ರಾಜ್ಯದೆಲ್ಲೆಡೆ ಮುಂಗಾರು ಮಳೆಯಾಗುತ್ತಿದ್ದು ರೈತರ ಮೊಗದಲ್ಲಿ ಸಂತಸ ಮೂಡಿದೆ. ಇದರ ಬೆನ್ನಲ್ಲೇ ಮುಂದಿನ 3 ದಿನಗಳ ಕಾಲ ರಾಜ್ಯದಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮಾಹಿತಿ ನೀಡಿದೆ.
ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಇಂದಿನಿಂದ ಜುಲೈ 7ರವರೆಗೆ ಸಾಧಾರಣ ಮಳೆಯ ಮುನ್ಸೂಚನೆ ಇದೆ. ಅದರಂತೆ ಇಂದು ಕೂಡ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿರುವ ವರದಿ ಇದೆ. ಈ ಸಂಬಂಧ ರಾಜ್ಯ ಹವಮಾನ ಇಲಾಖೆ ಮಾಹಿತಿ ನೀಡಿದೆ.
ಅಲ್ಲದೇ ವರುಣಾರ್ಭಟಕ್ಕೆ ಬಾಗಲ ಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ವರದಿ ಹೇಳಿದೆ.
ಚಿಕ್ಕಮಗಳೂರು, ಕೊಡಗು, ಶಿವಮೊಗ್ಗವಿಜಯನಗರ, ತುಮಕೂರು,ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಇಲ್ಲಿ ವ್ಯಾಪಕವಾಗಿ ಗಾಳಿ ಇರಲಿದ್ದು, ಗಂಟೆಗೆ 30 ರಿಂದ 40 ಕಿ.ಮೀ. ವೇಗದಲ್ಲಿ ಬೀಸಬಹುದು ಎಂದು ಮಳೆ ಮುನ್ಸೂಚನೆ ವರದಿ ಹೇಳಿದೆ.
ದಕ್ಷಿಣ ಕನ್ನಡ ಜಿಲ್ಲೆ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಸೇರಿ ಹಲವು ಜಿಲ್ಲೆಗಳಲ್ಲಿ ಇದೇ ಸಮಯದಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದ್ದು, ಮುಂದಿನ 1 ವಾರ ಕಾಲ ಇಲ್ಲಿ ಭಾರಿ ಮಳೆ ಬೀಳುವ ಎಚ್ಚರಕೆ ನೀಡಲಾಗಿದೆ. ಈಗಾಗಲೇ ಈ ಪ್ರದೇಶಗಳಲ್ಲಿ ಭಾರಿ ಮಳೆ ಬಿದ್ದಿದೆ. ಹೀಗಿದ್ದಾಗ ಮತ್ತೊಮ್ಮೆ ಭೀಕರ ಮಳೆಯ ಕುರಿತು ಎಚ್ಚರಿಕೆ ಸಂದೇಶ ರವಾನಿಸಲಾಗಿದೆ.