ಬೆಂಗಳೂರು:
ರಾಜ್ಯ ಸರ್ಕಾರದ ಜನ ವಿರೋಧಿ ನೀತಿಗಳ ವಿರುದ್ಧ ಹೋರಾಟಗಳನ್ನು ಹಮ್ಮಿಕೊಳ್ಳುವುದು ಹಾಗೂ ತಳಮಟ್ಟದಲ್ಲಿ ಪಕ್ಷ ಸಂಘಟನೆ ಮಾಡುವ ಬಗ್ಗೆ ಶನಿವಾರ ಬೆಂಗಳೂರಿನಲ್ಲಿ ಜೆಡಿಎಸ್ ಅಲ್ಪಸಂಖ್ಯಾತ ಘಟಕದ ಸಭೆಯಲ್ಲಿ ನಿರ್ಣಯಿಸಲಾಗಿದೆ.
ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹೆಚ್.ಎಂ. ರಮೇಶ್ ಗೌಡ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಚುನಾವಣೆಗೆ ಪಕ್ಷವನ್ನು ಈಗಿನಿಂದಲೇ ಸಜ್ಜುಗೊಳಿಸಲು ನಿರ್ಧರಿಸಲಾಗಿದೆ.
ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರ ನಿರ್ದೇಶನದಂತೆ ಸದಸ್ಯತ್ವ ನೋಂದಣಿ ಅಭಿಯಾನ ಕೈಗೊಳ್ಳಲಾಗಿದೆ. ಅದರ ಮುಂದುವರೆದ ಭಾಗವಾಗಿ ಮತಗಟ್ಟೆ, ಬಡಾವಣೆ ಹಂತದಲ್ಲಿ ಪಕ್ಷದ ಸಂಘಟನೆಯನ್ನು ಬಲಗೊಳಿಸಬೇಕು. ಅಸಂಖ್ಯಾತ ಮುಖಂಡರು, ಕಾರ್ಯಕರ್ತರು ಹೆಚ್ಚು ಸಕ್ರಿಯವಾಗಿ ಕೆಲಸ ಮಾಡಬೇಕು ಎಂದರು.
ಸಭೆಯಲ್ಲಿ ಬೆಂಗಳೂರು ಮಹಾನಗರ ಜನತಾದಳ ಜಾತ್ಯತೀತ ಪಕ್ಷದ ಮುಸ್ಲಿಂ ಅಲ್ಪಸಂಖ್ಯಾತರ ವಿಭಾಗದ ಮುಖಂಡರು, ಪದಾಧಿಕಾರಿಗಳು, ವಿಧಾನಸಭಾ ಕ್ಷೇತ್ರ ಅಧ್ಯಕ್ಷರು, ವಾರ್ಡ್ ಅಧ್ಯಕ್ಷರು ಹಾಗೂ ಪ್ರಮುಖರು ಭಾಗವಹಿಸಿದ್ದರು.
ಬೆಂಗಳೂರು ನಗರ ಅಲ್ಪಸಂಖ್ಯಾತರ ವಿಭಾಗದ ಅಧ್ಯಕ್ಷ ಅಪ್ರೋಜ್ ಬೇಗ್, ಪುಲಿಕೇಶಿ ನಗರ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಸೈಯದ್ ತಹಸಿನ್, ಬೆಂಗಳೂರು ನಗರ ಮಹಿಳಾ ವಿಭಾಗದ ಅಧ್ಯಕ್ಷೆ ಶೈಲಾ ಸಂತೋಷ್ ರಾವ್, ಬೆಂಗಳೂರು ನಗರ ಮಾತೃ ಘಟಕದ ಕಾರ್ಯಾಧ್ಯಕ್ಷರಾದ ಕೆ ವಿ ನಾರಾಯಣಸ್ವಾಮಿ, ಮಹಾಪ್ರಧಾನ ಕಾರ್ಯದರ್ಶಿ ಎಸ್.ರಮೇಶ್ ಮತ್ತಿತರರು ಭಾಗವಹಿಸಿದ್ದರು.