ನವದೆಹಲಿ: ಒಂದು ರಾಷ್ಟ್ರ, ಒಂದು ಚುನಾವಣೆ ಪ್ರಸ್ತಾವನೆಗೆ ಬುಧವಾರ ಕೇಂದ್ರ ಸಚಿವ ಸಂಪುಟದ ಒಪ್ಪಿಗೆ ಸಿಕ್ಕಿದೆ.
ಕಳೆದ ತಿಂಗಳು ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಮಾಡಿದ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಒಂದು ದೇಶ, ಒಂದು ಚುನಾವಣೆ ಕುರಿತು ಮಾತನಾಡಿದ್ದರು. ಪದೇ ಪದೇ ಚುನಾವಣೆಗಳು ನಡೆಯುವುದರಿಂದ ದೇಶದ ಪ್ರಗತಿಗೆ ಅಡ್ಡಿಯಾಗುತ್ತದೆ ಎಂದು ಪ್ರಧಾನಿ ಮೋದಿ ಹೇಳಿದ್ದರು.
ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಅಧ್ಯಕ್ಷತೆಯಲ್ಲಿ ರಚಿಸಲಾದ ಉನ್ನತ ಮಟ್ಟದ ಸಮಿತಿಯು ಈ ವರ್ಷದ ಮಾರ್ಚ್‌ನಲ್ಲಿ ಮೊದಲ ಹಂತವಾಗಿ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸಲು ಶಿಫಾರಸು ಮಾಡಿದೆ. ವರದಿ ಪ್ರಕಾರ ಕೇಂದ್ರ ಸರ್ಕಾರ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಈ ಬಗ್ಗೆ ಮಸೂದೆಯನ್ನು ತರಲಿದೆ.
ಪ್ರಸ್ತುತ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರವು ತನ್ನ ಪ್ರಸ್ತುತ ಅಧಿಕಾರಾವಧಿಯಲ್ಲಿ ಒಂದು ರಾಷ್ಟ್ರ, ಒಂದು ಚುನಾವಣೆ ಜಾರಿಗೆ ತರಲಿದೆ. ಪ್ರಧಾನಿ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರದ ಮೂರನೇ ಅವಧಿಯ 100 ದಿನಗಳನ್ನು ಪೂರೈಸಿದ ನಂತರ, ಆಡಳಿತಾರೂಢ ಮೈತ್ರಿಕೂಟದಲ್ಲಿನ ಒಗ್ಗಟ್ಟು ಉಳಿದ ಅವಧಿಯಲ್ಲೂ ಉಳಿಯುತ್ತದೆ ಎಂದು ಮೂಲಗಳು ತಿಳಿಸಿವೆ.
ಇತ್ತೀಚೆಗಷ್ಟೇ ನಡೆದ ಲೋಕಸಭೆ ಚುನಾವಣೆಗೂ ಮುನ್ನ ಬಿಜೆಪಿ ಹೊರಡಿಸಿದ್ದ ಪ್ರಣಾಳಿಕೆಯಲ್ಲಿ ‘ಒಂದು ದೇಶ, ಒಂದು ಚುನಾವಣೆ’ ಎಂಬುದನ್ನೂ ಪ್ರಮುಖ ಭರವಸೆಯಾಗಿ ಸೇರಿಸಲಾಗಿತ್ತು.
ದೇಶಾದ್ಯಂತ ಏಕಕಾಲಕ್ಕೆ ಚುನಾವಣೆ ನಡೆಸುವ ತೀರ್ಮಾನದ ಬಗ್ಗೆ ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಅಶ್ವಿನ್ ವೈಷ್ಣವ್ ಮಾಹಿತಿ ನೀಡಿದ್ದಾರೆ. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅಶ್ವಿನ್ ವೈಷ್ಣವ್ ಅವರು ದೇಶದಲ್ಲಿ 2 ಹಂತದಲ್ಲಿ ಒನ್ ನೇಷನ್, ಒನ್ ಎಲೆಕ್ಷನ್ ಜಾರಿಗೆ ತರಲಾಗುತ್ತದೆ. ಒನ್ ನೇಷನ್ , ಒನ್ ಎಲೆಕ್ಷನ್‌ನಿಂದ ಅನೇಕ ಸಮಸ್ಯೆಗಳು ಪರಿಹಾರ ಆಗಲಿದೆ. ಇದು ನಮ್ಮ ದೇಶದ ಬೆಳವಣಿಗೆಗೂ ಸಹಕಾರಿಯಾಗಲಿದೆ. ಹೀಗಾಗಿ ಒನ್ ನೇಷನ್, ಒನ್ ಎಲೆಕ್ಷನ್ ಅನ್ನು ಸರ್ವಸಮ್ಮತಿಯಿಂದ ಜಾರಿಗೆ ತರುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.