ನ್ಯೂಸ್

ಸರ್ಕಾರಿ ಬಸ್ ಫುಲ್! ಶಾಲೆಗೆ ತೆರಳಲು ಜೆಸಿಬಿ ಏರಿದ ವಿದ್ಯಾರ್ಥಿಗಳು

ಕೊಪ್ಪಳ: ರಾಜ್ಯ ಸರ್ಕಾರ ಸಾರಿಗೆ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಶಕ್ತಿ ಯೋಜನೆ ಜಾರಿ ಮಾಡಿದ ಬೆನ್ನಲ್ಲೇ ಸಾರಿಗೆ ಬಸ್‌ಗಳಿಗೆ ಭಾರೀ ಡಿಮಾಂಡ್ ಸೃಷ್ಟಿಯಾಗಿದೆ. ಸರ್ಕಾರಿ ಬಸ್​ಗಳು ಅಧಿಕ ಪ್ರಯಾಣಿಕರಿಂದ ಭರ್ತಿಯಾಗುತ್ತಿವೆ. ಹೀಗಾಗಿ ಮುಂಜಾನೆ ಶಾಲಾ-ಕಾಲೇಜಿಗೆ ತೆರಳಲು ಬಸ್​ಗಳನ್ನೇ ನಂಬಿಕೊಂಡಿದ್ದ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗುತ್ತಿದೆ.

ಇದೀಗ ಸಾರಿಗೆ ಬಸ್​ಗಳು ಅಧಿಕ ಪ್ರಯಾಣಿಕರಿಂದ ಭರ್ತಿಯಾಗುತ್ತಿದ್ದು, ಇದರ ಸಮಸ್ಯೆ ವಿದ್ಯಾರ್ಥಿಗಳಿಗೂ ತಟ್ಟಿದೆ. ಶಾಲಾ-ಕಾಲೇಜಿಗೆ ತೆರಳಲು ವಿದ್ಯಾರ್ಥಿಗಳು ಪರದಾಟ ಅನುಭವಿಸುತ್ತಿದ್ದಾರೆ. ಈ ನಡುವೆ ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕಿನ ಶಾಖಾಪೂರ ಗ್ರಾಮದಿಂದ ಹಿರೇಅರಳಹಳ್ಳಿ ಗ್ರಾಮಕ್ಕೆ ವಿದ್ಯಾರ್ಥಿಗಳು ಬಸ್​ ಇಲ್ಲದೆ, ಜೆಸಿಬಿ ಮೂಲಕ ತೆರಳಿದ್ದಾರೆ.

ಪ್ರಾಣದ ಹಂಗು ತೊರೆದು ಜೆಸಿಬಿ ಮೂಲಕ ವಿದ್ಯಾರ್ಥಿಗಳು ಪ್ರಯಾಣಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಸಮರ್ಪಕ ಬಸ್ ವ್ಯವಸ್ಥೆ ಇಲ್ಲದೆ ಪ್ರಯಾಣಿಕರು ಹಾಗೂ ವಿದ್ಯಾರ್ಥಿಗಳು ಪರದಾಡುವಂತಾಗಿದ್ದು, ಸಾರ್ವಜನಿಕರು ವ್ಯವಸ್ಥೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಬಸ್ ಇಲ್ಲದೆ ವಿದ್ಯಾರ್ಥಿಗಳ ಪ್ರತಿಭಟನೆ

ಮಹಿಳೆಯರಿಗೆ ರಾಜ್ಯಾದ್ಯಂತ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿದ ನಂತರದ ದಿನಗಳಲ್ಲಿ ಸರ್ಕಾರಿ ಬಸ್​ಗಳು ಹೆಚ್ಚಿನ ಸಂಖ್ಯೆಯ ಪ್ರಯಾಣಿಕರಿಂದ ತುಂಬಿ ತುಳುಕುತ್ತಿವೆ. ಇದರಿಂದ ಶಾಲಾ-ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳಿಗೆ ಸಾಕಷ್ಟು ಸಮಸ್ಯೆ ಉಂಟಾಗುತ್ತಿದೆ. ಇದನ್ನು ವಿರೋಧಿಸಿ ಕಳೆದ ಎರಡು ದಿನಗಳಿಂದ ರಾಜ್ಯದ ವಿವಿಧೆಡೆ ವಿದ್ಯಾರ್ಥಿಗಳು ಪ್ರತಿಭಟಿಸಿದ್ದಾರೆ.