ನ್ಯೂಸ್

ರೇಣುಕಸ್ವಾಮಿ ಹತ್ಯೆ ಪ್ರಕರಣ; ನಟ Darshan ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಬೆಂಗಳೂರು: ರೇಣುಕಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಪಾಲಾಗಿ ಚಿಕಿತ್ಸೆಯ ಕಾರಣಕ್ಕೆ ಮಧ್ಯಂತರ ಜಾಮೀನಿನ ಮೇಲೆ ಹೊರಬಂದಿರುವ ನಟ​ ದರ್ಶನ್​ (Darshan) ಸದ್ಯ ಆಸ್ಪತ್ರೆಗೆ ದಾಖಲಾಗಿದ್ದು, ವೈದ್ಯರು ಅವರಿಗೆ ಚಿಕಿತ್ಸೆಯನ್ನು ಮುಂದುವರೆಸಿದ್ದಾರೆ. ಇತ್ತ ನಟ ದರ್ಶನ್​ ಜಾಮೀನು ಕೋರಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದು, ನ್ಯಾಯಾಲಯವು ಅರ್ಜಿಯ ವಿಚಾರಣೆಯನ್ನು ನವೆಂಬರ್​ 26ಕ್ಕೆ ಮುಂದೂಡಿದೆ.

ಗೆಳತಿ ಪವಿತ್ರಾ ಗೌಡಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಮೆಸ್ಸೇಜ್​ ಕಳುಹಿಸಿದ್ದ ಚಿತ್ರದುರ್ಗ ಮೂಲದ ರೇಣುಕಸ್ವಾಮಿಯ ಹತ್ಯೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ನಟ ದರ್ಶನ್​ ಪರಪ್ಪನ ಅಗ್ರಹಾರದಲ್ಲಿ ರಾಜಾತಿಥ್ಯ ಪಡೆದ ಆರೋಪದ ಮೇಲೆ ಅವರನ್ನು ಬಳ್ಳಾರಿ ಕಾರಾಗೃಹಕ್ಕೆ ಸ್ಥಳಾಂತರಿಸಲಾಗಿತ್ತು. ಬಳ್ಳಾರಿ ಕಾರಾಗೃಹಕ್ಕೆ ಸ್ಥಳಾಂತರವಾದ ಬಳಿಕ ತೀವ್ರ ಬೆನ್ನು ನೋವಿನ ಸಮಸ್ಯೆಯಿಂದ ಬಳಲಿದ್ದ ನಟ ದರ್ಶನ್​ಗೆ ಹೈಕೋರ್ಟ್ ಆರು ವಾರಗಳ ಕಾಲ ಮಧ್ಯಂತರ ಜಾಮೀನನ್ನು ನೀಡಿತ್ತು. ಇದೀಗ ಜಾಮೀನು ಅವಧಿ ಮುಕ್ತಾಯವಾಗುತ್ತಿರುವ ಬೆನ್ನಲ್ಲೇ ನಟ ದರ್ಶನ್​ ಹೈಕೋರ್ಟ್​ ಮೊರೆ ಹೋಗಿದ್ದಾರೆ.

ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿಶ್ವಜಿತ್​ ಶೆಟ್ಟಿ ಅವರಿದ್ದ ಏಕಸದಸ್ಯ ಪೀಠವು ನಟ ದರ್ಶನ್, ಪವಿತ್ರಾ ಗೌಡ ಸೇರಿ 6 ಮಂದಿ ಆರೋಪಿಗಳ ಜಾಮೀನು ಅರ್ಜಿಯ ವಿಚಾರಣೆಯನ್ನು ನವೆಂಬರ್​ 26ಕ್ಕೆ ಮುಂದೂಡಿದ್ಧಾರೆ. ಇದೇ ವೇಳೆ ದರ್ಶನ್ ಪರ ವಕೀಲರು ಹೊಸ ವೈದ್ಯಕೀಯ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದರು.

ಬೆನ್ನು ನೋವಿನ ಕಾರಣ ಮಧ್ಯಂತರ ಜಾಮೀನಿನ ಮೇಲೆ ಹೊರಬಂದಿರುವ ನಟ ದರ್ಶನ್​ ಬಿಡುಗಡೆಯಾಗಿ ಮೂರು ವಾರಗಳಾಗಿದ್ದು, ಚಿಕಿತ್ಸೆಗೆಂದು ಬಿಜಿಎಸ್​ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬಿಡುಗಡೆಯಾಗಿ ಮೂರು ವಾರಗಳಾದರೂ ಈವರೆಗೆ ಯಾವುದೇ ಶಸ್ತ್ರಚಿಕಿತ್ಸೆ ಮಾಡಿಲ್ಲ ಎಂದು ಹೇಳಲಾಗಿದ್ದು, ಮಧ್ಯಂತರ ಜಾಮೀನು ರದ್ದತಿ ಕೋರಿ ಸುಪ್ರೀಂಕೋರ್ಟ್​ಗೆ ಮನವಿ ಸಲ್ಲಿಸಲು ಪೊಲೀಸರು ಸಿದ್ಧತೆ ನಡೆಸಿದ್ದು, ನವೆಂಬರ್​ 26ರಂದು ಏನಾಗಲಿದೆ ಎಂದು ಕಾದು ನೋಡಬೇಕಿದೆ.