ಬೆಂಗಳೂರು: ಕೆಲ ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಚಿವ ಮನೋಹರ್ ತಹಸೀಲ್ದಾರ್ ( Manohar Tahsildar ) ಅವರು ಇಂದು (ನ.21) ಕೊನೆಸಿರೆಳೆದಿದ್ದಾರೆ. ಅವರಿಗೆ 80 ವರ್ಷ ವಯಸ್ಸಾಗಿತ್ತು.
ಅನಾರೋಗ್ಯ ಹಿನ್ನೆಲೆಯಲ್ಲಿ ಮನೋಹರ್ ಅವರು ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಶಂಕರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿದ್ದಾರೆ. ನಾಲ್ಕು ಜನ ಪುತ್ರರು, ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧು ಬಳಗವನ್ನ ಬಿಟ್ಟು ಅಗಲಿದ್ದಾರೆ. ಇತ್ತೀಚಿಗೆ ಸಂಸದ ಹಾಗೂ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಸ್ಪತ್ರೆಗೆ ಭೇಟಿ ನೀಡಿ ಮನೋಹರ್ ಅವರ ಆರೋಗ್ಯ ವಿಚಾರಿಸಿದ್ದರು.
ಇಂದು ಮಧ್ಯಾಹ್ನ ಮೃತದೇಹವನ್ನು ಹಾನಗಲ್ ಎನ್‌ಸಿಜೆಸಿ ಮಹಾವಿದ್ಯಾಲಯ ಅವರಣದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇಡಲಾಗುತ್ತದೆ. ಇದಾದ ಬಳಿಕ ಮನೋಹರ್ ಅವರ ಹುಟ್ಟೂರಾದ ಅಕ್ಕಿಹೊಳಿ ಗ್ರಾಮದಲ್ಲಿರುವ ತೋಟದ ಜಮೀನಿನಲ್ಲಿ ಅಂತ್ಯಕ್ರಿಯೆ ನಡೆಸಲಾಗುತ್ತದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಮನೋಹರ್ ಅವರು ಹಾನಗಲ್ ಕ್ಷೇತ್ರದ ಮಾಜಿ ಶಾಸಕರಾಗಿದ್ದರು. 2015ರಲ್ಲಿ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಅಬಕಾರಿ ಸಚಿವರಾಗಿದ್ದರು. 2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಸಿಗದ ಕಾರಣ ಜೆಡಿಎಸ್ ಸೇರಿದ್ದರು. ಲೋಕಸಭಾ ಚುನಾವಣೆ ವೇಳೆ ಜೆಡಿಎಸ್ ತೊರೆದು ಬಿಜೆಪಿ ಸೇರಿದ್ದರು.
ಬಲಿಜ ಸಮುದಾಯಕ್ಕೆ ಸೇರಿದ್ದ ಮನೋಹರ್ ತಹಶೀಲ್ದಾರ್ 4 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದು ಹಿಂದೆ ಎಸ್.ಎಂ. ಕೃಷ್ಣ ಅವರು ಮುಖ್ಯಮಂತ್ರಿಗಳಾಗಿದ್ದ ವಿಧಾನಸಭೆ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. 1978ರಲ್ಲಿ ಮೊದಲ ಬಾರಿಗೆ ಹಾನಗಲ್ಲ ವಿಧಾನಸಭೆ ಕ್ಷೇತ್ರದಿಂದ ಆಯ್ಕೆಯಾದ ಮನೋಹರ್ ತಹಶೀಲ್ದಾರ್ ಅವರು 1989, 1999, 2013 ಸೇರಿ 4 ಬಾರಿ ಗೆಲುವು ಸಾಧಿಸಿದ್ದರು. ಈಗ ಮನೋಹರ ತಹಶೀಲ್ದಾರ ತೀವ್ರ ಅನಾರೋಗ್ಯದಿಂದ ನಿಧನರಾಗಿದ್ದಾರೆ.
ಮನೋಹರ್ ತಹಶೀಲ್ದಾರ ನಿಧನಕ್ಕೆ ಜಿಲ್ಲೆಯ ಮುಖಂಡರು ಹಾಗೂ ಅಭಿಮಾನಿ ಬಳಗ ಸಂತಾಪ ಸೂಚಿಸಿದೆ.