ಶ್ರೀನಗರ: 90 ಸಂಖ್ಯಾಬಲದ ಜಮ್ಮು-ಕಾಶ್ಮೀರ ವಿಧಾನಸಭೆ ಚುನಾವಣೆಗೆ ಮತದಾನ ಮುಗಿದಿದ್ದು, ಫಲಿತಾಂಶ ಪ್ರಕಟವಾಗುವ (Election Result) ಮುನ್ನವೇ ಬಿಜೆಪಿ ಅಭ್ಯರ್ಥಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮೃತರನ್ನು ಮುಷ್ತಾಕ್ ಬುಖಾರಿ ಎಂದು ಗುರುತಿಸಲಾಗಿದ್ದು, ಇವರಿಗೆ 75 ವರ್ಷ ವಯಸ್ಸಾಗಿತ್ತು.
ಪೂಂಚ್ನ ಸುರನ್ಕೋಟೆಯಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಫರ್ಧಿಸಿದ್ದ ಬುಖಾರಿ ತಮ್ಮ ಮನೆಯಲ್ಲಿದ್ದ ವೇಳೆ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.
ಇದನ್ನೂ ಓದಿ: Pakistan ತಂಡದ ನಾಯಕತ್ವ ತ್ಯಜಿಸಿದ ಬಾಬರ್ ಅಜಂ
ಸುರನ್ಕೋಟೆ ಕ್ಷೇತ್ರದಿಂದ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಬುಖಾರಿ ಅವರು ಒಮ್ಮೆ ಸಚಿವರಾಗಿಯೂ ಸೇವೆ ಸಲ್ಲಿಸಿದ್ಧಾರೆ. ಗುಡ್ಡಗಾಡು ಪ್ರದೇಶಗಳಲ್ಲಿ ವಾಸಿಸುತ್ತಿರುವ ಸಮುದಾಯಕ್ಕೆ ಕೇಂದ್ರ ಸರ್ಕಾರ ಈ ವರ್ಷ ಪರಿಶಿಷ್ಟ ಪಂಗಡದ ಸ್ಥಾನಮಾನ ನೀಡಿತ್ತು. ಇದಾದ ಬಳಿಕ ಈ ವರ್ಷ (2024) ಫೆಬ್ರವರಿಯಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದರು.
ಬುಖಾರಿ ಅವರ ಸಾವಿಗೆ ಜಮ್ಮು-ಕಾಶ್ಮೀರ ಬಿಜೆಪಿ ಘಟಕದ ಅಧ್ಯಕ್ಷ ರವೀಂದರ್ ರೈನಾ, ಮಾಜಿ ಸಿಎಂ ಮೆಹಬೂಬಾ ಮುಫ್ತಿ, ಮಾಜಿ ಡಿಸಿಎಂ ಕವಿಂದರ್ ಗುಪ್ತಾ ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ.