ನ್ಯೂಸ್

ರಾಜ್ಯದಲ್ಲಿ ಇನ್ನೂ 4 ದಿನ ಭಾರಿ ಮಳೆ: ನಾಳೆ 9 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್..

ಬೆಂಗಳೂರು: ರಾಜ್ಯದ ಹಲವೆಡೆ ಸುರಿಯುತ್ತಿರುವ ಮಳೆ ಮುಂದಿನ 4 ದಿನ ಇನ್ನಷ್ಟು ಹೆಚ್ಚಾಗಲಿದೆ. ಸೋಮವಾರ ದಕ್ಷಿಣ ಕನ್ನಡದ ಧರ್ಮಸ್ಥಳದಲ್ಲಿ 110 ಮಿಮೀ, ಕೋಲಾರದಲ್ಲಿ 80 ಮಿಮೀ ಮಳೆ ಸುರಿದಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಮತ್ತು ಹಾಸನದಲ್ಲಿ ಜೂ. 21ರಿಂದ ಜೂ. 25ರವರೆಗೆ ಗುಡುಗು ಮಿಂಚು ಸಹಿತ ಭಾರಿ ಮಳೆ ಬೀಳುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.

ಮಂಡ್ಯ, ಮೈಸೂರು, ರಾಮನಗರ, ಚಾಮರಾಜನಗರದಲ್ಲಿ ಜೂ. 21ರಂದು ಹಾಗೂ ಚಿಕ್ಕಬಳ್ಳಾಪುರ, ಕೋಲಾರದಲ್ಲಿ ಜೂ. 22ರಂದು ಯೆಲ್ಲೋ ಅಲರ್ಟ್ ನೀಡಲಾಗಿದೆ. ದಕ್ಷಿಣ ಒಳನಾಡಿನ ಇತರ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಲಿದೆ. ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ 3 ದಿನ ಸಾಧಾರಣ ಮಳೆಯಾಗಲಿದ್ದು, ಜೂ. 24ರಿಂದ ಈ ಭಾಗಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ. ನಾಲ್ಕೈದು ದಿನಗಳಿಂದ ಕರಾವಳಿ, ಮಲೆನಾಡು ಮತ್ತು ಉತ್ತರ ಒಳನಾಡು ಹೊರತುಪಡಿಸಿದರೆ ದಕ್ಷಿಣ ಒಳನಾಡಲ್ಲಿ ಉತ್ತಮ ವರ್ಷಧಾರೆಯಾಗಿದೆ.