ನ್ಯೂಸ್

ನಾನು ಹಾಕಿದ ಸವಾಲನ್ನು ಸ್ವೀಕರಿಸುವ ಧೈರ್ಯ ಪ್ರಧಾನಿ ಮೋದಿ ತೋರಿಸಲಿಲ್ಲ: ಸಿಎಂ ವಾಗ್ದಾಳಿ

ಬೆಂಗಳೂರು: ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿ ಮತದಾರರಿಗೆ ಅಭಿನಂದನೆ ಸಲ್ಲಿಸುವ ಬೃಹತ್ ಮತದಾರರ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಉಪಚುನಾವಣೆಯಲ್ಲಿ ಬಿಜೆಪಿಯ ಲೋಕಲ್ ಲೀಡರ್​ಗಳಿಂದ ಪ್ರಧಾನಿ ಮೋದಿಯವರೆಗೂ ಸರಣಿ ಸುಳ್ಳುಗಳನ್ನು ಹೇಳಿದರು. ನೀವು ಆರೋಪ ಸಾಬೀತುಪಡಿಸಿ, ನಾನು ರಾಜಕೀಯ ನಿವೃತ್ತಿ ತಗೊತೀನಿ ಎಂದು ಮೋದಿಯವರಿಗೆ ಸವಾಲು ಹಾಕಿದ್ದೆ. ಅವರು ಸವಾಲು ಸ್ವೀಕರಿಸುವ ಧೈರ್ಯ ತೋರಿಸಲಿಲ್ಲ ಎಂದು ಪ್ರಧಾನಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

"ನಾನು ಮೂರು ದಿನಗಳ ಕಾಲ ಸಂಡೂರಿನಲ್ಲಿ ಪ್ರಚಾರ ಮಾಡಿದೆ. ಈ ವೇಳೆ ತುಕಾರಾಮ್ ಮಾಡಿರುವ ಅಭಿವೃದ್ಧಿ ಕೆಲಸಗಳನ್ನು ಗಮನಿಸಿದ್ದೇನೆ. ತುಕಾರಾಮ್ ಅವರಿಗೂ ಮೊದಲು ಸಂಡೂರು ಹೇಗಿತ್ತು ಎನ್ನುವುದೂ ನನಗೂ ಗೊತ್ತು. ಈಗ ತುಕಾರಾಮ್ ಅವರು ಒಳ್ಳೆ ಕೆಲಸಗಳನ್ನು ಮಾಡಿರುವುದನ್ನು ನಾನು ನೋಡಿದ್ದೇನೆ. ನಮ್ಮ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿದೆ. ನಾಡಿನ ಜನತೆ ಎದುರಿಗೆ ಕೊಟ್ಟ ಎಲ್ಲಾ ಭರವಸೆಗಳನ್ನೂ ಹಂತ ಹಂತವಾಗಿ ಈಡೇರಿಸುತ್ತಿದ್ದೇವೆ. ನಮ್ಮ ಜನರ ಆರ್ಥಿಕ ಶಕ್ತಿ ಮತ್ತು ಕೊಳ್ಳುವ ಸಾಮರ್ಥ್ಯವನ್ನು ಹೆಚ್ಚಿಸುವ ಕಾರ್ಯಕ್ರಮಗಳನ್ನು ನಾವು ರೂಪಿಸಿ ಜಾರಿ ಮಾಡುವುದರ ಮೂಲಕ ಕೊಟ್ಟ ಮಾತಿನಂತೆ ನಡೆದುಕೊಂಡಿದ್ದೇವೆ" ಎಂದು ಸಂತಸ ವ್ಯಕ್ತಪಡಿಸಿದರು.

"2014-2018ರಲ್ಲಿ ನರೇಂದ್ರ ಮೋದಿಯವರು ಕೊಟ್ಟ ಭರವಸೆಗಳನ್ನು ನೆನಪಿಸಿಕೊಳ್ಳಿ. ಅವುಗಳಲ್ಲಿ ಒಂದನ್ನಾದರೂ ಈಡೇರಿಸಿದ್ದಾರಾ ನೋಡಿ. ಮೋದಿಯವರು ನಿಮಗೆ ಈ ಮಟ್ಟದ ಮೋಸ ಮಾಡಿದ್ದಾರಲ್ಲಾ, ಇದನ್ನು ಪ್ರಶ್ನಿಸಬೇಕಿದೆ. ಮೋದಿ ಅಚ್ಚೆ ದಿನ್ ತರಲಿಲ್ಲ, ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಮಾಡಲಿಲ್ಲ, ವಿದೇಶದಿಂದ ಕಪ್ಪು ಹಣ ತರಲಿಲ್ಲ, ನಿಮ್ಮ ಖಾತೆಗೆ 15 ಲಕ್ಷ ಹಾಕಲಿಲ್ಲ. ಬರೀ ಭಾಷಣದಲ್ಲೇ ಮೋದಿಯವರು ಎಲ್ಲಾ ಮುಗಿಸಿ ಹೋದರು" ಎಂದು ಟೀಕಿಸಿದರು.

