ಸಾಗರ: ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಕೈಬಿಡುವಂತೆ ಒತ್ತಾಯಿಸಿ ಅ.4ರಿಂದ 15ರವರೆಗೆ ಉಪವಿಭಾಗಾಧಿಕಾರಿ ಕಚೇರಿ ಎದುರು ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ ಎಂದ ರೈತ ಸಂಘದ ಜಿಲ್ಲಾಧ್ಯಕ್ಷ ದಿನೇಶ್ ಶಿರವಾಳ ಹೇಳಿದರು.
ಯೋಜನೆ ವಿರುದ್ಧದ ಹೋರಾಟಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ಈ ಸತ್ಯಾಗ್ರಹದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು ಸ್ವಯಂಪ್ರೇರಿತವಾಗಿ ಪಾಲ್ಗೊಳ್ಳಲು ಮನವಿ ಮಾಡಿದರು. ಹೋರಾಟಕ್ಕೆ ಶ್ರೀ ರಾಘವೇಶ್ವರ ಭಾರತೀ ಸ್ವಾಮಿಗಳು, ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮಿಗಳು, ಬಂಗಾರಮಕ್ಕಿ ಶ್ರೀಗಳು, ಜಿಲ್ಲೆಯ ಮಠಾಧೀಶರು, ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ರೈತ ಸಂಘದ ದರ್ಶನ್ ಪುಟ್ಟಣ್ಣಯ್ಯ, ಚುಕ್ಕಿ ನಂಜುಂಡಸ್ವಾಮಿ, ಚೂನಪ್ಪ ಪೂಜಾರಿ, ಕೋಡಿಹಳ್ಳಿ ಚಂದ್ರಶೇಖರ್ ಪಾಲ್ಗೊಳ್ಳುವ ಭರವಸೆ ನೀಡಿದ್ದಾರೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಪರಿಸರವಾದಿ ಅಖಿಲೇಶ್ ಚಿಪ್ಪಳಿ ಮಾತನಾಡಿ, ಶರಾವತಿ ಪಂಪ್ಡ್ ಸ್ಟೋರೇಜ್‌ನಿಂದ ನಮ್ಮ ತಾಲೂಕಿಗೆ ಏನು ಪ್ರಯೋಜನ ಎಂದು ಯಾರೂ ಹೇಳುತ್ತಿಲ್ಲ. ಗುತ್ತಿಗೆದಾರರ ಶ್ರೇಯೋಭಿವೃದ್ಧಿಗೆ ಪೂರಕವಾದ ಯೋಜನೆ ಪರಿಸರ ವಿರೋಧಿಯಾಗಿದೆ. ಯೋಜನೆ ಅನುಷ್ಠಾನಕ್ಕೆ ಬಂದರೆ ಪುರಾತತ್ವ ಇಲಾಖೆಗೆ ಸೇರಿದ ಚತುರ್ಮುಖ ಬಸದಿ ಸೇರಿ, ನಾಲ್ಕು ಬಸದಿಗಳು ನಾಶವಾಗುತ್ತದೆ. ಅಮೂಲ್ಯ ಪ್ರಾಚೀನ ಸ್ಮಾರಕಗಳು ನಶಿಸಿಹೋಗುವಂತಿದ್ದರೂ ಪುರಾತತ್ವ ಇಲಾಖೆ ಸುಮ್ಮನಿರುವುದು ಹಲವು ಅನುಮಾನಕ್ಕೆ ಕಾರಣವಾಗಿದೆ. ಪ್ರತಿಯೊಬ್ಬರೂ ಹೋರಾಟವನ್ನು ಬೆಂಬಲಿಸಬೇಕು ಎಂದು ಮನವಿ ಮಾಡಿದರು. ಶಿವು ಆಲಳ್ಳಿ, ದೇವರಾಜ್, ರಾಮಚಂದ್ರ, ರಾಜು ಸುದ್ದಿಗೋಷ್ಠಿಯಲ್ಲಿದ್ದರು.