ನ್ಯೂಸ್

ಮುಂದಿನ ಎರಡು ದಿನಗಳ ಕಾಲ ರಾಜ್ಯದ ಹಲವೆಡೆ ಭಾರೀ ಮಳೆ; ರೆಡ್​ ಅಲರ್ಟ್​ ಘೋಷಣೆ

ಬೆಂಗಳೂರು: ಬಿಸಿಲಿನ ಹೊಡೆತಕ್ಕೆ ನಲುಗಿದ್ದ ಜನಕ್ಕೆ ವರುಣದೇವ ಕೆಲ ದಿನಗಳಿಂದ ಕೃಪೆ ತೋರುತ್ತಿದ್ದು, ರಾಜ್ಯದ ಹಲವೆಡೆ ಭಾನುವಾರವೂ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಹಮಾವಾನ ಇಲಾಖೆ ಮುನ್ಸೂಚನೆ ನೀಡಿದೆ. ಅದರಂತೆ ಜಿಲ್ಲೆಗಳಿಗೆ ರೆಡ್​, ಆರೆಂಜ್​, ಯೆಲ್ಲೋ ಅಲರ್ಟ್​ ಘೋಷಿಸಲಾಗಿದ್ದು ಜಾಗ್ರತೆಯಿಂದ ಇರುವಂತೆ ಸೂಚಿಸಲಾಗಿದೆ.

ಅದರೆಂತೆ ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿದ್ದು, ರೆಡ್​ ಅಲರ್ಟ್​ ಘೋಷಿಸಲಾಗಿದೆ. ಹಾಸನ ಹಾಗೂ ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಮುಂಜಾಗ್ರತ ಕ್ರಮವಾಗಿ ಆರೆಂಜ್​ ಅಲರ್ಟ್​ ಘೋಷಿಸಲಾಗಿದೆ.

ಉಳಿದಂತೆ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ, ಬೆಳಗಾವಿ, ಧಾರವಾಡ, ಹಾವೇರಿ, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿಯೂ ಭಾರಿ ಮಳೆಯ ಜತೆಗೆ 40ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಂಭವವಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಸೋಮವಾರವೂ ಕೆಲವೆಡೆ ಧಾರಾಕಾರ ಮಳೆಯಾಗುವ ಸಾಧ್ಯತೆಯಿದ್ದು, ಕರಾವಳಿಯ ಮೂರು ಜಿಲ್ಲೆಗಳು ಸೇರಿ ಐದು ಜಿಲ್ಲೆಗಳಿಗೆ ರೆಡ್‌ ಅಲರ್ಟ್ ನೀಡಲಾಗಿದೆ. ಇದೇ 17ರವರೆಗೂ ಕರಾವಳಿ ಸೇರಿ ರಾಜ್ಯದ ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.