ನ್ಯೂಸ್

ಮುಡಾ ಕೇಸ್ ಸಿಎಂಗೆ ಹೈ ನೋಟಿಸ್

Bengaluru - General - Pavithra Kundapur

ಬೆಂಗಳೂರು: ಮುಡಾ ಪ್ರಕರಣವನ್ನು ಸಿಬಿಐ ತನಿಖೆ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಸೇರಿ ಮತ್ತಿತರರಿಗೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.

ಪ್ರಕರಣವನ್ನು ಸಿಬಿಐ ಅಥವಾ ಇತರ ಸ್ವತಂತ್ರ ಸಂಸ್ಥೆಯಿಂದ ತನಿಖೆ ನಡೆಸುವಂತೆ ಕೋರಿ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ.ವಿ.ಅರವಿಂದ್ ಅವರಿದ್ದ ನ್ಯಾಯಪೀಠ ವಿಚಾರಣೆ ನಡೆಸಿತು.

ವಾದ ಆಲಿಸಿದ ನ್ಯಾಯಾಲಯ ಪ್ರಕರಣದಲ್ಲಿ ಪ್ರತಿವಾದಿಗಳಾಗಿರುವ ಕೇಂದ್ರ ಸರ್ಕಾರ, ಸಿಬಿಐ, ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬಾಮೈದ ಮಲ್ಲಿಕಾರ್ಜುನ ಸ್ವಾಮಿ, ಜಮೀನಿನ ಮೂಲ ಮಾಲೀಕ ದೇವರಾಜು ಅವರಿಗೆ ನೋಟಿಸ್ ಜಾರಿ ಮಾಡಿ, ವಿಚಾರಣೆಯನ್ನು ಏ.28ಕ್ಕೆ ಮುಂದೂಡಿತು.

ಏಕಸದಸ್ಯ ಪೀಠ ಸಿಬಿಐ ತನಿಖೆಗೆ ಆದೇಶಿಸಲು ನಿರಾಕರಿಸಿತ್ತು. ಹೀಗಾಗಿ ವಿಭಾಗೀಯ ಪೀಠಕ್ಕೆ ಸ್ನೇಹಮಯಿ ಕೃಷ್ಣ ಮೇಲ್ಮನವಿ ಸಲ್ಲಿಸಿದ್ದರು. ಲೋಕಾಯುಕ್ತ ಪೊಲೀಸರು ಸರ್ಕಾರದ ಅಧೀನದಲ್ಲಿದ್ದಾರೆ. ಇದರಿಂದಾಗಿ ನಿಷ್ಪಕ್ಷಪಾತವಾಗಿ ತನಿಖೆ ನಡೆಸಲು ಅಸಾಧ್ಯ. ಹೀಗಾಗಿ ಸಿಬಿಐ ಅಥವಾ ಇತರ ಸ್ವತಂತ್ರ ಸಂಸ್ಥೆಯಿಂದ ತನಿಖೆ ಮಾಡಿಸುವಂತೆ ಮನವಿ ಮಾಡಲಾಗಿದೆ.