ಕೋಲಾರ ಬಿಜೆಪಿ ಕಚೇರಿಯಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ವಿಪಕ್ಷ ನಾಯಕ ಆರ್.ಅಶೋಕ್ ಮಾತನಾಡಿದರು.
ಕೋಲಾರ: ಲೋಕಸಭೆ ಚುನಾವಣೆಯಲ್ಲಿ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಹಾಗೂ ಗ್ಯಾರಂಟಿ ಮುಂದಿಟ್ಟುಕೊಂಡು ಮತ ಕೇಳುತ್ತಿದ್ದಾರೆ. ರಾಹುಲ್‌ಗಾಂಧಿ ಹೆಸರು ಹೇಳಿದರೆ ಜನ ಮತ ಹಾಕುವುದಿಲ್ಲ ಎಂಬ ಭಯ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಶುರುವಾಗಿದೆ ಎಂದು ಪ್ರತಿ ಪಕ್ಷ ನಾಯಕ ಆರ್.ಅಶೋಕ ವ್ಯಂಗ್ಯವಾಡಿದರು.
ದೇಶಕ್ಕಾಗಿ ಚುನಾವಣೆ ನಡೆಯುತ್ತಿದ್ದು, ಕಾಂಗ್ರೆಸ್‌ನವರು ಇನ್ನು ರಾಜ್ಯದ ಗುಂಗಿನಲ್ಲೆ ಇದ್ದಾರೆ ಎಂದು ನಗರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ವ್ಯಂಗ್ಯವಾಡಿದರು.
ದೇಶದಲ್ಲಿ ಕಾಂಗ್ರೆಸ್‌ಗೆ ನಾಯಕತ್ವ ಇಲ್ಲ ಎಂದು ಆ ಪಕ್ಷದವರೇ ಒಪ್ಪಿಕೊಂಡಿದ್ದಾರೆ. ನಾವು ನರೇಂದ್ರ ಮೋದಿ ನಾಯಕತ್ವದಲ್ಲಿ ಚುನಾವಣೆ ಎದುರಿಸುತ್ತಿದ್ದೇವೆ ಎಂದು ನೇರವಾಗಿ ಹೇಳಿದ್ದೇವೆ. ಮನಮೋಹನ್‌ಸಿಂಗ್ ಸರ್ಕಾರ ಏನು ಮಾಡಿದೆ ಎಂಬುದನ್ನಾದರೂ ರಾಜ್ಯದ ಕಾಂಗ್ರೆಸ್ ನಾಯಕರು ಹೇಳಲಿ ಎಂದು ಸವಾಲು ಹಾಕಿದರು.
ಕಾಂಗ್ರೆಸ್‌ಗೆ ಮತ ಹಾಕಿದರೆ ಭ್ರಷ್ಟಾಚಾರಕ್ಕೆ ಬೆಂಬಲ ನೀಡಿದಂತಾಗುತ್ತದೆ. ಹಿಂದಿನ ಯುಪಿಎ ಸರ್ಕಾರ ಹಗರಣಗಳ ಸರಮಾಲೆಯನ್ನೇ ಸೃಷ್ಟಿಸಿತ್ತು. ಕಾಂಗ್ರೆಸ್‌ಗೆ ಮತ ನೀಡಿದರೆ ದೇಶದ ಅಭದ್ರತೆಗೆ ಬೆಂಬಲ ನೀಡಿದಂತಾಗುತ್ತದೆ ಎಂದು ಎಚ್ಚರಿಸಿದರು.
- ರಮೇಶ್‌ಕುಮಾರ್, ಕೆಎಚ್‌ಎಂ ಗ್ಯಾಂಗ್!
ಕೋಲಾರದಲ್ಲಿ ಕಾಂಗ್ರೆಸ್‌ನ ಸ್ಥಿತಿ ಮನೆಯೊಂದು ಎರಡು ಬಾಗಿಲಾಗಿದೆ. ರಮೇಶ್ ಕುಮಾರ್ ಮತ್ತು ಕೆ.ಎಚ್.ಮುನಿಯಪ್ಪ ಗ್ಯಾಂಗ್ ಇಲ್ಲಿದೆ. ಜತೆಗೆ ಸಿಎಂ ಸಿದ್ದರಾಮಯ್ಯನವರ ಗ್ಯಾಂಗ್ ಕೂಡ ಇದೆ. ಈಗ ಕಾಂಗ್ರೆಸ್‌ನಿಂದ ಸ್ಪರ್ಧಿಸಿರುವ ಅಭ್ಯರ್ಥಿ ಹೊಸ ಗ್ಯಾಂಗ್‌ಗೆ ಸೇರಿದ್ದಾರೆ. ಮೂರು ತಲೆಮಾರಿಗಾಗುವಷ್ಟು ಲೂಟಿ ಮಾಡಿದ್ದೇವೆ ಎಂದು ರಮೇಶ್ ಕುಮಾರ್ ಈ ಹಿಂದೆಯೇ ಹೇಳಿದ್ದಾರೆ ಎಂದು ಆರ್.ಅಶೋಕ್ ಕುಟುಕಿದರು.
