ನ್ಯೂಸ್

20 ಸಾವಿರಕ್ಕಿಂತ ಕಡಿಮೆ ಅಭ್ಯರ್ಥಿಗಳಿದ್ದರೆ ಕಂಪ್ಯೂಟರ್ ಪರೀಕ್ಷೆಗೆ ಒಪ್ಪಿಗೆ ನೀಡಿದ ಸರ್ಕಾರ

ಬೆಂಗಳೂರು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ನಡೆಯುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 20 ಸಾವಿರಕ್ಕಿಂತ ಕಡಿಮೆ ಅಭ್ಯರ್ಥಿಗಳಿದ್ದರೆ ಅಂತಹ ಪರೀಕ್ಷೆಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆ ನಡೆಸುವ ನಿರ್ಧಾರಕ್ಕೆ ಕರ್ನಾಟಕ ಉನ್ನತ ಶಿಕ್ಷಣ ಪರಿಷತ್ತಿನ ಆಡಳಿತ ಮಂಡಳಿ ಸಭೆಯು ಒಪ್ಪಿಗೆ ನೀಡಿತು.

ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಕರ್ನಾಟಕ ಉನ್ನತ ಶಿಕ್ಷಣ ಪರಿಷತ್ತಿನ ಆಡಳಿತ ಮಂಡಳಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.

ಕೆಇಎ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವೆಬ್‌ಕಾಸ್ಟಿಂಗ್, ಕೃತಕ ಬುದ್ಧಿಮತ್ತೆಯ ಸಿಸಿ ಕ್ಯಾಮೆರಾ, ಬಯೋಮೆಟ್ರಿಕ್ ಹಾಗೂ ಮುಖ ಚಹರೆ (ೇಸ್ ರೆಕಗೈಸಿಂಗ್) ತಂತ್ರಜ್ಞಾನವನ್ನು ಅವಳವಡಿಸಿಕೊಂಡು ಪರೀಕ್ಷೆಗಳನ್ನು ಕಟ್ಟುನಿಟ್ಟಿನಿಂದ ನಡೆಸಲು ಸರ್ಕಾರವು ಒಪ್ಪಿಗೆ ನೀಡಿದೆ. ಆರಂಭದಲ್ಲಿ ಪದವಿ ಹಾಗೂ ಸ್ನಾತಕೋತ್ತರ ಪದವಿ ಆಧಾರಿತ ಪರೀಕ್ಷೆಗಳಲ್ಲಿ ಮಾತ್ರ ಕಂಪ್ಯೂಟರ್ ಆಧಾರಿತ ಪರೀಕ್ಷೆಗಳನ್ನು ನಡೆಸಲು ಒಪ್ಪಿಗೆ ನೀಡಲಾಗಿದೆ.

10 ಕೋಟಿ ರೂ. ಟೆಂಡರ್‌ಗೆ ಅನುಮತಿ:

ಎಐ ತಂತ್ರಜ್ಞಾನದ ಮೂಲಕ ಅಭ್ಯರ್ಥಿಗಳ ಬಯೋಮೆಟ್ರಿಕ್ ಮತ್ತು ಮುಖ ಚಹರೆಯನ್ನು ಪತ್ತೆ ಹಚ್ಚುವ ಯಂತ್ರಗಳನ್ನು ಖರೀದಿ ಮಾಡುವುದಕ್ಕಾಗಿ ಪ್ರಾಧಿಕಾರದ ವತಿಯಿಂದ 10 ಕೋಟಿ ರೂ.ಗಳ ಟೆಂಡರ್ ಕರೆಯಲು ಒಪ್ಪಿಗೆ ನೀಡಲಾಯಿತು.

ಆಧುನಿಕ ತಂತ್ರಜ್ಞಾನ ಜಾರಿ ಮಾಡುವುದರಿಂದ ಪರೀಕ್ಷೆಗೆ ಬದಲಿ ಅಭ್ಯರ್ಥಿ ಪರೀಕ್ಷೆ ಬರೆಯುವುದನ್ನು ತಪ್ಪಿಸಬಹುದಾಗಿದೆ. ಪರೀಕ್ಷಾ ಪ್ರಾಧಿಕಾರದ ಪರೀಕ್ಷೆಗಳು ಅತ್ಯಂತ ಪಾರದರ್ಶಕೆಯಿಂದ ನಡೆಸಲು ಇಂತಹ ವ್ಯವಸ್ಥೆಯನ್ನು ಜಾರಿಗೊಳಿಸಲು ಅನುಕೂಲವಾಗಲಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಲಾಗಿದೆ.

ಸಭೆಯಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ ಪಾಟೀಲ್, ಉನ್ನತ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಶ್ರೀಕರ್, ವೈದ್ಯಕೀಯ ಶಿಕ್ಷಣ ಕಾರ್ಯದರ್ಶಿ ಮೊಹಮ್ಮದ್ ಮೊಹ್ಸಿನ್, ಉನ್ನತ ಶಿಕ್ಷಣ ಆಯುಕ್ತ ಜಗದೀಶ್, ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಪ್ರಸನ್ನ ಹಾಗೂ ಆರ್‌ಜಿಯುಎಚ್‌ಎಸ್ ಕುಲಪತಿ ಡಾ. ಎಂ.ಕೆ. ರಮೇಶ್ ಉಪಸ್ಥಿತರಿದ್ದರು.