ಚಿಕ್ಕಮಗಳೂರು: ನಗರದಲ್ಲಿ ಪ್ರಮುಖವಾಗಿರುವ ನಾಲ್ಕು ರಸ್ತೆಗಳಲ್ಲಿ ವಾಹನಗಳ ನಿಲುಗಡೆಗೆ ಅನುವು ಮಾಡಿಕೊಟ್ಟಿದ್ದು, ಅಡ್ಡಾದಿಡ್ಡಿಯಾಗಿ ವಾಹನಗಳನ್ನು ನಿಲ್ಲಿಸಿದರೆ ದಂಡ ವಿಧಿಸಲಾಗುವುದು ಎಂದು ಎಸ್‌ಪಿ ಉಮಾ ಪ್ರಶಾಂತ್ ಎಚ್ಚರಿಕೆ ನೀಡಿದರು.
ಎಸ್ಪಿ ಕಚೇರಿಯಲ್ಲಿ ಮಂಗಳವಾರ ಸುಗಮ ಸಂಚಾರ ಮತ್ತು ರಸ್ತೆ ಸುರಕ್ಷಾ ಸಂಬಂಧ ಸಾರ್ವಜನಿಕರ ಸಭೆಯಲ್ಲಿ ಮಾತನಾಡಿ,ನಗರದಲ್ಲಿ ವರ್ಷದಿಂದ ವರ್ಷಕ್ಕೆ ವಾಹನಗಳ ದಟ್ಟಣೆ ಹೆಚ್ಚಾಗುತ್ತಿದ್ದು, ಪ್ರತಿಯೊಬ್ಬರೂ ಸಂಚಾರಿ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವ ಮೂಲಕ ಸುಗುಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಹೇಳಿದರು.
ನಗರದ ಎಂಜಿ ರಸ್ತೆ, ಆರ್.ಜಿ ರಸ್ತೆ, ಮಲ್ಲಂದೂರು ರಸ್ತೆಗಳಲ್ಲಿ ವಾಣಿಜ್ಯ ವ್ಯಾಪಾರ, ಗ್ಯಾರೇಜ್, ಆಸ್ಪತ್ರೆ, ಹೋಟೆಲ್‌ಗಳಿವೆ. ಈ ರಸ್ತೆಗಳಲ್ಲಿ ವಾಹನಗಳ ನಿಲುಗಡೆಗೆ ಅವಕಾಶ ಕಲ್ಪಿಸಿದ್ದರೂ ರಸ್ತೆ ಮಧ್ಯೆ ವಾಹನಗಳನ್ನು ನಿಲ್ಲಿಸಲಾಗುತ್ತಿದೆ. ರಸ್ತೆ ಸಂಚಾರ ಹಾಗೂ ಸುರಕ್ಷತೆ ಬಗ್ಗೆ ಸಾಕಷ್ಟು ಬಾರಿ ಜಾಗೃತಿ ಮೂಡಿಸಿದರೂ ತಪ್ಪು ಮಾಡುತ್ತಿದ್ದಾರೆ. ಸಂಚಾರಿ ನಿಯಮ ಉಲ್ಲಂಘನೆ ಕಂಡುಬಂದರೆ ದಂಡ ವಿಧಿಸಲಾಗುವುದು. ಯಾರ ಮುಲಾಜಿಗೂ ಒಳಗಾಗುವುದಿಲ್ಲ ಎಂದು ತಿಳಿಸಿದರು.
ಡಿವೈಎಸ್ಪಿ ಪುರುಷೋತ್ತಮ್ ಮಾತನಾಡಿ, ಜಿಲ್ಲೆಯಲ್ಲಿ ನೈಸರ್ಗಿಕ ಪ್ರವಾಸಿ ತಾಣಗಳು ಹೆಚ್ಚಾಗಿದ್ದು, ಇಲ್ಲಿಗೆ ಅಂತಾರಾಜ್ಯಗಳಿಂದಲೂ ಪ್ರವಾಸಿಗರು ಆಗಮಿಸುತ್ತಾರೆ. ವಾರಾಂತ್ಯದಲ್ಲಿ ವಾಹನ ದಟ್ಟಣೆ ಹೆಚ್ಚಾಗುತ್ತಿದ್ದು, ವಾಹನ ದಟ್ಟಣೆ ನಿಯಂತ್ರಣಕ್ಕೆ ಪ್ರತಿಯೊಬ್ಬರೂ ಸಹಕರಿಸಬೇಕು ಎಂದು ಹೇಳಿದರು.
ನಗರದಲ್ಲಿ ವಾಹನಗಳ ಸಂಚಾರ ಹೆಚ್ಚಾಗುತ್ತಿದ್ದು, ಭಾರಿ ಗಾತ್ರದ ವಾಹನಗಳಿಗೆ ನಗರ ಪ್ರವೇಶ ನಿಷೇಧಿಸಲಾಗಿದೆ. ಇವರಿಗೆ ಪರ್ಯಾಯ ಮಾರ್ಗ ಸೂಚಿಸಿದ್ದು, ಇದನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಸಲಹೆ ನೀಡಿದರು. ನಗರದಲ್ಲಿ 75 ಅಟೋ ನಿಲ್ದಾಣಗಳಿದ್ದು 4,000 ಆಟೋ ರೀಕ್ಷಾಗಳು ಸಂಚರಿಸುತ್ತಿವೆ. ಎಲ್ಲೆಂದರಲ್ಲಿ ವಾಹನ ನಿಲ್ಲಿಸಿ ಬೇರೆ ವಾಹನಗಳಿಗೆ ಕಿರಿಕಿರಿ ಉಂಟು ಮಾಡುತ್ತಿರುವ ದೂರುಗಳು ಬಂದಿವೆ ಎಂದರು.