ನ್ಯೂಸ್

ಜನರನ್ನು ಭಾವನಾತ್ಮಕವಾಗಿ ಕೆರಳಿಸಿ ಬಕ್ರಾ ಮಾಡೋದು ಪ್ರಧಾನಿ ಮೋದಿ ಸಾಧನೆ: ಸಿದ್ದರಾಮಯ್ಯ

ಚಿತ್ರದುರ್ಗ: ಅಧಿಕಾರದಲ್ಲಿದ್ದಾಗ ಹಣ ಲೂಟಿ ಮಾಡಿ, ಚುನಾವಣಾ ಸಮಯದಲ್ಲಿ ಜನರನ್ನು ಭಾವನಾತ್ಮಕವಾಗಿ ಕೆರಳಿಸಿ ಬಕ್ರಾ ಮಾಡೋದು ಪ್ರಧಾನಿ ಮೋದಿ ಅವರ ಸಾಧನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಚಿತ್ರದುರ್ಗದಲ್ಲಿ ಆಯೋಜಿಸಿದ್ದ ಬೃಹತ್ ಬಹಿರಂಗ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಆಪರೇಷನ್ ಕಮಲಕ್ಕೆ ಸಾವಿರಾರು ಕೋಟಿ ಎಲ್ಲಿಂದ ಬಂತು ಮಿಸ್ಟರ್ ಮೋದಿಯವರೇ? ಕಾಂಗ್ರೆಸ್ ಮತ್ತು ಬೇರೆ ಪಕ್ಷದ ಶಾಸಕರುಗಳಿಗೆ ಕೋಟಿ ಕೋಟಿ ಕೊಡುವುದಕ್ಕೆ ಹಣ ಎಲ್ಲಿಂದ ಬರುತ್ತೆ? ಅದು ಕಪ್ಪು ಹಣ ಅಲ್ಲವೇ? ದೇಶದ ಜನಕ್ಕೆ ಉತ್ತರ ಕೊಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.

ಒಂದು ರೂಪಾಯಿ ಕೂಡ ಹೆಚ್ಚಾಗಲಿಲ್ಲ: ವಿದೇಶದಿಂದ ಕಪ್ಪು ಹಣ ತಂದು ಪ್ರತಿಯೊಬ್ಬ ಭಾರತೀಯನ ಕುಟುಂಬಕ್ಕೆ 15 ಲಕ್ಷ ರೂಪಾಯಿ, ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ, ರೈತರ ಆದಾಯ ದುಪ್ಪಟ್ಟು ಮಾಡ್ತೀವಿ ಅಂತ ಭಾಷಣ ಮಾಡಿದ್ರು. ಆದಾಯ ಒಂದು ರೂಪಾಯಿ ಕೂಡ ಹೆಚ್ಚಾಗಲಿಲ್ಲ. ಪೆಟ್ರೋಲ್, ಡೀಸೆಲ್, ಅಡುಗೆ ಗ್ಯಾಸ್, ರಸಗೊಬ್ಬರ, ಎಣ್ಣೆ, ಕಾಳು ಬೇಳೆ ಎಲ್ಲವೂ ಅತ್ಯಂತ ಕಡಿಮೆ ಬೆಲೆಗೆ ಸಿಗುವಂತೆ ಮಾಡ್ತೀನಿ ಅಂದಿದ್ರಲ್ಲಾ ಮಾಡಿದ್ರಾ ಮಿಸ್ಟರ್ ಪ್ರಧಾನಿ ಮೋದಿ ಅವರೇ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಬಿಜೆಪಿ ಕಾಲದಲ್ಲಿ ಆದ ಬೆಲೆ ಏರಿಕೆಯಿಂದ ಸಂಕಷ್ಟಕ್ಕೆ ಸಿಲುಕಿದ್ದ ಕುಟುಂಬಗಳಿಗೆ ಕೊಂಚ ನೆಮ್ಮದಿ ನೀಡಬೇಕು ಎನ್ನುವ ಕಾರಣದಿಂದ ಐದು ಗ್ಯಾರಂಟಿ ಜಾರಿ ಮಾಡಿದೆವು. ಪ್ರತೀ ಕುಟುಂಬಕ್ಕೆ 4 ರಿಂದ 6 ಸಾವಿರ ರೂಪಾಯಿ ಉಳಿತಾಯವಾಗಿ ಜನರ ಕೊಳ್ಳುವ ಶಕ್ತಿ ಹೆಚ್ಚಾಯಿತು. ಇದು ಸಾಧ್ಯವಾಗಿದ್ದು ನಮ್ಮ ಕಾಂಗ್ರೆಸ್ ಸರ್ಕಾರದಿಂದ ಎಂದರು.

