ನ್ಯೂಸ್

ತಿರುವನಂತಪುರಂ ಏರ್​ಪೋರ್ಟ್​ ಖಾಸಗೀಕರಣ: ಸುಪ್ರೀಂ ಕೋರ್ಟ್​ ಮೆಟ್ಟಿಲೇರಿದ ಕೇರಳ ಸರ್ಕಾರ

ತಿರುವನಂತಪುರಂ (ಕೇರಳ): ತಿರುವನಂತಪುರಂ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಗುಜರಾತ್​ ಮೂಲದ ಉದ್ಯಮಿ ಅದಾನಿ ಸಮೂಹದ ಕಂಪನಿಗೆ ಗುತ್ತಿಗೆ ನೀಡಲು ಮುಂದಾಗಿರುವ ಕೇಂದ್ರ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಕೇರಳ ಸರ್ಕಾರ ಮಂಗಳವಾರ ಸುಪ್ರೀಂಕೋರ್ಟ್​ ಮೆಟ್ಟಿಲೇರಿದೆ.

ಕೇರಳದ ಹೈಕೋರ್ಟ್​ ಕಳೆದ ತಿಂಗಳು ಅರ್ಜಿಯನ್ನು ತಿರಸ್ಕರಿಸಿದ ಬಳಿಕ ಸುಪ್ರೀಂ ಮೊರೆ ಹೋಗಲು ಸರ್ಕಾರ ಮುಂದಾಗಿದ್ದು, ಕೇಂದ್ರ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಲು ಸರ್ವಪಕ್ಷಗಳ ಸಭೆಯಲ್ಲಿ ನಿರ್ಧರಿಸಲಾಗಿದೆ.

ತಿರುವನಂತಪುರಂ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಖಾಸಗಿ ವ್ಯಕ್ತಿಗೆ ಮಾರಾಟ ಮಾಡುವ ಸರ್ಕಾರದ ನಿರ್ಧಾರ ಹಗಲು ದರೋಡೆಯಾಗಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಕೇರಳ ಸಚಿವ ಕಡಂಪಲ್ಲಿ ಸುರೇಂದ್ರನ್​ ಕಿಡಿಕಾರಿದ್ದು, ವಿಮಾನ ನಿಲ್ದಾಣಕ್ಕಾಗಿ ಜಮೀನು ಸೇರಿದಂತೆ ರಾಜ್ಯ ಎಲ್ಲವನ್ನು ಮಾಡಿದೆ ಎಂದಿದ್ದಾರೆ.

ಈಗಾಗಲೇ ಕರ್ನಾಟಕದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಅದಾನಿ ಗ್ರೂಪ್​ ಗುತ್ತಿಗೆ ಪಡೆದುಕೊಂಡಿದೆ. ಖಾಸಗೀಕರಣ ಪ್ರಕ್ರಿಯೆ ಭಾಗವಾಗಿ ವಿಮಾನ ನಿಲ್ದಾಣಗಳ ಕಾರ್ಯಾಚರಣೆ, ನಿರ್ವಹಣೆ ಮತ್ತು ಅಭಿವೃಧಿಯ ಗುತ್ತಿಗೆಯನ್ನು ಅದಾನಿ ಗ್ರೂಪ್​ ಪಡೆದಿದೆ. ವಿಮಾನ ನಿಲ್ದಾಣಗಳಲ್ಲಿ ಕಸ್ಟಮ್ಸ್, ವಲಸೆ ಮತ್ತು ಭದ್ರತಾ ಸೇವೆಗಳನ್ನು ಒದಗಿಸುವ ಬಗ್ಗೆ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ (ಎಎಐ) ಅದಾನಿ ಸಮೂಹದ ಮೂರು ಕಂಪನಿಗಳೊಂದಿಗೆ ಒಪ್ಪಂದ ಮಾಡಿಕೊಂಡಿದೆ. (ಏಜೆನ್ಸೀಸ್​)