ನ್ಯೂಸ್

ಉತ್ತರ ಕೊಡುವಂತೆ ಬೆದರಿಕೆ ಹಾಕಿದ್ದಾರೆ! ಕೋರ್ಟ್​ನಲ್ಲಿ 'ಚಿನ್ನ'ದ ಬೆಡಗಿ ಕಣ್ಣೀರು, ನಟಿಗೆ 15 ದಿನಗಳ ನ್ಯಾಯಾಂಗ ಬಂಧನ | Ranya Rao

Ranya Rao: ದುಬೈನಿಂದ ಬೆಂಗಳೂರಿಗೆ ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದ ಆರೋಪದಡಿ ಬಂಧಿತರಾಗಿರುವ ನಟಿ ರನ್ಯಾ ರಾವ್, ಪ್ರಸ್ತುತ 15 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಟ್ಟಿದ್ದಾರೆ.

ಚಿನ್ನ ಸಾಗಾಣಿಕೆಯಲ್ಲಿ ನಟಿಗೆ ಪ್ರಭಾವಿ ರಾಜಕಾರಣಿಗಳ ಜತೆ ಸಂಪರ್ಕವಿದೆ ಎಂಬ ಶಂಕೆ ವ್ಯಕ್ತವಾಗಿದ್ದು, ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಆರೋಪ-ಪ್ರತ್ಯಾರೋಪಗಳು ಭುಗಿಲೆದ್ದಿವೆ. ಇದೆಲ್ಲದರ ಮಧ್ಯೆ ಇಂದು ಬೆಂಗಳೂರಿನ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯಕ್ಕೆ ಹಾಜರಾದ ರನ್ಯಾ ರಾವ್​ಗೆ ಕೋರ್ಟ್​ ಮುಂದಿನ 15 ದಿನಗಳ ಕಾಲ ನ್ಯಾಯಾಂಗ ಬಂಧನವನ್ನು ವಿಧಿಸಿದೆ.

ರನ್ಯಾರನ್ನು ಮೂರು ದಿನಗಳ ಕಾಲ ಕಸ್ಟಡಿಗೆ ಪಡೆದಿದ್ದ ಡಿಆರ್​ಐ, ಇಂದು ಕಸ್ಟಡಿ ಅವಧಿ ಮುಗಿಯುತ್ತಿದ್ದಂತೆ ಕೋರ್ಟ್​ ಮುಂದೆ ಹಾಜರುಪಡಿಸಿತು. ವಿಚಾರಣೆಯನ್ನು ಆಲಿಸಿದ ಬೆಂಗಳೂರಿನ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯ, ನಟಿಯನ್ನು 15 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವಂತೆ ಆದೇಶಿಸಿದೆ. ಇನ್ನು ಕೋರ್ಟ್​ನಲ್ಲಿ ಕಣ್ಣೀರಿಟ್ಟ ರನ್ಯಾ ರಾವ್ ಪ್ರಶ್ನಿಸಿದ ನ್ಯಾಯಧೀಶರು, ಏಕೆ ಕಣ್ಣೀರಾಕುತ್ತಿದ್ದೀರಿ? ಯಾರಾದರೂ ಹಲ್ಲೆ ಮಾಡಿದ್ರಾ? ಎಂದು ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ನಟಿ, ನನಗೆ ಉತ್ತರಿಸುವಂತೆ ಬೆದರಿಕೆ ಹಾಕಲಾಯಿತು ಎಂದು ಹೇಳಿದ್ದಾರೆ.

"ಕಂದಾಯ ಗುಪ್ತಚರ ನಿರ್ದೇಶನಾಲಯದ ಕಸ್ಟಡಿಯಲ್ಲಿ ನನಗೆ ಮೌಖಿಕವಾಗಿ ಚಿತ್ರಹಿಂಸೆ ಮತ್ತು ಬೆದರಿಕೆ ಹಾಕಲಾಯಿತು. ಇದರಿಂದ ನಾನು ಭಾವನಾತ್ಮಕವಾಗಿ ಕುಗ್ಗಿ ಹೋಗಿದ್ದೇನೆ. ಯಾವುದೇ ರೀತಿಯಲ್ಲೂ ದೈಹಿಕ ಚಿತ್ರಹಿಂಸೆ ಕೊಟ್ಟಿಲ್ಲ. ಆದರೆ, ಅಧಿಕಾರಿಗಳು ಬೆದರಿಕೆ ಹಾಕಿದ್ದಾರೆ" ಎಂದು ನ್ಯಾಯಾಲಯದ ಮುಂದೆ ತಮ್ಮ ಅಳಲು ತೋಡಿಕೊಂಡಿದ್ದಾರೆ.

ಏನಿದು ಪ್ರಕರಣ?

ಮಾ.03ರಂದು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕನ್ನಡ ನಟಿ ರನ್ಯಾ ರಾವ್​ ಅವ​ರಿಂದ 14.56 ಕೋಟಿ ರೂ. ಮೌಲ್ಯದ 14 ಕೆಜಿ ಚಿನ್ನದ ಗಟ್ಟಿಗಳನ್ನು ವಶಪಡಿಸಿಕೊಂಡ ಪೊಲೀಸರು, ಕೆಲವೇ ಕ್ಷಣದಲ್ಲಿ ನಟಿಯನ್ನು ಬಂಧಿಸಿ, ತನಿಖೆಗೆ ಒಳಪಡಿಸಿದರು. ಒಂದೇ ವರ್ಷದಲ್ಲಿ 27 ಬಾರಿ ದುಬೈಗೆ ಭೇಟಿ ನೀಡಿದ್ದ ಚೆಲುವೆ, 14.2 ಕೆಜಿ ಚಿನ್ನದ ಗಟ್ಟಿಗಳನ್ನು ಅಕ್ರಮವಾಗಿ ಸಾಗಿಸುವಾಗ ಸಿಕ್ಕಿಬಿದ್ದರು. ಅಧಿಕಾರಿಗಳ ಕಣ್ತಪ್ಪಿಸಿ ಇಷ್ಟೊಂದು ಚಿನ್ನವನ್ನು ಹೇಗೆ ಸಾಗಿಸುತ್ತಿದ್ದರು? ಇಂಥಾ ಕೆಲಸಕ್ಕೆ ‘ಮಾಣಿಕ್ಯ’ ನಟಿ ಕೈಹಾಕಿದ್ದೇಕೆ? ಎಂಬ ಗೊಂದಲ ಹಲವರಲ್ಲಿ ಮೂಡಿದೆ. ಸದ್ಯ ಇದಕ್ಕೆ ಉತ್ತರ ಹುಡುಕುತ್ತಿರುವ ಖಾಕಿ ಪಡೆ, ಪಾತ್ರಧಾರಿ ಹಿಂದಿರುವ ಸೂತ್ರಧಾರಿಗಾಗಿ ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದಾರೆ,(ಏಜೆನ್ಸೀಸ್).