ಶಿವಮೊಗ್ಗ: ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಒಂದು ವಾರದ ಬಳಿಕ ಎಲ್ಲವೂ ಸರಿಯಾಗಲಿದೆ. ಯಾರು ಪಕ್ಷದ ಅಧ್ಯಕ್ಷ ಸ್ಥಾನವನ್ನು ಅಲಂಕರಿಸುತ್ತಾರೆ ಎಂಬ ಗೊಂದಲಕ್ಕೆ ಕೆಲವೇ ದಿನಗಳಲ್ಲಿ ಉತ್ತರ ಸಿಗಲಿದೆ ಎಂದು ಖಡಕ್ ಆಗಿ ಹೇಳಿದ್ದಾರೆ.
"ಬಿಜೆಪಿಯಲ್ಲಿ ಆಂತರಿಕ ಪ್ರಜಾಪ್ರಭುತ್ವದ ವ್ಯವಸ್ಥೆ ಇದೆ. ಇದು ಯಾವುದೇ ರಾಜಕೀಯ ಪಕ್ಷದಲ್ಲಿ ಇಲ್ಲ. ವ್ಯವಸ್ಥಿತವಾಗಿ ಸಂಘಟನೆ ಚುನಾವಣೆ ನಡೆಯುತ್ತದೆ ಎಂದರೆ ಅದು ಬಿಜೆಪಿಯಲ್ಲಿ ಮಾತ್ರ. ಮಂಡಲ ಮಟ್ಟದಿಂದ ರಾಜ್ಯಮಟ್ಟದವರೆಗೂ ಚುನಾವಣೆ ನಡೆಯುತ್ತದೆ. ರಾಜ್ಯ, ರಾಷ್ಟ್ರೀಯ ಅಧ್ಯಕ್ಷರ ಚುನಾವಣೆ ವ್ಯವಸ್ಥಿತವಾಗಿ ನಡೆಯುತ್ತಿದೆ. ಇನ್ನು ಪಕ್ಷದ ಕಾರ್ಯಕರ್ತರು ಹೋರಾಟ ಮಾಡಿಕೊಂಡು ಬಂದಿದ್ದಾರೆ. ಕಳೆದ ಒಂದು ವರ್ಷದಿಂದ ಭ್ರಷ್ಟ, ದುಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟ ಮಾಡಿಕೊಂಡು ಪಕ್ಷ ಬಂದಿದೆ" ಎಂದರು.
"ನಾನು ಯಾವ ರೀತಿ ಅಧ್ಯಕ್ಷನಾಗಿ ಕೆಲಸ ಮಾಡಿದ್ದೇನೆ ಎಂಬುದು ಕಾರ್ಯಕರ್ತರಿಗೆ, ಪಕ್ಷದ ಮುಖಂಡರಿಗೆ ಗೊತ್ತಿದೆ. ಮುಂದಿನ ದಿನಗಳಲ್ಲಿ ನಾನೇ ರಾಜ್ಯದ ಬಿಜೆಪಿ ಅಧ್ಯಕ್ಷನಾಗುತ್ತೇನೆ ಎಂಬ ಸಂಪೂರ್ಣ ವಿಶ್ವಾಸ ನನಗಿದೆ. ಜಿಲ್ಲಾಧ್ಯಕ್ಷ ಚುನಾವಣೆಗೂ ಪೈಪೋಟಿ ಇತ್ತು. ರಾಜ್ಯಾಧ್ಯಕ್ಷ ಸ್ಥಾನಕ್ಕೂ ಅದೇ ರೀತಿಯ ಪೈಪೋಟಿ ಇದೆ. ಎಲ್ಲದನ್ನೂ ಕೇಂದ್ರದ ವರಿಷ್ಠರು ಗಮನಿಸುತ್ತಿದ್ದಾರೆ. ಎಲ್ಲವೂ ಒಳ್ಳೆಯದಾಗುತ್ತದೆ ಎಂಬ ವಿಶ್ವಾಸ ನಮ್ಮದು" ಎಂದು ಹೇಳಿದರು.
ಯತ್ನಾಳ್ ಹೇಳಿಕೆ ಪಕ್ಷಕ್ಕೆ ಡ್ಯಾಮೇಜ್ ಆಗಿದೆ ಎಂಬ ಸದಾನಂದಗೌಡ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, "ಈಗಾಗಲೇ ಏನೇನು ಡ್ಯಾಮೇಜ್ ಆಗಬೇಕೋ ಅವೆಲ್ಲವೂ ಆಗಿ ಹೋಗಿದೆ. ಒಂದು ವಾರದಲ್ಲಿ ಯಾರು ಅಧ್ಯಕ್ಷರಾಗುತ್ತಾರೆ ಎಂಬ ಉತ್ತರ ನಿಮಗೆ ಸಿಗಲಿದೆ. ಅದಾದ ಬಳಿಕ ಎಲ್ಲವೂ ಸರಿಯಾಗಲಿದೆ. ಕಳೆದ ವರ್ಷದಿಂದ ನಾನು ಬಹಿರಂಗವಾಗಿ ಹೇಳಿಕೆ ಕೊಟ್ಟಿಲ್ಲ. ಯಾರೇ ಏನೇ ಹೇಳಿದರೂ ಯಾರ ವಿರುದ್ಧವೂ ಬಹಿರಂಗ ಹೇಳಿಕೆ ನೀಡಿಲ್ಲ" ಎಂದರು.
"ರಾಜ್ಯದ ಅಧ್ಯಕ್ಷನ ಕರ್ತವ್ಯದ ಅರಿವು ನನಗಿದೆ. ಬಹಳ ದೊಡ್ಡ ಜವಾಬ್ದಾರಿಯನ್ನು ಕಳೆದೊಂದು ವರ್ಷದಿಂದ ಯಶಸ್ವಿಯಾಗಿ ನಡೆಸಿಕೊಂಡು ಬಂದಿದ್ದೇನೆ. ಇನ್ನು 8-10 ದಿನಗಳಲ್ಲಿ ರಾಜ್ಯದ ಅಧ್ಯಕ್ಷ ಯಾರೆಂಬುದಕ್ಕೆ ಉತ್ತರ ಸಿಗಲಿದೆ. ಆ ಬಳಿಕ ಎಲ್ಲಾ ಸಮಸ್ಯೆಗಳು ಬಗೆ ಹರಿಯಲಿದೆ" ಎಂದು ಬಿವೈವಿ ಹೇಳಿದ್ದಾರೆ.