ಬೆಂಗಳೂರು: ಮರಾಠ ಸಮುದಾಯಕ್ಕೆ ಮೀಸಲಾತಿ ಹೆಚ್ಚಳ ಮಾಡುವಂತೆ ಆಗ್ರಹಿಸಿ ಮಹಾರಾಷ್ಟ್ರದಲ್ಲಿ ಪ್ರತಿಭಟನೆಗಳು ತೀವ್ರ ಸ್ವರೂಪ ಪಡೆದಿದ್ದು, ಕರ್ನಾಟಕ ಸರ್ಕಾರಕ್ಕೆ ಸೇರಿದ KKRTC ಬಸ್ಗೆ ಪ್ರತಿಭಟನಾಕಾರರು ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದ್ದಾರೆ.
ಬೀದರ್ ಜಿಲ್ಲೆ ಭಾಲ್ಕಿ ತಾಲ್ಲೂಕಿನಿಂದ ಪುಣೆಯತ್ತ ಹೊರಟಿದ್ದ KKRTC ಬಸ್ KA-38-F-1201 ಅನ್ನು ಮಹಾರಾಷ್ಟ್ರದ ಉಮರ್ಗಾ ಬಳಿ ಬೆಂಕಿ ಹಚ್ಚಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಅಂತರ್ರಾಜ್ಯ ಬಸ್ ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿರುವುದಾಗಿ KKRTC ನಿಗಮದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ KKRTC ವ್ಯವಸ್ಥಾಪಕ ನಿರ್ದೇಶಕ ಎಂ. ರಾಚಪ್ಪ, ಕರ್ನಾಟಕ ಸರ್ಕಾರಕ್ಕೆ ಸೇರಿದ ಬಸ್ಗೆ ಬೆಂಕಿ ಹಚ್ಚಿದ ಪರಿಣಾಮ ಅಂತರ್ರಾಜ್ಯ ಸಾರಿಗೆ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಮಹಾರಾಷ್ಟ್ರದ ಉಮರ್ಗಾ ಬಳಿ ಪ್ರತಿಭಟನಕಾರರು ಬಸ್ಗೆ ಅಡ್ಡಹಾಕಿ ಪ್ರಯಾಣಿಕರನ್ನು ಕೆಳಗಿಳಿಸಿ ವಾಹನಕ್ಕೆ ಬೆಂಕಿ ಹಚ್ಚಿದ್ದಾರೆ.
ಸ್ಥಳೀಯ ಪೊಲೀಸರ ನೆರವಿನಿಂದ 39 ಪ್ರಯಾಣಿಕರಿಗೆ ಪರ್ಯಾಯ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಮಾಹಾರಾಷ್ಟ್ರದಲ್ಲಿ ಕಾರ್ಯಾಚರಣೆ ನಡೆಸುತ್ತಿರುವ ರಾಜ್ಯ ಸಾರಿಗೆ ನಿಗಮಕ್ಕೆ ಸೇರಿದ ಬಸ್ಗಳನ್ನು ಹತ್ತಿರದ ಪೊಲೀಸ್ ಠಾಣೆ ಹಾಗೂ ಡಿಪೋಗಳಲ್ಲಿ ನಿಲ್ಲಿಸುವಂತೆ ಸೂಚಿಸಲಾಗಿದೆ. ಈ ಹಿನ್ನಲೆಯಲ್ಲಿ ತುಳಜಾಪುರ ಯಾತ್ರೆ ಸೇರಿದಂತೆ ಮಾಹಾರಾಷ್ಟ್ರಕ್ಕೆ ಅಂತರ್ರಾಜ್ಯ ಬಸ್ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು KKRTC ವ್ಯವಸ್ಥಾಪಕ ನಿರ್ದೇಶಕರಾದ ಎಂ. ರಾಚಪ್ಪ ತಿಳಿಸಿದ್ದಾರೆ.