ನ್ಯೂಸ್

ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್: ಕಳಪೆ ಗುಣಮಟ್ಟದ ಕೃಷಿ ಸಲಕರಣೆ ವಿತರಣೆ ಆಕ್ಷೇಪ

ಬೆಂಗಳೂರು: ಕಳಪೆ ಗುಣಮಟ್ಟದ ಕೃಷಿ ಸಲಕರೆಣೆಗಳನ್ನು ವಿತರಿಸುವ ಮೂಲಕ ರೈತರನ್ನು ಸಂಕಷ್ಟಕ್ಕೀಡು ಮಾಡಿದ ಅಧಿಕಾರಿಗಳು ಹಾಗೂ ಸಲಕರಣೆ ಪೂರೈಕೆ ಕಂಪನಿಗಳ ವಿರುದ್ಧ ತನಿಖೆ ನಡೆಸಲು ನಿರ್ದೇಶನ ನೀಡಬೇಕು ಎಂದು ಕೋರಿ ಸಲ್ಲಿಸಲಾದ ಅರ್ಜಿ ಸಂಬಂಧ ರಾಜ್ಯ ಸರ್ಕಾರ ಹಾಗೂ ಲೋಕಾಯುಕ್ತ ಸಂಸ್ಥೆಗೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.

ಈ ಕುರಿತಾಗಿ ಅಖಂಡ ಕರ್ನಾಟಕ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಸಲ್ಲಿಸಿದ ಅರ್ಜಿಯು ನ್ಯಾಯಮೂರ್ತಿ ಸುನೀಲ್‌ದತ್ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ಮಂಗಳವಾರ ವಿಚಾರಣೆಗೆ ಬಂದಿತ್ತು. ಅರ್ಜಿ ಆಲಿಸಿದ ನ್ಯಾಯಪೀಠ, ರಾಜ್ಯ ಸರ್ಕಾರ, ಕೃಷಿ ಇಲಾಖೆ ಪ್ರಧಾನ ಕಾರ್ಯದರ್ಶಿ, ಕೃಷಿ ಆಯುಕ್ತರು, ತೋಟಗಾರಿಕೆ ನಿರ್ದೇಶಕರು, ಲೋಕಾಯುಕ್ತ ಸಂಸ್ಥೆಗೆ ನೋಟಿಸ್ ಜಾರಿಗೊಳಿಸಿ ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ ವಿಚಾರಣೆಯನ್ನು ಜು.8ಕ್ಕೆ ಮುಂದೂಡಿತು.