ಶಿಮ್ಲಾ: ಹಿಮಾಚಲ ಪ್ರದೇಶದಲ್ಲಿ ಎಡಬಿಡದೆ ಮಳೆ ಸುರಿಯುತ್ತಿರುವ ಪರಿಣಾಮ ಕಳೆದ 24ಘಂಟೆಗಳಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅವಘಡಗಳಲ್ಲಿ 21 ಮಂದಿ ಮೃತಪಟ್ಟಿದ್ದಾರೆ ಎಂದು ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಮಾಹಿತಿ ನೀಡಿದ್ದಾರೆ.
ಮಳೆ ಕಡಿಮೆಯಾಗುವವರೆಗೂ ಜನತೆ ಮನೆಯಲ್ಲಿಯೇ ಇರಿ. ಪ್ರವಾಹ ಹಾಗೂ ಭೂ ಕುಸಿತ ಉಂಟಾಗಿರುವ ಪ್ರದೇಶಗಳಲ್ಲಿ ಜನತೆ ಅನಾವಶ್ಯಕವಾಗಿ ಓಡಾಡಬೇಡಿ. ಮಳೆ ಕಡಿಮೆಯಾಗುತ್ತಿದ್ದಂತೆ ಪರಿಹಾರ ಕಾರ್ಯಗಳನ್ನೂ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ಹಾಸ್ಟೆಲ್ ವಿದ್ಯಾರ್ಥಿನಿಯರ ಖಾಸಗಿ ವಿಡಿಯೋ ಚಿತ್ರೀಕರಿಸಿ ಬ್ಲ್ಯಾಕ್ಮೇಲ್ ಮಾಡುತ್ತಿದ್ದ ವಿದ್ಯಾರ್ಥಿಗಳು ಅರೆಸ್ಟ್
ಶಿಮ್ಲಾದಲ್ಲಿ ಸಂಭವಿಸಿದ ಭೂಕುಸಿತದಲ್ಲಿ 15-20 ಮಂದಿ ಮೃತಪಟ್ಟಿದ್ದು, ಅವಶೇಷಗಳಡಿ ಸಿಲುಕಿರುವವರನ್ನು ಹೊರತೆಗೆಯುವ ಕಾರ್ಯ ಭರದಿಂದ ಸಾಗಿದೆ. ಸೋಲನ್ ಜಿಲ್ಲೆಯಲ್ಲಿ ಸಂಭವಿಸಿದ ಭೂಕುಸಿತದಿಂದಾಗಿ ಶಿಮ್ಲಾ-ಚಂಢೀಗಡ ರಾಷ್ಟ್ರೀಯ ಹೆದ್ದಾರಿ ಸಂಪರ್ಕ ಕಡಿತಗೊಂಡಿದೆ.
ಪೊಲೀಸರು ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಅಧಿಕಾರಿಗಳು ಸ್ಥಳದಲ್ಲಿದ್ದು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಕಳೆದ 24 ಘಂಟೆಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ ಪರಿಣಾಮ ಕೆರೆ, ನದಿ ಹಾಗೂ ತಗ್ಗು ಪ್ರದೇಶಗಳು ಜಲಾವೃತಗೊಂಡಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ತಿಳಿಸಿದ್ದಾರೆ.