ಬೆಂಗಳೂರು: ವಾಲ್ಮೀಕಿ ಮಹರ್ಷಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಕೋಟ್ಯಂತರ ರೂ. ಹಗರಣಕ್ಕೆ ಸಂಬಂಧಿಸಿ ನಿಗಮದ ಅಧಿಕಾರಿ ಚಂದ್ರಶೇಖರ ಆತ್ಮಹತ್ಯೆ ಮಾಡಿಕೊಂಡಿದ್ದುದು ತಿಳಿದ ಸಂಗತಿಯೇ. ಈ ಸಂಬಂಧ ಸಿಐಡಿ ತನಿಖೆ ನಡೆಸುತ್ತಿದ್ದು, ಅಧಿಕಾರಿಗಳು ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.
ಚಾರ್ಜ್ ಶೀಟ್‌ನಲ್ಲಿ ಮಾಜಿ ಸಚಿವ ಬಿ. ನಾಗೇಂದ್ರ ಮತ್ತು ನಿಗಮದ ಅಧ್ಯಕ್ಷ, ಕಾಂಗ್ರೆಸ್ ಶಾಸಕ ಬಸನಗೌಡ ದದ್ದಲ್ ಹೆಸರನ್ನು ಉಲ್ಲೇಖಿಸದೆ, ಅಧಿಕಾರಿಗಳಾದ ಪದ್ಮನಾಭ, ಪರುಶುರಾಮ್ ರನ್ನು ಆರೋಪಿಗಳನ್ನಾಗಿ ಮಾಡಿ ಚಾರ್ಜ್ ಶೀಟ್ ಸಲ್ಲಿಸಲಾಗಿದೆ.
ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರ್ ಮೇ 26ರಂದು ಶಿವಮೊಗ್ಗದ ವಿನೋಬನಗರ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಆ ಬಳಿಕ ಸಚಿವ ಬಿ. ನಾಗೇಂದ್ರ ರಾಜೀನಾಮೆ ನೀಡಿದ್ದರು.
ಈ ಘಟನೆ ಸಂಬಂಧ ಶಿವಮೊಗ್ಗದ ವಿನೋಭಾನಗರ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಚಂದ್ರಶೇಖರ್ ಪತ್ನಿ ನೀಡಿದ್ದ ದೂರು ಆಧರಿಸಿ ಸಿಐಡಿ ತನಿಖೆ ಕೈಗೆತ್ತಿಕೊಂಡಿತ್ತು. ಡೆತ್ ನೋಟ್ ಆಧರಿಸಿ ತನಿಖೆ ಮಾಡಿರುವ ಸಿಐಡಿ ಅಧಿಕಾರಿಗಳನ್ನು ಆರೋಪಿಗಳಾಗಿ ಮಾಡಿ ಚಾರ್ಜ್‌ಶೀಟ್ ಸಲ್ಲಿಸಿದೆ.