"ಬಳ್ಳಾರಿ ಜಿಲ್ಲೆಯ ಜನತೆಯನ್ನು ಭಯದಲ್ಲಿಟ್ಟು ರಿಪಬ್ಲಿಕ್ ಬಳ್ಳಾರಿ ಮಾಡಿದ್ದ ಜನಾರ್ದನ ರೆಡ್ಡಿಯವರಿಗೆ ಬಿಜೆಪಿ ಈ ಚುನಾವಣೆಯ ಉಸ್ತುವಾರಿ ವಹಿಸಿತ್ತು. ಆದರೆ, ಸಂಡೂರಿನ ಜನತೆ ರೆಡ್ಡಿಯವರ ಹಣಕ್ಕೆ, ಭಯಕ್ಕೆ, ಆಮಿಷಕ್ಕೆ, ಸುಳ್ಳುಗಳಿಗೆ, ಅಪಪ್ರಚಾರಕ್ಕೆ ಸೋಲಲಿಲ್ಲ. ಅನ್ನಪೂರ್ಣಮ್ಮ ಅವರನ್ನು ಗೆಲ್ಲಿಸುವ ಮೂಲಕ ಅಭಿವೃದ್ಧಿ ರಾಜಕಾರಣ ಮತ್ತು ಸತ್ಯದ ರಾಜಕಾರಣವನ್ನು ಗೆಲ್ಲಿಸಿದ್ದೀರಿ. ಇದು ಸಂಡೂರಿನ ಘನತೆಯನ್ನು ಹೆಚ್ಚಿಸಿದೆ. ಇವತ್ತಿನವರೆಗೂ ರಾಜ್ಯದಲ್ಲಿ ಬಿಜೆಪಿ ಸ್ವಂತ ಶಕ್ತಿಯಿಂದ ಅಧಿಕಾರಕ್ಕೆ ಬಂದೇ ಇಲ್ಲ. ಕೇವಲ ಆಪರೇಷನ್ ಕಮಲದ ಮೂಲಕವೇ ಬಿಜೆಪಿ ರಾಜ್ಯದಲ್ಲಿ ಅಧಿಕಾರ ನಡೆಸಿದೆ. ಆಪರೇಷನ್ ಕಮಲಕ್ಕೆ ಬಳಸಿದ ಹಣ ಕೂಡ ಕಪ್ಪು ಹಣ ಅಲ್ಲವೇ?" ಎಂದರು.

"ಮೂರು ಉಪ ಚುನಾವಣೆಯಲ್ಲಿ ಗೆಲ್ಲಿಸುವ ಮೂಲಕ ರಾಜ್ಯದ ಜನತೆ ನಮ್ಮ ಸರ್ಕಾರಕ್ಕೆ ದೊಡ್ಡ ಆಶೀರ್ವಾದ ಮಾಡಿದ್ದಾರೆ. ನನ್ನ ವಿರುದ್ಧ ಸುಳ್ಳು ಕೇಸು, ಸುಳ್ಳು ಆರೋಪಗಳ ಮೂಲಕ ನನ್ನ ವಿರುದ್ಧ ಷಡ್ಯಂತ್ರ ನಡೆಸಿದ ಬಿಜೆಪಿಗೆ ರಾಜ್ಯದ ಜನತೆ ತಕ್ಕ ಉತ್ತರ ನೀಡಿದ್ದಾರೆ. ನಿಮ್ಮ ಆಶೀರ್ವಾದ ಇರುವವರೆಗೂ ಈ ಸಿದ್ದರಾಮಯ್ಯ ಯಾವುದೇ ಷಡ್ಯಂತ್ರ, ಸುಳ್ಳು ಕೇಸುಗಳಿಗೆ ಹೆದರುವ ಪ್ರಶ್ನೆಯೇ ಇಲ್ಲ ಎಂದು" ಗುಡುಗಿದರು.