ಬೆಂಗಳೂರು: ಸರ್ಕಾರದ ಆಡಳಿತದಲ್ಲಿ ಪಾರದರ್ಶಕತೆ, ಹೊಣೆಗಾರಿಕೆಗೆ ಉತ್ತೇಜನ, ಭ್ರಷ್ಟಾಚಾರಕ್ಕೆ ತಡೆ ಹಾಕುವ ಉದ್ದೇಶದಿಂದ ಜಾರಿಗೊಳಿಸಿರುವ ಮಾಹಿತಿ ಹಕ್ಕು ಕಾಯ್ದೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಉದ್ದೇಶದಿಂದ ಪದವಿ ಹಾಗೂ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲು ಪಠ್ಯ ರೂಪಿಸುವಂತೆ ಕರ್ನಾಟಕ ಮಾಹಿತಿ ಆಯೋಗ ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿದೆ.
ಇದನ್ನೂ ಓದಿ: ಎರಡು ವೃತ್ತಗಳನ್ನು ವಿನೂತನ ರೀತಿಯಲ್ಲಿ ನಿರ್ಮಿಸಲು ಯೋಜನೆ ಡಿಸಿ ನಿತೀಶ್ ಕೆ., ಅಧ್ಯಕ್ಷತೆಯಲ್ಲಿ ವಿಶೇಷ ಸಭೆ
ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ ಅವರ ಅಧ್ಯಕ್ಷತೆಯಲ್ಲಿ ಸೋಮವಾರ (ಜುಲೈ 14) ರಂದು ಮಾಹಿತಿ ಹಕ್ಕು ಅಧಿನಿಯಮ ಕುರಿತು ನಡೆಯುವ ಉನ್ನತ ಮಟ್ಟದ ಸಭೆಯಲ್ಲಿ ಚರ್ಚೆ ಮಾಡಬೇಕಾದ ಪ್ರಮುಖ ವಿಷಯಗಳ ಕುರಿತು ರಾಜ್ಯ ಮಾಹಿತಿ ಆಯುಕ್ತರು, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ರನ್ನು ಭೇಟಿಯಾದ ಮಾಹಿತಿ ಹಕ್ಕು ಅಧಿನಿಯಮದ ಪರಿಣಾಮಕಾರಿ ಜಾರಿಗೆ ಅಗತ್ಯವಾದ ಶಿಫಾರಸುಗಳ ಪಟ್ಟಿಯನ್ನು ಸಲ್ಲಿಸಿದ್ದಾರೆ. ಸಭೆಯಲ್ಲಿ ಈ ವಿಚಾರಗಳ ಬಗ್ಗೆ ಚರ್ಚೆ ನಡೆಸಿ ತೀರ್ಮಾನ ಮಾಡುವಂತೆ ಒತ್ತಾಯಿಸಿದ್ದಾರೆ.
* ಪದವಿ ಹಾಗೂ ಪದವಿ ಪೂರ್ವ ಶಿಕ್ಷಣದಲ್ಲಿ ಪಠ್ಯವಾಗಿ ಅಳವಡಿಸುವುದರಿಂದ ವಿದ್ಯಾರ್ಥಿಗಳಲ್ಲಿ ಅಧಿನಿಯಮದ ಬಗ್ಗೆ ಅರಿವು ಮೂಡುತ್ತದೆ. ಈ ಬಗ್ಗೆ ಪಠ್ಯ ಪರಿಷ್ಕರಣಾ ಮಂಡಳಿಗಳು ಹಾಗೂ ವಿಶ್ವವಿದ್ಯಾಲಯಗಳ ಶೈಕ್ಷಣಿಕ ಮಂಡಳಿಗಳಿಗೆ ಶಿಫಾರಸು ಮಾಡುವಂತೆ ಕೋರಲಾಗಿದೆ.
* ಮಾಹಿತಿ ಹಕ್ಕು ಕಾಯ್ದೆ ಜಾರಿಗೆ ಬಂದು 20 ವರ್ಷಗಳಾಗಿದ್ದರೂ ಸರ್ಕಾರಿ ಅಧಿಕಾರಿ ಮತ್ತು ನೌಕರರಲ್ಲಿ ಇನ್ನೂ ಅರಿವು ಮೂಡಿಸುವ ಅಗತ್ಯವಿದೆ. ಆದ್ದರಿಂದ ಕರ್ನಾಟಕ ಲೋಕಸೇವಾ ಆಯೋಗ, ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹಾಗೂ ವಿವಿಧ ಇಲಾಖೆಗಳು ನೌಕರರಿಗಾಗಿ ನಡೆಸುವ ವಿವಿಧ ಪರೀಕ್ಷೆಗಳಲ್ಲಿಯೂ ಮಾಹಿತಿ ಹಕ್ಕು ಕಾಯ್ದೆಯನ್ನು ಒಂದು ವಿಷಯವನ್ನಾಗಿ ಸೇರಿಸಬೇಕು. ಪರೀಕ್ಷೆಯಲ್ಲಿ ಉತ್ತೀರ್ಣವಾದರೆ ಮಾತ್ರ ಬಡ್ತಿ, ವೇತನ ಪರಿಕ್ಷರಣೆಗೆ ಅರ್ಹತೆ ಎಂಬ ಬಗ್ಗೆ ಅಧಿಸೂಚನೆ ಹೊರಡಿಸಬೇಕೆಂದು ಸಲಹೆ ನೀಡಲಾಗಿದೆ.
ಕರ್ನಾಟಕ ಮಾಹಿತಿ ಆಯೋಗದ ಸಿಬ್ಬಂದಿ ಸಮಸ್ಯೆ ಬಹಳ ಇದೆ. ಕಾಯಂ ಸಿಬ್ಬಂದಿಗಳೇ ಇಲ್ಲ. ಹೊರ ಗುತ್ತಿಗೆ ಆಧಾರದಲ್ಲಿ ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇಪ್ಪತ್ತು ವರ್ಷವಾದರೂ ಸರ್ಕಾರ ಸಿಬ್ಬಂದಿಗೆ ಸಂಬಂಧಿಸಿದಂತೆ ಸಿ ಅಂಡ್ ಆರ್ ನಿಯಮಗಳನ್ನೇ ರೂಪಿಸಿಲ್ಲ. ಕೂಡಲೇ ನಿಯಮಗಳನ್ನು ರೂಪಿಸುವ ಮೂಲಕ ಸಿಬ್ಬಂದಿ ಸಮಸ್ಯೆ ಬಗೆ ಹರಿಸಬೇಕು.
ಲೋಕಾಯುಕ್ತದಲ್ಲಿನ ಹೊರಗುತ್ತಿಗೆ ಸಿಬ್ಬಂದಿಗಳಿಗೆ ರಾಜ್ಯ ಕಾರ್ಮಿಕ ಇಲಾಖೆಯ ವೇತನ ಪರಿಷ್ಕರಣೆಯಾಗಿ ಹೊಸ ವೇತನ ಜಾರಿಗೆ ಬಂದಿದೆ. ಅದೇ ಮಾದರಿಯಲ್ಲಿ ಕರ್ನಾಟಕ ಮಾಹಿತಿ ಆಯೋಗ ಪೀಠಗಳಲ್ಲಿ ಕಾರ್ಯ ನಿರ್ವಹಿಸುವ ತೀರ್ಪು ಬರಹಗಾರರು, ಶೀಘ್ರಲಿಪಿಗಾರರು, ಕಾನೂನು ಸಹಾಯಕರು, ದತ್ತಾಂಶ ನಮೂದಕರು, ಸಹಾಯಕರು, ದಲಾಯತ್‌ಗಳಿಗೆ ವೇತನ ಪರಿಷ್ಕರಣೆಯಾಗಬೇಕು.