಂಟ್ ಹೊರಡಿಸಲು ಆದೇಶಿಸಿತ್ತು. ಇದರ ಬೆನ್ನಲ್ಲೇ ಹೈಕೋರ್ಟ್ ಮಾಜಿ ಸಿಎಂ ಯಡಿಯೂರಪ್ಪಗೆ ರಿಲೀಫ್ ನೀಡಿದ್ದು, ತನಿಖೆಗೆ ಹಾಜರಾಗುವಂತೆ ಹೈಕೋರ್ಟ್ ಸೂಚಿಸಿದೆ. ಮುಂದಿನ ವಿಚಾರಣೆ ನಡೆಯುವವರೆಗೂ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ಸೂಚಿಸಿದೆ.
ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ. ಎಸ್. ದೀಕ್ಷಿತ್ ಅವರಿದ್ದ ಏಕಸದಸ್ಯ ಪೀಠವು ವಾದ-ಪ್ರತಿವಾದವನ್ನು ಆಲಿಸಿದ ಬಳಿಕ ತನಿಖೆಗೆ ಹಾಜರಾಗುವಂತೆ ಸೂಚಿಸಿದ್ದಾರೆ. ಜೂನ್ 17ರಂದು ವಿಚಾರಣೆಗೆ ಹಾಜರಾಗುವುದಾಗಿ ಯಡಿಯೂರಪ್ಪ ಅವರು ತಮ್ಮ ವಕೀಲರ ಮೂಲಕ ತಿಳಿಸಿದ್ದಾರೆ.
ಲೈಂಗಿಕ ಕಿರುಕುಳ ಆರೋಪ ಸಂಬಂಧ ತಮ್ಮ ವಿರುದ್ಧ ದಾಖಲಿಸಿರುವ ದೂರು, ಎಫ್ಐಆರ್ ಮತ್ತು ಪೋಕ್ಸೋ ನ್ಯಾಯಾಲಯದ ವಿಚಾರಣೆ ರದ್ದುಪಡಿಸುವಂತೆ ಕೋರಿ ಯಡಿಯೂರಪ್ಪ ಸಲ್ಲಿಸಿರುವ ಅರ್ಜಿ ಸಂಬಂಧ ಹೈಕೋರ್ಟ್ ಸಿಐಡಿಗೆ ನೋಟಿಸ್ ಜಾರಿ ಮಾಡಿದೆ. ಮುಂದಿನ ವಿಚಾರಣೆ ನಡೆಯುವವರೆಗೂ ಬಂಧಿಸಬಾರದು ಎಂದು ಹೈಕೋರ್ಟ್ ಆದೇಶಿಸಿದೆ.