ಬೆಂಗಳೂರು ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್ಸಿ) ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳ ನಡುವಿನ ಜಟಾಪಟಿ ಇದೀಗ ಬೀದಿ ರಂಪವಾಗಿದೆ.
ಕಾರ್ಯದರ್ಶಿ ಅವರು ಸತತವಾಗಿ ತಮ್ಮ ಅಧಿಕಾರವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆಂದು ಆರೋಪಿಸಿ ಕೆಪಿಎಸ್ಸಿ ಅಧ್ಯಕ್ಷ ಶಿವಶಂಕರಪ್ಪ ಎಸ್. ಸಾಹುಕಾರ್ ಅವರು ಸಾಕ್ಷ್ಯ ಸಮೇತ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಪತ್ರ ಬರೆದಿದ್ದಾರೆ.
ತಮ್ಮ ನಿರ್ಧಾರಗಳನ್ನು ಸರಿಪಡಿಸಿಕೊಳ್ಳುವಂತೆ ಸೂಚಿಸಿ ಏ.28ರಂದು ಕಾರ್ಯದರ್ಶಿಗೆ ನೋಟಿಸ್ ಜಾರಿಮಾಡಲಾಗಿತ್ತು. ಆ ಬಳಿಕವೂ ತಮ್ಮ ನಡವಳಿಕೆಯನ್ನು ಸರಿಪಡಿಸಿಕೊಂಡಿಲ್ಲದ ಕಾರಣದಿಂದ ಸೂಕ್ತ ತಿಳಿವಳಿಕೆ ನೀಡುವಂತೆ ಮೇ 17ರಂದು ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದು ಖುದ್ದಾಗಿ ಭೇಟಿ ಮಾಡಿ ಮನವಿ ಸಲ್ಲಿಸಲಾಗಿತ್ತು.
ಜೂ.3ರಂದು ಮುಖ್ಯಮಂತ್ರಿಗಳನ್ನೂ ಭೇಟಿ ಮಾಡಲಾಗಿದೆ. ಇಷ್ಟೆಲ್ಲಾ ಬೆಳವಣಿಗೆಯಾದರೂ ಆಯೋಗದ ಕಾರ್ಯದರ್ಶಿ ತಮ್ಮ ನಡವಳಿಕೆಯಲ್ಲಿ ಯಾವುದೇ ಬದಲಾವಣೆ ಮಾಡಿಕೊಂಡಿಲ್ಲ ಎಂದು ಆರೋಪಿಸಿದ್ದಾರೆ.