ಬೆಂಗಳೂರು: ಕರ್ನಾಟಕ ಉಪ ಲೋಕಾಯುಕ್ತರಾಗಿ ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಬಿ.ವೀರಪ್ಪ ಅವರನ್ನು ನೇಮಕ ಮಾಡಲಾಗಿದೆ.
ಈ ಹಿಂದೆ ಕರ್ನಾಟಕ ಹೈಕೋರ್ಟ್ನ್ಯಾಯಮೂರ್ತಿಯಾಗಿದ್ದ ವೀರಪ್ಪ ಅವರು ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ಕ್ಕೆ ಅಧಿಕಾರವನ್ನು ರದ್ದುಗೊಳಿಸಿ ಲೋಕಾಯುಕ್ತ ಸಂಸ್ಥೆಯ ಅಧಿಕಾರವನ್ನು ಪುನರ್ ಸ್ಥಾಪನೆ ಮಾಡಿದ್ದರು. ಅಲ್ಲದೇ ಬಿ. ವೀರಪ್ಪ ಅವರು ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಾದ ಪಿಎಸ್ಐ ನೇಮಕಾತಿ ಹಗರಣದ ತನಿಖಾ ವರದಿ ಸಿದ್ದಗೊಳಿಸಿ ಸಿಎಂ ಸಿದ್ದರಾಮಯ್ಯನವರಿಗೆ ಸಲ್ಲಸಿದ್ದರು. ಇದೀಗ ವೀರಪ್ಪ ಅವರನ್ನೇ ರಾಜ್ಯ ಸರ್ಕಾರ, ಕರ್ನಾಟಕ ಉಪ ಲೋಕಾಯುಕ್ತರನ್ನಾಗಿ ನೇಮಿಸಿದೆ.
ರಾಜ್ಯದಲ್ಲಿ ಉಪ ಲೋಕಾಯುಕ್ತರ ಎರಡು ಹುದ್ದೆಗಳಿವೆ. ಅದರಲ್ಲಿ ಒಂದು ಹುದ್ದೆ ಖಾಲಿ ಇತ್ತು. ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ, ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಸಭೆಯಲ್ಲಿ ಪಾಲ್ಗೊಂಡಿದ್ದರು. ‘ಉಪ ಲೋಕಾಯುಕ್ತರ ಹುದ್ದೆ ಭರ್ತಿಗೆ ಬಿ. ವೀರಪ್ಪ ಅವರ ಹೆಸರು ಮಾತ್ರ ಪ್ರಸ್ತಾಪವಾಯಿತು. ಸಭೆಯಲ್ಲಿದ್ದ ಎಲ್ಲರೂ ಸಹಮತ ವ್ಯಕ್ತಪಡಿಸಿದರು. ಅವರನ್ನೇ ನೇಮಕ ಮಾಡಲು ಸಭೆಯಲ್ಲಿ ತೀರ್ಮಾನಿಸಲಾಗಿದೆ. ಶೀಘ್ರದಲ್ಲಿ ಆದೇಶ ಹೊರಬೀಳಲಿದೆ ಎಂದು ಮೂಲಗಳು ತಿಳಿಸಿವೆ.
ಕೋಲಾರದ ಶ್ರೀನಿವಾಸಪುರ ತಾಲೂಕಿನ ನಾಗದೇನಹಳ್ಳಿ ಗ್ರಾಮದ ವೀರಪ್ಪ ಅವರು ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾಗಿ ಅತಿ ಹೆಚ್ಚು ವ್ಯಾಜ್ಯಗಳನ್ನು ಇತ್ಯರ್ಥಪಡಿಸುವ ಮೂಲಕ ದಾಖಲೆ ಬರೆದಿದ್ದಾರೆ. ಅಲ್ಲದೇ ರಾಜ್ಯದ ಬೊಕ್ಕಸಕ್ಕೆ ಕೋಟ್ಯಂತರ ರೂಪಾಯಿ ಆದಾಯ ತಂದ ಸಂಚಾರ ನಿಯಮ ಉಲ್ಲಂಘನೆ ದಂಡದ ಮೇಲೆ ಶೇ.50ರಷ್ಟು ರಿಯಾಯಿತಿ ಘೋಷಿಸಿದ ರಾಜ್ಯ ಸರಕಾರ ಕ್ರಮದಲ್ಲಿ ವೀರಪ್ಪ ಅವರ ಪಾತ್ರ ಪ್ರಮುಖವಾಗಿತ್ತು.