ಸಾಂದರ್ಭಿಕ ಚಿತ್ರ 
ನ್ಯೂಸ್

ಟ್ರಾಫಿಕ್​ ಫೈನ್ ಮೊತ್ತ ಹೆಚ್ಚಾಗಿದ್ದರೆ ಚಿಂತೆ ಬಿಡಿ! 50% ರಿಯಾಯಿತಿಯೊಂದಿಗೆ ದಂಡ ಕಟ್ಟಿ!

ಬೆಂಗಳೂರು: ಸಂಚಾರ ನಿಯಮ ಉಲ್ಲಂಘನೆ ದಂಡದ ಮೊತ್ತ ದುಪ್ಪಟ್ಟು ಆಗಿದೀಯೇ. ಚಿಂತೆ ಬಿಡಿ ರಾಜ್ಯ ಸಾರಿಗೆ ಇಲಾಖೆ, ಬಾಕಿ ಇರುವ ಸಂಚಾರ ನಿಯಮ ಉಲ್ಲಂಘನೆ ದಂಡದ ಮೊತ್ತವನ್ನು ಫೆ.11ರ ಒಳಗೆ ಪಾವತಿಸಿದರೇ ಶೇ.50 ವಿನಾಯಿತಿ ನೀಡುವುದಾಗಿ ಗುರುವಾರ ಆದೇಶ ಹೊರಡಿಸಿದೆ.

ಹೈಕೋರ್ಟ್ ನ್ಯಾಯಾಧೀಶರು ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷರಾದ ನ್ಯಾ. ಬಿ. ವೀರಪ್ಪ ಅವರ ಅಧ್ಯಕ್ಷತೆಯಲ್ಲಿ ಜ.27ರಂದು ನಡೆದ ಸಭೆಯಲ್ಲಿ ರಾಜ್ಯ ಸಾರಿಗೆ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದರು. ಎಲ್ಲರಿಗೂ ನ್ಯಾಯ ಒದಗಿಸುವ ಸಲುವಾಗಿ ಬಾಕಿ ಇರುವ ಟ್ರಾಫಿಕ್ ಫೈನ್ ಪಾವತಿಗೆ ವಿನಾಯಿತಿ ನೀಡುವಂತೆ ಚರ್ಚೆ ನಡೆಸಿದ್ದರು.

ಇದಕ್ಕೆ ರಾಜ್ಯ ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರು ಗ್ರೀನ್ ಸಿಗ್ನಲ್ ತೋರಿದ್ದರು. ಇದರ ಮೇರೆಗೆ ಕಾನೂನು ಸೇವೆಗಳ ಪ್ರಾಧಿಕಾರ, ರಾಜ್ಯಾದ್ಯಂತ ಸಂಚಾರ ಪೊಲೀಸರು ದಾಖಲಿಸಿರುವ ಸಂಚಾರ ಉಲ್ಲಂಘನೆ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ.50 ವಿನಾಯಿತಿ ನೀಡುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು.

ಈ ಬಗ್ಗೆ ಕಾನೂನು ಇಲಾಖೆ ಅಧಿಕಾರಿಗಳ ಒಪ್ಪಿಗೆ ಪಡೆದ ಸಾರಿಗೆ ಇಲಾಖೆ, ಶೇ.50 ವಿನಾಯಿತಿ ನೀಡಿದೆ. ಹಲವು ದಿನಗಳಿಂದ ಬಾಕಿ ಉಳಿಸಿಕೊಂಡಿರುವ ಸಂಚಾರ ದಂಡವನ್ನು ಫೆ.11ರ ಒಳಗೆ ಪಾವತಿಸಿದರೇ ಶೇ.50 ವಿನಾಯಿತಿ ಸಿಗಲಿದೆ. ನಿಗದಿತ ದಿನಾಂಕದಂದು ಬಾಕಿ ಪ್ರಕರಣಗಳನ್ನು ಇತ್ಯಾರ್ಥ ಮಾಡಿಕೊಳ್ಳುವರಿಗೆ ಮಾತ್ರ ಇದು ಅನ್ವಯ ಆಗಲಿದೆ. ಆನಂತರ ಬಂದವರಿಗೆ ವಿನಾಯಿತಿ ಸಿಗುವುದಿಲ್ಲ ಎಂದು ಸಾರಿಗೆ ಇಲಾಖೆ ಸ್ಪಷ್ಟಪಡಿಸಿದೆ.

ಬೆಂಗಳೂರು ನಗರ ಸಂಚಾರ ಪೊಲೀಸ್ ವಿಭಾಗದಲ್ಲಿ ಹಲವು ವರ್ಷಗಳಿಂದ ಅಂದಾಜು 2 ಕೋಟಿ ಪ್ರಕರಣಗಳು ಬಾಕಿ ಉಳಿದಿವೆ. ರಾಜ್ಯ ಸರ್ಕಾರ ಕೊಟ್ಟಿರುವ ಅವಕಾಶವನ್ನು ಜನರು ಸದುಪಯೋಗ ಪಡಿಸಿಕೊಳ್ಳಬೇಕು. ಆನ್‌ಲೈನ್ ಅಥವಾ ಸಂಚಾರ ಪೊಲೀಸ್ ಠಾಣೆಯಲ್ಲಿ ದಂಡದ ಮೊತ್ತವನ್ನು ಪಾವತಿಸಿ ವಿನಾಯಿತಿ ಪಡೆಯವಂತೆ ಪೊಲೀಸ್ ಅಧಿಕಾರಿಗಳು ಸಲಹೆ ನೀಡಿದ್ದಾರೆ.