ಶಿವಮೊಗ್ಗ: ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹ ಧನ ಸೇರಿ ಕನಿಷ್ಠ 10 ಸಾವಿರ ರೂ. ಮಾಸಿಕ ಗೌರವಧನ ಮತ್ತು ರಾಜ್ಯ ಸರ್ಕಾರ ಬಜೆಟ್‌ನಲ್ಲಿ ಘೋಷಿಸಿರುವಂತೆ ಒಂದು ಸಾವಿರ ರೂ. ಹೆಚ್ಚುವರಿ ನೀಡುವಂತೆ ಆದೇಶಿಸಬೇಕು ಎಂದು ಆಗ್ರಹಿಸಿ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಬುಧವಾರ ಆಶಾ ಕಾರ್ಯಕರ್ತೆಯರು ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಹೆಚ್ಚುವರಿ ಕೆಲಸದ ಆಧಾರದ ಮೇಲೆ ಹೆಚ್ಚುವರಿ ಇನ್ಸೆಂಟಿವ್ ನೀಡಬೇಕು. ಒಂದು ವೇಳೆ ಕಾಂಪೋನೆಂಟ್ಸ್‌ಗಳಿಂದ ಕಡಿಮೆ ಮೊತ್ತದ ಪ್ರೋತ್ಸಾಹ ಧನ ಬಂದಲ್ಲಿ ಸರ್ಕಾರವೇ ವ್ಯತ್ಯಾಸದ ಹಣವನ್ನು ಪಾವತಿಸಿ 10 ಸಾವಿರ ರೂ. ದೊರೆಯುವಂತೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.
ಕೂಡಲೇ ಆರೋಗ್ಯ ಸಚಿವರ ಸಮ್ಮುಖದಲ್ಲಿ ಸಂಘದ ಪದಾಧಿಕಾರಿಗಳೊಂದಿಗೆ ಸಭೆ ಮಾಡಿ ಬಹುದಿನಗಳ ಸಮಸ್ಯೆಗಳ ಪರಿಹಾರಕ್ಕೆ ಕ್ರಮ ಕೈಗೊಳ್ಳಬೇಕು. 20 ಆಶಾಗಳಿಗೆ ಒಬ್ಬರಂತೆ ಸುಗಮಕಾರರನ್ನು ನೇಮಿಸಿಕೊಂಡು ಕಳೆದ 12 ವರ್ಷಗಳಿಂದ ಇವರಿಗೆ ಕೇವಲ ಆರು ಸಾವಿರ ರೂ. ನೀಡಿ ಕೆಲಸ ಮಾಡಿಸಿಕೊಳ್ಳಲಾಗುತ್ತಿತ್ತು. ಏಕಾಏಕಿ ಆಶಾ ಸುಗಮಕಾರರನ್ನು ಕೆಲಸದಿಂದ ಮುಕ್ತಿ ಆದೇಶ ಹೊರಡಿಸಿರುವುದು ಸರಿಯಲ್ಲ. ಅವರಿಗೆ ಗೌರವಧನ ನೀಡಿ ಮತ್ತೆ ಕೆಲಸಕ್ಕೆ ಸೇರಿಸಿಕೊಳ್ಳಬೇಕು ಎಂದು ಆಗ್ರಹಿಸಿದರು.
ಸಂಘದ ಜಿಲ್ಲಾಧ್ಯಕ್ಷೆ ರಾಜೇಶ್ವರಿ, ಕಾರ್ಯದರ್ಶಿ ಚಂದ್ರಕಲಾ, ಪ್ರಮುಖರಾದ ಆಶಾ, ಸುಮಾ, ಸುಮಿತ್ರಾ, ಗಾಯತ್ರಿ, ರೇಣುಕಾ, ಲತಾ ಮುಂತಾದವರಿದ್ದರು.