ಮನುಸ್ಮೃತಿ ಜಾರಿಗೆ ತರಲು ಅವಕಾಶ ಕೊಡಬೇಡಿ: ಈ ದೇಶದ ಶೇ.95 ರಷ್ಟು ಬಹುಸಂಖ್ಯಾತ ಜನಸಮುದಾಯಕ್ಕೆ ಸಾಮಾಜಿಕ ನ್ಯಾಯ ಮತ್ತು ಸಮಾನ ಅವಕಾಶಗಳನ್ನು ಒದಗಿಸುತ್ತಿರುವುದು ನಮ್ಮ ಸಂವಿಧಾನ. ಈ ಸಂವಿಧಾನವನ್ನು ಬದಲಾಯಿಸುತ್ತೀವಿ ಎನ್ನುವುದು ಕೇಂದ್ರ ಬಿಜೆಪಿ ಅಜೆಂಡಾ. ಇದನ್ನು ಬಿಜೆಪಿ ಕೇಂದ್ರ ಸಚಿವರಾಗಿದ್ದವರೇ ಬಹಿರಂಗವಾಗಿ ಹೇಳಿದ್ದಾರೆ. ಆದ್ದರಿಂದ ದೇಶದ ಸಂವಿಧಾನವನ್ನು ಬದಲಾಯಿಸಿ ಮನುಸ್ಮೃತಿ ಜಾರಿಗೆ ತರಲು ಅವಕಾಶ ಕೊಡಬೇಡಿ ಎಂದು ಹೇಳಿದರು.

ಕಾರಜೋಳ ಬಳಿ ಸಿಕ್ಕಾಪಟ್ಟೆ ಹಣ ಇರಬಹುದು: ಚಿತ್ರದುರ್ಗದ ಬಿಜೆಪಿ ಅಭ್ಯರ್ಥಿ ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಇಲ್ಲಿಯವರಲ್ಲ. ಕಾಂಗ್ರೆಸ್ ಅಭ್ಯರ್ಥಿ ಚಂದ್ರಪ್ಪ ಅವರು ಸೋತಾಗಲೂ ಜನರ ನಡುವೆ ಇದ್ದು ತಪಸ್ಸಿನಂತೆ ಜನರ ಸಮಸ್ಯೆಗಳಿಗೆ ಸ್ಪಂದಿಸಿದ್ದಾರೆ. ಸಮಾಜ ಕಲ್ಯಾಣ ಸಚಿವರಾಗಿ ಕಾರಜೋಳ ಅವರು ಹಿಂದುಳಿದವರು, ದಲಿತರು, ಶ್ರಮಿಕರು, ದುಡಿಯುವ ವರ್ಗಗಳಿಗೆ ಏನೇನೂ ಮಾಡಿಲ್ಲ. ಕಾರಜೋಳ ಅವರ ಬಳಿ ಸಿಕ್ಕಾಪಟ್ಟೆ ಹಣ ಇರಬಹುದು. ಆದರೆ ಚಂದ್ರಪ್ಪ ಅವರಲ್ಲಿ ಜನಸೇವೆ ಮಾಡುವ ಸಜ್ಜನಿಕೆ, ಕಾಳಜಿ ಇದೆ. ಆದ್ದರಿಂದ ಚಿತ್ರದುರ್ಗದ ಜನತೆ "ಮಿಸ್ಟರ್ ಕಾರಜೋಳ್ ಪ್ಲೀಸ್ ಗೋ ಬ್ಯಾಕ್" ಎಂದು ಒಕ್ಕೋರಲಿನಿಂದ ಹೇಳಬೇಕು ಎಂದು ಆಗ್ರಹಿಸಿದರು.

ಹಣ ಏಕೆ ವಾಪಾಸ್ ಕೊಡಲಿಲ್ಲ: ಆರ್​ಎಸ್ಎಸ್ ನಲ್ಲಿ ಈ ಕೇಂದ್ರ ಬಿಜೆಪಿ ನಾಯಕರಿಗೆ ಸುಳ್ಳು ಹೇಳುವ ತರಬೇತಿ ಕೊಡ್ತಾರೆ. ಸುಳ್ಳಿನ ಮೇಲೆ ಸುಳ್ಳು ಹೇಳಿಕೊಂಡು ತಿರುಗ್ತಾ ಇದಾರೆ. ರಾಜ್ಯದ ಜನರ ಪಾಲಿನ ಬರಗಾಲದ ಹಣ ಏಕೆ ವಾಪಾಸ್ ಕೊಡಲಿಲ್ಲ ಎಂದು ನಾಡಿನ ಜನತೆ ಪ್ರಶ್ನೆ ಕೇಳಿದ್ರು. ಆದರೆ ರಾಜ್ಯ ಸರ್ಕಾರ 3 ತಿಂಗಳು ಲೇಟಾಗಿ ಮನವಿ ಮಾಡಿದ್ದಾಗಿ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ಭಯಂಕರ ಸುಳ್ಳು ಹೇಳಿದರು ಎಂದು ಕೇಂದ್ರ ಸಚಿವರ ವಿರುದ್ಧ ಗುಡುಗಿದರು.

ಬಡವರ ರಕ್ತ ಕುಡಿಯುವ ಇವರಿಗೆ ನಾಚಿಕೆ, ಮಾನ, ಮರ್ಯಾದೆ ಇಲ್ಲ. ಇಷ್ಟು ಭೀಕರ ಬರಗಾಲ ಬಂದಿದ್ದರೂ ಒಂದೇ ಒಂದು ರೂಪಾಯಿ ರಾಜ್ಯದ ಪಾಲಿನ ಹಣ ಕೊಡದೆ ಸುಳ್ಳು ಹೇಳಿಕೊಂಡು ತಿರುಗ್ತೀರಲ್ಲಾ, ನಾಚಿಕೆ ಇಲ್ವಾ ನಿಮಗೆ ಅಮಿತ್ ಶಾ ಅವರೇ ಎಂದು ಸಿಎಂ ತಿರುಗೇಟು ನೀಡಿದರು.