ನ್ಯೂಸ್

ಯತ್ನಾಳ್ ವಿರುದ್ಧದ ನೋಟಿಸ್‌ಗೆ ಹೈಕೋರ್ಟ್ ತಡೆ

ಬೆಂಗಳೂರು: ಬಸವನಬಾಗೇವಾಡಿ ಶಿವಾನಂದ ಎಸ್. ಪಾಟೀಲ್ ದಾಖಲಿಸಿದ್ದ ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಬಸವನಗೌಡ ಪಾಟೀಲ ಯತ್ನಾಳ್ ವಿರುದ್ಧ ವಿಚಾರಣಾ ನ್ಯಾಯಾಲಯ ಜಾರಿ ಮಾಡಿದ್ದ ಶೋಕಾಸ್ ನೋಟಿಸ್‌ಗೆ ಹೈಕೋರ್ಟ್ ತಡೆ ನೀಡಿದೆ.

ಈ ವಿಚಾರವಾಗಿ ಬೆಂಗಳೂರಿನ 42ನೇ ಎಸಿಜೆಎಂ ನ್ಯಾಯಾಲಯ (ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ) ಜಾರಿಗೊಳಿಸಿದ್ದ ಶೋಕಾಸ್ ನೋಟಿಸ್ ರದ್ದುಪಡಿಸುವಂತೆ ಕೋರಿ ಯತ್ನಾಳ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠ ಈ ಆದೇಶ ಮಾಡಿದೆ. ಜತೆಗೆ ಪ್ರತಿವಾದಿಯಾಗಿರುವ ಖಾಸಗಿ ದೂರುದಾರ ಸಚಿವ ಶಿವಾನಂದ ಎಸ್.ಪಾಟೀಲ್ ಅವರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆ ಮುಂದೂಡಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ವೆಂಕಟೇಶ್ ದಳವಾಯಿ ವಾದ ಮಂಡಿಸಿ, ಮಾನನಷ್ಟ ಮೊಕ್ಕದ್ದಮೆ ಆರೋಪ ಸಂಬಂಧ ಸಚಿವ ಶಿವಾನಂದ ಪಾಟೀಲ್ ಅವರು ಅರ್ಜಿದಾರರ ವಿರುದ್ಧ ವಿಚಾರಣಾ ನ್ಯಾಯಾಲಯದ ಮುಂದೆ ಖಾಸಗಿ ದೂರು ದಾಖಲಿಸಿದ್ದರು. ಅದನ್ನು ಪರಿಗಣಿಸಿ, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಬಿಎನ್‌ಎಸ್‌ಎಸ್) 356 ಅಡಿಯಲ್ಲಿ ನೋಟಿಸ್ ಶೋಕಾಸ್ ನೋಟಿಸ್ ನೀಡಿದೆ.

ಆದರೆ, ಬಿಎನ್‌ಎಸ್‌ಎಸ್ ಸೆಕ್ಷನ್ 223(1) ದೂರದಾರರು ಪ್ರಮಾಣಿಕೃತ ಹೇಳಿಕೆ ದಾಖಲಿಸಿಕೊಂಡು ಕಾಗ್ನಿಜೆನ್ಸ್ (ಸಜ್ಞೇಯ) ದಾಖಲಿಸಿಕೊಂಡ ನಂತರವೇ ಆರೋಪಿಗೆ ಶೋಕಾಸ್ ನೋಟಿಸ್ ನೀಡಬೇಕಾಗುತ್ತದೆ. ಈ ಪ್ರಕರಣದಲ್ಲಿ ದೂರುದಾರರ ಪ್ರಮಾಣೀಕೃತ ಹೇಳಿಕೆ ದಾಖಲಿಸಿಕೊಳ್ಳದೆ ಅರ್ಜಿದಾರರಿಗೆ ನೇರವಾಗಿ ಶೋಕಸ್ ನೋಟಿಸ್ ಜಾರಿಗೊಳಿಸಿದೆ. ಇದು ಕಾನೂನು ಪ್ರಕ್ರಿಯೆಯಲ್ಲಿ ಲೋಪವಾಗಿದೆ ಎಂದು ನ್ಯಾಯಪೀಠದ ಗಮನಕ್ಕೆ ತಂದರು.

ಅದನ್ನು ಪರಿಗಣಿಸಿದ ನ್ಯಾಯಪೀಠ, ಅರ್ಜಿ ಕುರಿತು ಮುಂದಿನ ವಿಚಾರಣೆವರೆಗೆ ಯತ್ನಾಳ್ ಅವರ ವಿರುದ್ಧದ ಶೋಕಾಸ್ ನೋಟಿಸ್ ಮತ್ತು ವಿಚಾರಣಾ ನ್ಯಾಯಾಲಯದ ವಿಚಾರಣಾ ಪ್ರಕ್ರಿಯೆಗೆ ತಡೆಯಾಜ್ಞೆ ನೀಡಿತು.