ಬೆಂಗಳೂರು: ಹತ್ಯೆಗೊಳಗಾಗಿದ್ದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಪತ್ನಿ ನೂತನಕುಮಾರಿ ಅವರನ್ನು ನೂತನ ಸರ್ಕಾರ ಕೆಲಸದಿಂದ ವಜಾಗೊಳಿಸಿದ್ದ ವಿಚಾರ ವಿವಾದಾತ್ಮಕವಾಗಿ ಪರಿಣಮಿಸಿದೆ. ಇದರ ಬೆನ್ನಿಗೇ ಈ ವಿಷಯಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು ನಡೆದಿದೆ.
ಹೊಸದಾಗಿ ಅಸ್ತಿತ್ವಕ್ಕೆ ಬಂದ ಕಾಂಗ್ರೆಸ್ ಸರ್ಕಾರ ನೂತನಕುಮಾರಿ ಅವರನ್ನು ಕೆಲಸದಿಂದ ವಜಾಗೊಳಿಸಿದ್ದ ವಿಚಾರವಾಗಿ ಬಿಜೆಪಿಯ ನಾಯಕರು ಹಾಗೂ ಕಾರ್ಯಕರ್ತರು ಸರ್ಕಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು. ಮಾತ್ರವಲ್ಲ, ಇದು ದ್ವೇಷದ ರಾಜಕಾರಣ ಎಂದು ಆಕ್ರೋಶವನ್ನೂ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ಟ್ವೀಟ್ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ.
'ಹೊಸ ಸರ್ಕಾರ ಬಂದ ನಂತರ ಹಿಂದಿನ ಸರ್ಕಾರ ನೇಮಕ ಮಾಡಿಕೊಂಡಿದ್ದ ತಾತ್ಕಾಲಿಕ ನೌಕರರನ್ನು ಸರ್ಕಾರಿ ಸೇವೆಯಿಂದ ವಜಾ ಮಾಡುವುದು ಒಂದು ಸಹಜ ಪ್ರಕ್ರಿಯೆ. ಪ್ರವೀಣ್ ನೆಟ್ಟಾರು ಅವರ ಪತ್ನಿ ಮಾತ್ರವಲ್ಲ, ಸುಮಾರು 150ಕ್ಕೂ ಹೆಚ್ಚು ಗುತ್ತಿಗೆ ನೌಕರರನ್ನು ಈಗಾಗಲೇ ಸೇವೆಯಿಂದ ವಜಾ ಮಾಡಲಾಗಿದೆ. ಇದರಲ್ಲಿ ಸರ್ಕಾರದ ಯಾವುದೇ ಹಸ್ತಕ್ಷೇಪವಿಲ್ಲ. ಇದನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಮಾನವೀಯತೆ ಆಧಾರದಲ್ಲಿ ನೂತನ ಕುಮಾರಿ ಅವರ ಮರು ನೇಮಕ ಮಾಡಲಾಗುವುದು' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ಧಾರ ಪ್ರಕಟಿಸಿದ್ದಾರೆ.