ನ್ಯೂಸ್

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ..ಕರ್ನಾಟಕ ಸೇರಿ ಈ ರಾಜ್ಯಗಳಲ್ಲಿ 3 ದಿನ ಭಾರಿ ಮಳೆ

ನವದೆಹಲಿ: ಪೂರ್ವ ಮಧ್ಯ ಉತ್ತರ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಇದರ ಪರಿಣಾಮ ಕರ್ನಾಟಕ, ತಮಿಳುನಾಡು, ಪುದುಚೇರಿ, ಆಂಧ್ರ ಮತ್ತಿತರ ರಾಜ್ಯಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಂಗಾಳಕೊಲ್ಲಿಯಲ್ಲಿ ಕಡಿಮೆ ಒತ್ತಡದ ಪ್ರದೇಶ ಉಂಟಾಗಿದ್ದು, ಪಶ್ಚಿಮ ಬಂಗಾಳದಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಬುಲೆಟಿನ್‌ನಲ್ಲಿ ತಿಳಿಸಿದೆ.

ಮ್ಯಾನ್ಮಾರ್ ಮತ್ತು ಬಂಗಾಳ ಕೊಲ್ಲಿಯಲ್ಲಿ ಗುರುವಾರ ಚಂಡಮಾರುತದ ಪ್ರಭಾವವಿರಲಿದ್ದು, ಕಡಿಮೆ ಒತ್ತಡದ ಪ್ರದೇಶವಾಗಿ ಮಾರ್ಪಡುವ ಸಾಧ್ಯತೆಯಿದೆ. ಇದು ಭಾರತದ ಹಲವು ರಾಜ್ಯಗಳಲ್ಲಿ ಭಾರಿ ಮಳೆಗೆ ಕಾರಣವಾಗಲಿದೆ.

ಮೂರ್ನಾಲ್ಕು ದಿನ ಮಳೆ: ಇನ್ನು ಈ ಚಂಡಮಾರುತದಿಂದ ಸೆ.30ರ ವರೆಗೆ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಗುಡುಗು ಸಮೇತ ಭಾರಿ ಮಳೆಯಾಗಲಿದೆ. ಗಾಳಿಯ ವೇಗ ಗಂಟೆಗೆ 65 ಕಿಮೀ ತಲುಪುವ ಸಾಧ್ಯತೆ ಇದೆ. ಪಶ್ಚಿಮ ಬಂಗಾಳ, ಬಿಹಾರದಲ್ಲಿ ಸೆ.29 ಮತ್ತು 30 ರಂದು ಗುಡುಗು ಸಹಿತ ಮಳೆಯಾಗಲಿದೆ. ಸೆ.30 ರಿಂದ ಅ.2 ರವರೆಗೆ ನಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ತಮಿಳುನಾಡಿನ ಘಟ್ಟ ಪ್ರದೇಶಗಳಲ್ಲಿ ಸೆ.29 ರಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ.

ಕರ್ನಾಟಕದಲ್ಲಿ ಮಳೆ ಮುನ್ಸೂಚನೆ: ಅಕ್ಟೋಬರ್ 1 ಮತ್ತು 2 ರಂದು ರಾಜ್ಯದ 18 ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ. ಕರಾವಳಿ ಕರ್ನಾಟಕದಲ್ಲಿ ಅ.1 ರವರೆಗೆ ಗುಡುಗು ಮಿಂಚು ಸಹಿತ ವ್ಯಾಪಕ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಇದೇ ಅವಧಿಯಲ್ಲಿ ಕೇರಳ ಮತ್ತು ಗೋವಾ, ಮಹಾರಾಷ್ಟ್ರದಲ್ಲಿ ಸಹ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.