ಸೊರಬ: ಡೆಂಘೆ ನಿಯಂತ್ರಣಕ್ಕಾಗಿ ಸಾರ್ವಜನಿಕರು ಮನೆ ಪರಿಸರದಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಸುತ್ತಮುತ್ತಲಿನ ಪ್ರದೇಶದಲ್ಲಿ ನೀರು ಸಂಗ್ರಹವಾಗದಂತೆ ಎಚ್ಚರ ವಹಿಸಬೇಕು ಎಂದು ತಾಲೂಕು ಆರೋಗ್ಯಾಧಿಕಾರಿ ಡಾ. ವಿನಯ್ ಪಾಟೀಲ್ ಹೇಳಿದರು.
ಪಟ್ಟಣದಲ್ಲಿ ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ವಿಭಾಗ, ಸಾರ್ವಜನಿಕ ಆಸ್ಪತ್ರೆ ಹಾಗೂ ಪುರಸಭೆಯಿಂದ ಏರ್ಪಡಿಸಿದ್ದ ರಾಷ್ಟ್ರೀಯ ಡೆಂಘೆ ದಿನಾಚರಣೆ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು.
ಡೆಂಘೆ ತಡೆಗಟ್ಟುವ ಕ್ರಮಗಳ ಬಗ್ಗೆ ಸಾವಜನಿಕರು ಜಾಗೃತರಾಗಬೇಕು. ಉಪಯೋಗಿಸದ ತೊಟ್ಟಿ, ಮಡಕೆ, ಟೈರ್ ಮತ್ತಿತರ ವಸ್ತುಗಳಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ಇದರಿಂದ ಸೊಳ್ಳೆಗಳ ನಿಯಂತ್ರಣ ಸಾಧ್ಯವಿದೆ ಎಂದು ತಿಳಿಸಿದರು.
ಪುರಸಭೆ ಮುಖ್ಯಾಧಿಕಾರಿ ಟಿ.ಬಾಲಚಂದ್ರ ಮಾತನಾಡಿ, ಪುರಸಭೆಯಿಂದ ಪ್ರತಿ ದಿನ ಕಸ ಸಂಗ್ರಹ ವಾಹನದ ಮೂಲಕ ಡೆಂಘೆ ಕುರಿತು ಜಾಗೃತಿ ಧ್ವನಿಮುದ್ರಿಕೆ ಪ್ರಸಾರ ಮಾಡಲಾಗುತ್ತಿದೆ. ಪಟ್ಟಣದ ಸ್ವಚ್ಛತೆಗೆ ಮೊದಲ ಆದ್ಯತೆ ನೀಡಲಾಗುತ್ತಿದೆ. ಜನತೆ ಸಂಗ್ರಹಿಸಿದ ನೀರನ್ನು ವಾರಕ್ಕೊಮ್ಮೆಯಾದರೂ ಬದಲಿಸಬೇಕು. ಬಯಲಿನಲ್ಲಿರುವ ತ್ಯಾಜ್ಯ ವಸ್ತುಗಳಲ್ಲಿ ನೀರು ಸಂಗ್ರಹವಾಗದಂತೆ ನೋಡಿಕೊಳ್ಳಬೇಕು ಹಾಗೂ ಸೂಕ್ತ ವಿಲೇವಾರಿ ಮಾಡಬೇಕು ಎಂದರು.
ಪಟ್ಟಣದ ಮುಖ್ಯರಸ್ತೆ, ಚಾಮರಾಜಪೇಟೆ, ಚಿಕ್ಕಪೇಟೆ, ಡಾ. ಬಿ.ಆರ್.ಅಂಬೇಡ್ಕರ್ ಬಡಾವಣೆ, ಸಾಗರ ರಸ್ತೆ ಸೇರಿದಂತೆ ವಿವಿಧೆಡೆ ಜಾಗೃತಿ ಜಾಥಾ ನಡೆಸಲಾಯಿತು. ಸಾರ್ವಜನಿಕರಿಗೆ ಕರಪತ್ರ ಹಂಚಲಾಯಿತು.
ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಪದ್ಮಾವತಿ, ತಾಲೂಕು ಹಿರಿಯ ಆರೋಗ್ಯಾಧಿಕಾರಿ ಯಶವಂತ ರಾಜ್, ಹಿರಿಯ ಮಹಿಳಾ ಆರೋಗ್ಯಾಧಿಕಾರಿ ಗಾಯತ್ರಿ, ಪುರಸಭೆ ಹಿರಿಯ ಆರೋಗ್ಯ ನಿರೀಕ್ಷಕ ರಣಜಿತ್‌ಕುಮಾರ್, ಆರೋಗ್ಯ ಇಲಾಖೆ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಜಾಥಾದಲ್ಲಿ ಪಾಲ್ಗೊಂಡಿದ್ದರು.