ಬೆಂಗಳೂರು: ನೀವು ಕರ್ನಾಟಕದಲ್ಲಿದ್ದ ಮೇಲೆ ಸೂಚನಾ ಫಲಕಗಳನ್ನು ಕನ್ನಡದಲ್ಲೇ ಪ್ರದರ್ಶಿಸಬೇಕು ಎಂದು ವಾಣಿಜ್ಯ ಸಂಸ್ಥೆಗಳನ್ನು ಉದ್ದೇಶಿಸಿ ಹೈಕೋರ್ಟ್ ಮೌಖಿಕವಾಗಿ ಹೇಳಿದೆ.
ವಾಣಿಜ್ಯ ಮತ್ತು ಇತರೆ ಸಂಸ್ಥೆಗಳ ಸೂಚನಾ ಫಲಕಗಳಲ್ಲಿ ಶೇ.60 ಗಾತ್ರದಲ್ಲಿ ಕಡ್ಡಾಯವಾಗಿ ಕನ್ನಡ ಭಾಷೆಯಲ್ಲಿರಬೇಕು ಎಂದು ಸರ್ಕಾರ ಹೊರಡಿಸಿರುವ ಸುತ್ತೋಲೆ ಪ್ರಶ್ನಿಸಿ ಭಾರತೀಯ ರಿಟೇಲರ್ಸ್ ಅಸೋಸಿಯೇಷನ್ ಸೇರಿ ಹಲವು ಸಂಘಟನೆಗಳು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಹೇಮಂತ್ ಚಂದನಗೌಡರ್ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.
ಈ ವೇಳೆ ಅರ್ಜಿದಾರರ ಪರ ವಾದ ಮಂಡಿಸಿದ ವಕೀಲರು, ನ.1ರಂದು ರಾಜ್ಯೋತ್ಸವ ಇದೆ. ಬಳಿಕ ರಾಜ್ಯದಲ್ಲಿ ಕನ್ನಡ ಅಭಿಯಾನ ಆರಂಭವಾಗಲಿದೆ. ಹಾಗಾಗಿ ಅರ್ಜಿಯನ್ನು ತುರ್ತು ವಿಚಾರಣೆ ನಡೆಸಬೇಕು ಎಂದು ನ್ಯಾಯಪೀಠಕ್ಕೆ ಮನವಿ ಮಾಡಿದರು
ದಾಖಲೆಗಳನ್ನು ಪರಿಶೀಲಿಸಿದ ನ್ಯಾಯಪೀಠ, ನೀವು ( ವಾಣಿಜ್ಯ ಸಂಸ್ಥೆಗಳು) ಈ ರಾಜ್ಯದಲ್ಲಿ ವಹಿವಾಟು ನಡೆಸುತ್ತಿದ್ದೀರಿ.
ಹೀಗಿದ್ದ ಮೇಲೆ ನೀವು ಕನ್ನಡ ಭಾಷೆಯಲ್ಲಿಯೂ ಸೂಚನಾ ಫಲಕಗಳನ್ನು ಪ್ರದರ್ಶಿಸಬೇಕು. ಅದಕ್ಕೆ ಯಾವುದೇ ವಿನಾಯ್ತಿ ಇಲ್ಲ ಎಂದು ಮೌಖಿಕವಾಗಿ ಹೇಳಿದರು. ಅಲ್ಲದೆ, ಕನ್ನಡ ಭಾಷಾ ರಕ್ಷಣೆ ಸಂಬಂಧ ಶ್ರಮಿಸುತ್ತಿರುವ ಕನ್ನಡ ರಕ್ಷಣಾ ವೇದಿಕೆಯ ಹೋರಾಟವನ್ನು ಪ್ರಸ್ತಾಪಿಸಿದರು.
ಅರ್ಜಿದಾರರ ಪರ ವಕೀಲರು ಅರ್ಜಿಯನ್ನು ತುರ್ತು ವಿಚಾರಣೆಗೊಳಪಡಿಸಬೇಕು ಎಂಬ ಮನವಿಯನ್ನು ತಳ್ಳಿಹಾಕಿದ ನ್ಯಾಯಾಲಯ, ಕಳೆದ ಮಾ. 18ರಂದು ನೀಡಿದ್ದ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದೆಂಬ ಮಧ್ಯಂತರ ಆದೇಶವನ್ನು ಮುಂದುವರಿಸಿ ವಿಚಾರಣೆಯನ್ನು ಮುಂದೂಡಿತು.
ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ತಿದ್ದುಪಡಿ ಕಾಯ್ದೆ 2022ಗೆ ತಿದ್ದುಪಡಿ ತರುವ ಮೂಲಕ 2024ರ ಫೆ.26ರಂದು ಸರ್ಕಾರವು ಎಲ್ಲ ವಾಣಿಜ್ಯ ಸಂಸ್ಥೆಗಳು ತಮ್ಮ ಬೋರ್ಡ್ ಗಳಲ್ಲಿ ಶೇ.60 ಗಾತ್ರದಲ್ಲಿ ಕಡ್ಡಾಯವಾಗಿ ಕನ್ನಡ ಬಳಕೆ ಮಾಡಲೇಬೇಕೆಂದು ಆದೇಶ ಹೊರಡಿಸಿತ್ತು.
ಈ ಹಿಂದೆ ಪ್ರಕರಣದ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠ ರಾಜ್ಯದಲ್ಲಿ ವಾಣಿಜ್ಯ ವಹಿವಾಟು ನಡೆಸುವ ಸಂಸ್ಥೆಗಳು ಕನ್ನಡ ಭಾಷೆಯನ್ನು ಪಾಲಿಸಬೇಕಾಗುತ್ತದೆ ಎಂದು ಹೇಳಿತ್ತು. ಸೂಚನಾ ಫಲಕಗಳಲ್ಲಿ ಶೇ.60 ಕನ್ನಡವಿಲ್ಲದ ವಾಣಿಜ್ಯ ಸಂಸ್ಥೆಗಳನ್ನು ಮುಚ್ಚಿಸುವುದು ಸರಿಯಲ್ಲ. ಮೇಲ್ನೋಟಕ್ಕೆ ಇದನ್ನು ಒಪ್ಪಲಾಗದು, ಸಂಸ್ಥೆಗಳಿಗೆ ಸ್ವಲ್ಪ ಸಮಯಾವಕಾಶ ನೀಡಬೇಕಾಗುತ್ತದೆ ಎಂದು ಹೇಳಿತ್ತು. ಅಲ್ಲದೆ, ಸದ್ಯಕ್ಕೆ ವಾಣಿಜ್ಯ ಸಂಸ್ಥೆಗಳ ವಿರುದ್ಧ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ಮಧ್ಯಂತರ ಆದೇಶ ನೀಡಿ ವಿಚಾರಣೆಯನ್ನು ಮುಂದೂಡಿತ್ತು.