ನ್ಯೂಸ್

ರಾಜ್ಯದಲ್ಲಿ ಬೇಜವಾಬ್ದಾರಿ ಕಾಂಗ್ರೆಸ್ ಸರ್ಕಾರ, ಕಳೆದೊಂದು ವರ್ಷದಲ್ಲಿ ಅಭಿವೃದ್ಧಿ ಆರಂಭವೇ ಆಗಿಲ್ಲ!: ವಿಜಯೇಂದ್ರ ಆರೋಪವೇನು?

ಬೆಂಗಳೂರು: ಮಹಿಳಾ ದೌರ್ಜನ್ಯದ ಸಂದರ್ಭದಲ್ಲೂ ರಾಜ್ಯದ ಕಾಂಗ್ರೆಸ್ ಸರ್ಕಾರ ಬೇಜವಾಬ್ದಾರಿಯಿಂದ ವರ್ತಿಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಕ್ಷೇಪಿಸಿದರು.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ನಡೆದ ಬಿಜೆಪಿ ಮಹಿಳಾ ಮೋರ್ಚಾದ ರಾಜ್ಯ ಮಟ್ಟದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದ ಜನರು ಈ ಸರ್ಕಾರಕ್ಕೆ ಶಾಪ ಹಾಕುತ್ತಿದ್ದಾರೆ. ಇದು ಜನವಿರೋಧಿ ಸರ್ಕಾರ ಎಂದು ಟೀಕಿಸಿದರು.

ವಿಪಕ್ಷವಾಗಿದ್ದಾಗ ಹೋರಾಟಗಳು ಅನಿವಾರ್ಯ. ಚುನಾವಣೆ ಬಂದಾಗ ಮಾತ್ರ ಹೋರಾಟ ಮಾಡಿದರೆ ಅದು ಜನತೆಗೆ ಮಾಡಿದ ಅವಮಾನ ಮತ್ತು ಅನ್ಯಾಯ. ರಾಜ್ಯದ ಚುಕ್ಕಾಣಿ ಹಿಡಿದ ಸರ್ಕಾರ ಜನವಿರೋಧಿ ನೀತಿಗಳನ್ನು ಅನುಸರಿಸುತ್ತದೋ ಆಗ, ರಾಜ್ಯದ ಜನರ ಪರವಾಗಿ ಹೋರಾಡುವುದು ನಮ್ಮ ಕರ್ತವ್ಯ ಎಂದು ನುಡಿದರು.

ಈ ದುಷ್ಟ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಮಹಿಳೆಯರ ಮೇಲೆ ನಿರಂತರವಾಗಿ ದೌರ್ಜನ್ಯ ಹೆಚ್ಚಾಗಿದೆ. ರಾಜ್ಯದಲ್ಲಿ ವಾಲ್ಮೀಕಿ ನಿಗಮದ ಹಗರಣ, ಮೂಡ ಹಗರಣದ ವಿರುದ್ಧ ಹೋರಾಟಗಳು ನಡೆದಿವೆ. ಮಹಿಳಾ ದೌರ್ಜನ್ಯ ನಿರಂತರವಾಗಿ ನಡೆಯುತ್ತಿದೆ. ಮಹಿಳೆಯರ ಮೇಲಿನ ದೌರ್ಜನ್ಯದ ಸಂದರ್ಭದಲ್ಲಿ ಮುಖ್ಯಮಂತ್ರಿ, ಗೃಹ ಸಚಿವ, ಸಚಿವರ ನಡವಳಿಕೆ ಪ್ರಮುಖವಾಗುತ್ತದೆ ಎಂದು ವಿಶ್ಲೇಷಿಸಿದರು.

ಆದರೆ ಕಳೆದೊಂದು ವರ್ಷದಲ್ಲಿ ಅಭಿವೃದ್ಧಿ ಆರಂಭವೇ ಆಗಿಲ್ಲ. ಅಭಿವೃದ್ಧಿ ಕಾರ್ಯಗಳಿಗೆ ಇವರು ಚಾಲನೆಯನ್ನೇ ಕೊಟ್ಟಿಲ್ಲ. ಮಹಿಳೆಯರಿಗೆ ಗೃಹಲಕ್ಷ್ಮಿ ಎಂದರು ಲೋಕಸಭಾ ಚುನಾವಣೆ ಬಂದಿತ್ತು. ಮತದಾನಕ್ಕೆ 3-4 ದಿನಗಳ ಮೊದಲು 3 ಕಂತು ಬಿಡುಗಡೆ ಮಾಡಿದ್ದರು ಎಂದು ವಿವರಿಸಿದರು. ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್ ಚುನಾವಣೆ ಬಂದಾಗ ಮತ್ತೆ ಕಂತು ಬಿಡುಗಡೆ ಆಗಲಿದೆ ಎಂದು ತಿಳಿಸಿದರು.

ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಬರದಿದ್ದರೆ ಗ್ಯಾರಂಟಿ ಸ್ಥಗಿತ ಎಂದು ಬೆದರಿಸಿದ್ದರು. ಉಚಿತ ಬಸ್ ಪ್ರಯಾಣದಿಂದ ಶಾಲಾ ಮಕ್ಕಳು, ಕಾಲೇಜು ವಿದ್ಯಾರ್ಥಿಗಳು ಪರದಾಡುವಂತಾಗಿದೆ. ಉಚಿತ ಬಸ್ ಪ್ರಯಾಣದ ಹೆಸರಿನಲ್ಲಿ ಮಹಿಳೆಯರ ಮೂಗಿಗೆ ತುಪ್ಪ ಹಚ್ಚಿದ್ದಾರೆ ಎಂದು ಟೀಕಿಸಿದರು.

ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ ಅಧ್ಯಕ್ಷರಾದ ಕು. ಕೆ. ಮಂಜುಳ ಅವರು ಮಾತನಾಡಿ, ಮಹಿಳೆಯರ ಮೇಲೆ ದೌರ್ಜನ್ಯ ನಡೆದಾಗ ನಿರ್ದಾಕ್ಷಿಣ್ಯ ಕ್ರಮ ಅಗತ್ಯ. ಆಗ ದುಷ್ಟರು, ದುರುಳರು, ಕ್ರಿಮಿಗಳು ಮನೆ ಸೇರಿಕೊಳ್ಳುತ್ತಾರೆ ಎಂದು ತಿಳಿಸಿದರು.

ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯರು ಮತ್ತು ಮಹಿಳಾ ಮೋರ್ಚಾ ರಾಜ್ಯ ಉಸ್ತುವಾರಿ ಶ್ರೀಮತಿ ಸೋನಲ್ ಬೆನ್ ಪಟೇಲ್, ವಿಧಾನಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಡಾ.ಶೋಭಾ, ಮಹಿಳಾ ಮೋರ್ಚಾ ರಾಜ್ಯ ಮತ್ತು ಜಿಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.