- ಅಂಕಿ-ಅಂಶ ನೋಡಿ ಮಾತನಾಡಲಿ
ಸಚಿವ ಕೃಷ್ಣ ಬೈರೇಗೌಡ ಪ್ರಶ್ನೆ ಮಾಡುವುದರಲ್ಲಿ ನಿಪುಣರು, ಸಂಸತ್ತಿನಲ್ಲಿ ತೆರಿಗೆ ವಿಚಾರವಾಗಿ ಕಾಂಗ್ರೆಸ್ ಸಂಸದರು, ರಾಜ್ಯಸಭಾ ಸದಸ್ಯರು ಯಾರೂ ಧ್ವನಿ ಎತ್ತಿಲ್ಲ. ಅಲ್ಲಿ ಪ್ರಶ್ನೆ ಮಾಡುವುದು ಬಿಟ್ಟು ರಾಜ್ಯದಲ್ಲಿ ಆರೋಪ ಮಾಡುತ್ತಿದ್ದಾರೆ. ಯುಪಿಎ ಸರ್ಕಾರ ನೀಡಿದ್ದಕ್ಕಿಂತ ಹತ್ತು ಪಟ್ಟು ಹೆಚ್ಚು ಅನುದಾನವನ್ನು ರಾಜ್ಯಕ್ಕೆ ಕೇಂದ್ರ ಬಿಜೆಪಿ ಸರ್ಕಾರ ನೀಡಿದೆ. ಕೃಷ್ಣ ಬೈರೇಗೌಡರು ಅಂಕಿ ಅಂಶ ನೋಡಿ ಮಾತನಾಡಬೇಕು ಎಂದು ಆರ್.ಅಶೋಕ್ ಕಿವಿಮಾತು ಹೇಳಿದರು. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಬುದ್ಧಿ ಭ್ರಮಣೆಯಾಗಿದೆ. ಸಮ್ಮಿಶ್ರ ಸರ್ಕಾರವನ್ನು ಬೀಳಿಸುವಾಗ 14 ಶಾಸಕರು ಬಿಜೆಪಿಗೆ ಸೇರ್ಪಡೆಯಾಗಿದ್ದರು. ಅವರನ್ನು ಕಳುಹಿಸಿದ್ದೇ ಸಿದ್ದರಾಮಯ್ಯ. ಮಂಡ್ಯದಲ್ಲಿ ಕುಮಾರಸ್ವಾಮಿ ಮಗನನ್ನು ಸೋಲಿಸಿದ್ದು ನಾನೇ ಎಂದು ಸಿದ್ದರಾಮಯ್ಯ ಹೇಳಿದ್ದರು ಎಂದರು.
- ಕಾಂಗ್ರೆಸ್‌ನಿಂದ ಒಕ್ಕಲಿಗರಿಗೆ ಅನ್ಯಾಯ
ಆದಿಚುಂಚನಗಿರಿ ಮಠ ಎಲ್ಲ ಸಮುದಾಯಗಳನ್ನು ಪ್ರೀತಿಸುತ್ತದೆ. ಡಿ.ಕೆ.ಶಿವಕುಮಾರ್ ಭಯೋತ್ಪಾದಕರನ್ನು ಬ್ರದರ್ ಎಂದ ಬಳಿಕ ಅವರು ಒಕ್ಕಲಿಗ ನಾಯಕರಾಗಲು ಸಾಧ್ಯವಿಲ್ಲ. ಜಾತಿಗಣತಿ ಹೆಸರಲ್ಲಿ ಕಾಂಗ್ರೆಸ್ ಒಕ್ಕಲಿಗ ಸಮುದಾಯಕ್ಕೆ ಯಾವ ಅನ್ಯಾಯ ಮಾಡಿದೆ ಎಂಬುದು ತಿಳಿದಿದೆ. ಇವರು ಒಕ್ಕಲಿಗರ ಮತ ಹೇಗೆ ಕೇಳುತ್ತಾರೆ ಎಂದು ಅಶೋಕ್ ಪ್ರಶ್ನಿಸಿದರು.
ಮೈತ್ರಿ ಅಭ್ಯರ್ಥಿ ಮಲ್ಲೇಶ್ ಬಾಬು, ಸಂಸದ ಮುನಿಸ್ವಾಮಿ, ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಕೆ.ಎನ್.ವೇಣುಗೋಪಾಲ್, ಎಂಎಲ್ಸಿ ಇಂಚರ ಗೋವಿಂದರಾಜು ಇದ್ದರು.